ಕನ್ನಡಪ್ರಭ ವಾರ್ತೆ ಅಥಣಿ
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದ ಧೀಮಂತ ನಾಯಕ. ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಕ್ರಾಂತಿ ಮಾಡಿದ, ಪರಿವರ್ತನೆಯ ಹರಿಕಾರ ಎಂದು ಸಾಹಿತಿ ಹಾಗೂ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಪ್ರಿಯಂವದಾ ಹುಲಗಬಾಳಿ ಅಭಿಪ್ರಾಯಪಟ್ಟರು.ತಾಪಂ ಸಭಾಂಗಣದಲ್ಲಿ ಜಿಪಂ, ತಾಲೂಕಾಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಶ್ರೀಮಂತಿಕೆಯ ಮನೆತನದಲ್ಲಿ ಜನಿಸಿದ ಡಿ.ದೇವರಾಜ ಅರಸು ಅವರು ಉತ್ತಮ ಕುಸ್ತಿಪಟುವಾಗಿದ್ದರು. ಸುಮಾರು 8 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಅವರು, ಹಿಂದುಳಿದ ವರ್ಗಗಳ ಅಭಿವೃದ್ಧಿ, ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ ಧೀಮಂತ ನಾಯಕ.ಬ್ಯಾಂಕ್ ರಾಷ್ಟ್ರೀಕರಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆ ಸ್ಥಾಪನೆ, ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿನಿಲಯಗಳ ಸ್ಥಾಪನೆ, ಜೀತ ಪದ್ಧತಿ ನಿರ್ಮೂಲನೆ ಮಾಡಿ ಊಳುವವನೇ ಹೊಲದ ಒಡೆಯ ಯೋಜನೆ ಜಾರಿ, ಹಾವನೂರು ವರದಿ ಜಾರಿ, ಭೂಸುಧಾರಣೆ ಕಾಯ್ದೆ ಜಾರಿ ಸೇರಿ ಹಲವು ಜನಪರ ಯೋಜನೆ ಜಾರಿಗೆ ತಂದಿರುವ ಕೀರ್ತಿ ಅರಸರದು. ಅವರು ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಬಡವರಿಗಾಗಿ ತಮ್ಮ ಬದುಕನ್ನು ಸವೆಸಿದರು. 8 ವರ್ಷ ರಾಜಕಾರಣದಲ್ಲಿ ಧ್ರುವತಾರೆಯಾಗಿ ಮಿಂಚಿದವರು’ ಎಂದು ಬಣ್ಣಿಸಿದರು.
ಅಧ್ಯಕ್ಷತೆ ವಹಿಸಿದ್ದ ಅಥಣಿ ತಹಸೀಲ್ದಾರ್ ದಿನೇಶಕುಮಾರ ಮೀನಾ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ರಾಜ್ಯದಲ್ಲಿ ಉತ್ತಮ ಯೋಜನೆ ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಮಾಡಿರುವ ಸುಧಾರಣೆ ಹಾಗೂ ಅವರ ಸಾಧನೆ ಸ್ಮರಿಸುವುದು ನಮ್ಮೆಲ್ಲರ ಅದ್ಯ ಕರ್ತವ್ಯ ಎಂದು ಹೇಳಿದರು.ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ ಹೊಂದಿದ ಹಿಂದುಳಿದ ವರ್ಗಗಳ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ವೆಂಕಟೇಶ ಕುಲಕರ್ಣಿ, ಕೃಷಿ ಅಧಿಕಾರಿ ನಿಂಗನಗೌಡ ಬಿರಾದಾರ ಸೇರಿ ಇತರರು ಉಪಸ್ಥಿತರಿದ್ದರು. ವೆಂಕಟೇಶ ಕುಲಕರ್ಣಿ ಸ್ವಾಗತಿಸಿದರು. ಸಂಗಮೇಶ ಹಚಡದ ನಿರೂಪಿಸಿದರು. ಎ.ಎಸ್. ಸತಿಗೌಡರ ವಂದಿಸಿದರು.