ಅಭಿವೃದ್ಧಿ ದೃಷ್ಟಿಯಿಂದ ದಳ-ಕಮಲ ದೋಸ್ತಿ

KannadaprabhaNewsNetwork |  
Published : Jun 17, 2025, 01:33 AM IST
ಶ್ರೀಗಳ ದರ್ಶನ  ಪಡೆದ ನಿಖಿಲ್ ಕುಮಾರಸ್ವಾಮಿ | Kannada Prabha

ಸಾರಾಂಶ

ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಮ್ಮಿಕೊಂಡಿರುವ ಜನರೊಂದಿಗೆ ಜೆಡಿಎಸ್ ರಾಜ್ಯ ಪ್ರವಾಸ ವಿದ್ಯುಕ್ತವಾಗಿ ತುಮಕೂರಿನಿಂದ ಆರಂಭಗೊಂಡಿತು

ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಮ್ಮಿಕೊಂಡಿರುವ ಜನರೊಂದಿಗೆ ಜೆಡಿಎಸ್ ರಾಜ್ಯ ಪ್ರವಾಸ ವಿದ್ಯುಕ್ತವಾಗಿ ತುಮಕೂರಿನಿಂದ ಆರಂಭಗೊಂಡಿತು.ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸೋಮವಾರ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಮಾಡಿ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ತಡೆ ಹಿಡಿದಿದೆ. ಈ ಚುನಾವಣೆಗಳನ್ನು ನಡೆಸಲು ಸರ್ಕಾರ ಮನಸ್ಸು ಮಾಡಬೇಕಿದೆ ಎಂದ ಅವರು ಶೀಘ್ರವಾಗಿ ಈ ಚುನಾವಣೆಗಳನ್ನು ನಡೆಸಬೇಕು ಎಂಬುದು ನನ್ನ ಮತ್ತು ನಮ್ಮ ಪಕ್ಷದ ಆಗ್ರಹವಾಗಿದೆ ಎಂದು ತಿಳಿಸಿದರು. ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗಲ್ಲ. ಸದಾ ಕಾಲ ಜೆಡಿಎಸ್ ಪಕ್ಷದ ಪರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೋರಾಟ ನಡೆಸುತ್ತಾ ಕಾರ್ಯಕರ್ತರು ಹಾಗೂ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿದ್ದರೂ ಸಹ ಶೇ. 20 ರಷ್ಟು ಮತಗಳ ಷೇರನ್ನು ಹೆಚ್ಚಿಸಿಕೊಂಡಿದೆ. ಚುನಾವಣೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ. ಇದನ್ನು ಸಮಚಿತ್ತವಾಗಿ ಸ್ವೀಕರಿಸುವ ಮನಸ್ಥಿತಿ ನಮ್ಮ ಪಕ್ಷದವರಿಗಿದೆ ಎಂದರು.ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಜೆಡಿಎಸ್-ಬಿಜೆಪಿ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿವೆ. ರಾಜ್ಯದ ಹಿತಕ್ಕಾಗಿ ಈ ಹೊಂದಾಣಿಕೆ ಮುಂದುವರೆಯಲಿದೆ ಎಂದು ಅವರು ಹೇಳಿದರು. ನವೆಂಬರ್-ಡಿಸೆಂಬರ್‌ನಲ್ಲಿ ನಡೆಯುತ್ತೆ ಎಂದು ಹೇಳಲಾಗುತ್ತಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗೂ ಹೊಂದಾಣಿಕೆ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ನವೆಂಬರ್ ನಂತರ ಏನು ಬೆಳವಣಿಗೆ ಆಗತ್ತದೆ ಎಂಬುದನ್ನು ನೋಡೋಣ ಎಂದು ಚುಟುಕಾಗಿ ಉತ್ತರಿಸಿದರು. ಹೇಮಾವತಿ ಎಕ್ಸಪ್ರೆಸ್‌ ಲಿಂಕ್ ಕೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಹೇಮಾವತಿ ಜಲಾಶಯದಿಂದ ಮಂಡ್ಯ, ರಾಮನಗರ, ಹಾಸನ, ತುಮಕೂರು ಈ ಎಲ್ಲ ಜಿಲ್ಲೆಗಳ ರೈತರು ನೀರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದುವರೆಗೂ ರೈತರ ಸಭೆ ಕರೆದು ಅವರ ಸಮಸ್ಯೆ ಆಲಿಸಿ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.ಹೇಮಾವತಿ ಯೋಜನೆಗೆ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ, ಕುಮಾರಣ್ಣನವರ ಕಾಲಘಟ್ಟದಲ್ಲಿ ಈ ರೀತಿ ಘಟನೆ ನಡೆದಿದ್ದರೆ ಅವರು ರೈತರನ್ನು ಕೂರಿಸಿ ಸಮಸ್ಯೆ ಬಗೆಹರಿಸುತ್ತಿದ್ದರು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರು ಮತ್ತು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿನ್ನೆ ಜೆ.ಪಿ. ಭವನದಲ್ಲಿ ಅಧಿಕೃತವಾಗಿ ರಾಜ್ಯ ಪ್ರವಾಸಕ್ಕೆ ಚಾಲನೆ ಕೊಟ್ಟಿದ್ದಾರೆ. ಹಾಗಾಗಿ ಮುಂದಿನ 60 ದಿನಗಳ ಕಾಲ ರಾಜ್ಯಾದ್ಯಂತ ಪ್ರವಾಸ ನಡೆಸಿ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜೆಡಿಎಲ್‌ಪಿ ನಾಯಕ ಸಿ.ಬಿ. ಸುರೇಶ್‌ಬಾಬು, ಮಾಜಿ ಶಾಸಕ ಎಚ್. ನಿಂಗಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಟಿ.ಆರ್. ಆಂಜಿನಪ್ಪ, ಟಿ.ಆರ್. ನಾಗರಾಜು, ಶಾಂತಕುಮಾರ್, ಮಾಜಿ ಪಾಲಿಕೆ ಸದಸ್ಯರಾದ ಧರಣೇಂದ್ರಕುಮಾರ್, ಲಕ್ಷ್ಮೀ ನರಸಿಂಹರಾಜು, ನರಸಿಂಹಮೂರ್ತಿ, ಶ್ರೀನಿವಾಸ್, ಕುಂಭಣ್ಣ, ದಾಂಡೇಲಿ ಗಂಗಣ್ಣ, ಗಂಗಹನುಮಯ್ಯ, ಲೀಲಾವತಿ, ಮೆಡಿಕಲ್ ಮಧು, ಸೋಲಾರ್ ಕೃಷ್ಣಮೂರ್ತಿ, ದರ್ಶನ್ ಯಾದವ್, ಲಕ್ಷ್ಮಮ್ಮ ವೀರಣ್ಣಗೌಡ, ಸುಮ ಜಗನ್ನಾಥ್, ಲೀಲಾವತಿ, ಕುಸುಮ, ತಾಹೇರಾ ಬಾನು ಮತ್ತಿತರರು ಉಪಸ್ಥಿತರಿದ್ದರು.

---------------

ಡಿಕೆಶಿ ಬರಿ ಸುಳ್ಳು ಹೇಳುತ್ತಾರೆ

ಜೆಡಿಎಲ್‌ಪಿ ನಾಯಕ ಸಿ.ಬಿ. ಸುರೇಶ್‌ಬಾಬು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯಿಂದ ಜನ ಬೇಸತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬುದು ಎಲ್ಲರಿಗೂ ತಿಳಿದಿದೆ. ಇಂತಹ ಪಕ್ಷಕ್ಕೆ ಹೋಗುವ ಮಸ್ಥಿತಿಯನ್ನು ಜೆಡಿಎಸ್ ಶಾಸಕರು ಯಾರೂ ಹೊಂದಿಲ್ಲ ಎಂದರು. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಡಿಸಿಎಂ ಡಿಕೆಶಿ ಅವರು ಹೇಳಿದಂತೆ ನಮ್ಮ ಪಕ್ಷದ ಯಾವೊಬ್ಬ ಶಾಸಕರು ಆ ಪಕ್ಷಕ್ಕೆ ಹೋಗುವ ಮನಸ್ಥಿತಿ ಹೊಂದಿಲ್ಲ. ಡಿಕೆಶಿ ಬರೀ ಸುಳ್ಳು ಹೇಳುತ್ತಿದ್ದಾರೆ ಎಂದರು.

------------------------

ಬಿಜೆಪಿ ನಾಯಕರಿಂದ ಸ್ವಾಗತ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರಿಗೆ ಜಿಲ್ಲೆಯ ಬಿಜೆಪಿ ನಾಯಕರಿಂದ ಅದ್ದೂರಿ ಸ್ವಾಗತ ದೊರೆಯಿತು. ಶಾಸಕರಾದ ಸುರೇಶ್‌ಗೌಡ, ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಬಿಜೆಪಿ ಮುಖಂಡರುಗಳು ಸಿದ್ದಗಂಗಾ ಮಠದಲ್ಲಿ ನಿಖಿಲ್ ಕುಮಾರಸ್ವಾಮಿಯವರಿಗೆ ಪುಷ್ಪಹಾರ ಹಾಕಿ ಆತ್ಮೀಯವಾಗಿ ಬರ ಮಾಡಿಕೊಂಡರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ