ಕನ್ನಡಪ್ರಭ ವಾರ್ತೆ ಬೆಳಗಾವಿ
ಸರಳ ಸಜ್ಜನಿಕೆ ರಾಜಕಾರಣಿ, ಪ್ರಭಾವಿ ನಾಯಕರಾಗಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಮಲ್ಲೇಶ ಚೌಗಲೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದರು.ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ, ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ ಅವರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಹುದ್ದೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಪ್ರಭಾವಿ ನಾಯಕರು, ಸುಮಾರು 35-40 ವರ್ಷಗಳಿಂದ ಬಡ ಕುಟುಂಬಗಳಿಗೆ, ಸಾರ್ವಜನಕರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಮತ್ತು ಅಭಿವೃದ್ಧಿಗೆ ಅನುಕೂಲ ಆಗುವ ಸಾಕಷ್ಟು ಕೆಲಸಗಳನ್ನು ಮಾಡುತ್ತಾ ಬಂದಿದ್ದಲ್ಲದೆ, ತಮ್ಮ ವ್ಯಕ್ತಿತ್ವಕ್ಕೆ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಕಾರ್ಯ ನಿರ್ವಹಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾಲಿಗೆ ಚಕ್ರ ಕಟ್ಟಿಕೊಂಡು ಶೋಷಿತ ಸಮುದಾಯಗಳ ಪ್ರಗತಿ ಜತೆಗೆ ಇತರೆ ಸಮುದಾಯದ ಮುಖಂಡರನ್ನು ಒಗ್ಗೂಡಿಸಿ, ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿದ್ದಾರೆ. ಅವರ ಚಾಣಾಕ್ಷತನದಿಂದ ಕೆಲಸ ಮಾಡಿದ್ದಕ್ಕಾಗಿಯೇ ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲಲು ಅವರ ಪಾತ್ರವೂ ಇದೆ ಎಂದರು.ಕರ್ನಾಟಕದ ಜನಪ್ರಿಯ ರಾಜಕೀಯ ಮುತ್ಸದ್ದಿಯಾಗಿ ಹೊರಹೊಮ್ಮಿದ ಸತೀಶ್ ಜಾರಕಿಹೊಳಿ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಘೋಷಿಸಬೇಕು. ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಇನ್ನಷ್ಟು ಸಮರ್ಥವಾಗಿ ಮತ್ತು ಬಲಿಷ್ಠವಾಗಿ ಬೆಳೆಯಲು ಅನುಕೂಲವಾಗುತ್ತದೆ. ಆದ್ದರಿಂದ ತಕ್ಷಣವೇ ಸತೀಶ್ ಜಾರಕಿಹೊಳಿ ಅವರನ್ನು ಉಪ ಮುಖ್ಯಮಂತ್ರಿಯಾಗಿ ಘೋಷಿಸಬೇಕೆಂದು ಆಗ್ರಹಿಸಿದರು.
ದಲಿತ ಮುಖಂಡರಾದ ಮಹಾದೇವ ತಳವಾರ, ವಿನೋದ ವಿ. ಸೊಲ್ಲಾಪುರೆ, ಸುಧೀರ ಚೌಗಲೆ, ಮಹಾದೇವ ತಳವಾರ, ಸಿದ್ದಪ್ಪಾ ಕಾಂಬಳೆ, ಯಲ್ಲಪ್ಪಾ ಹುದಲಿ, ಸಂತೋಷ ಹಲಗೆಕರ್, ಗಜಾನನ ಸುಳಗೇಕರ್, ಪ್ರವೀಣ ಪೂಜಾರಿ, ಬಾವಕಣ್ಣ ಪಿರಗಾಣಿ, ಕರೆಪ್ಪ ಗುಡೇಣ್ಣವರ್, ರಮಾನಂದ ಮೇತ್ರಿ ಸೇರಿದಂತೆ ಅನೇಕ ಮುಖಂಡರು ಇದ್ದರು.