ಶಾ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

KannadaprabhaNewsNetwork |  
Published : Dec 29, 2024, 01:19 AM IST
ಪ್ರತಿಭಟನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್‌.ಅಂಬೇಡ್ಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ ನಗರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್‌.ಅಂಬೇಡ್ಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ ನಗರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಶನಿವಾರ ಬೆಳಗ್ಗೆ 10ಗಂಟೆ ಸುಮಾರಿಗೆ ನಗರದ ಡಾ.ಬಿ.ಆರ್ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಅಮಿತ್ ಶಾ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಬಳಿಕ ಅಮಿತ್ ಶಾ ಅವರ ಅಣಕು ಶವಯಾತ್ರೆ ಮಾಡಿ ಖಂಡನೆ ವ್ಯಕ್ತಪಡಿಸಿದರು. ಅಲ್ಲದೆ ಶಾ ಅವರ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಸುಟ್ಟುಹಾಕಿದರು.

12 ಗಂಟೆಯ ಬಳಿಕ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಜಮಾಯಿಸಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದರು. ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ನಿಯೋಜಿಸಲಾಗಿತ್ತು. ಅಂಬೇಡ್ಕರ ಸರ್ಕಲ್ ಹಾಗೂ ಅದರ ಎದುರಿಗಿನ ಮುಖ್ಯ ರಸ್ತೆಯನ್ನೇ ಬಂದ್ ಮಾಡಿ ಹಲಗೆ ಹೊಡೆದು ಪ್ರತಿಭಟನೆ ನಡೆಸಿದ ಹೋರಾಟಗಾರರು, ಕೊನೆಗೆ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ ದಲಿತ ಸಂಘಟನೆಗಳ ಮಹಾ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಲಂಬು ಮಾತನಾಡಿ, ಡಾ.ಅಂಬೇಡ್ಕರ ಅವರು ದೇಶಕ್ಕೆ ನೀಡಿದ ಸಂವಿಧಾನದಿಂದಲೇ ಇಂದು ಇವರೆಲ್ಲ ಅಧಿಕಾರ ಅನುಭವಿಸುತ್ತಿದ್ದಾರೆ. ಸಂವಿಧಾನ ಶಿಲ್ಪಿ ಎಂದೇ ಖ್ಯಾತರಾಗಿರುವ ಅಂಬೇಡ್ಕರ ಅವರ ಸಂವಿಧಾನ ಬಡವರು, ದೀನದಲಿತರು, ಹಿಂದುಳಿದವರು ಪ್ರತಿಯೊಬ್ಬರಿಗೂ ರಾಷ್ಟ್ರದಲ್ಲಿ ಸಮಾನ ನ್ಯಾಯ ಒದಗಿಸಲಾಗಿದೆ. ಜಗತ್ತಿಗೆ ಮಾದರಿಯಾಗಿದೆ. ಇಂತಹವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅಮಿತ್ ಶಾ ಅವರು ತಕ್ಷಣ ರಾಜೀನಾಮೆ ಕೊಡಬೇಕು. ಅಲ್ಲದೆ ಅವರನ್ನು ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ದಲಿತ ಮುಖಂಡ ಜಿತೇಂದ್ರ ಕಾಂಬಳೆ ಮಾತನಾಡಿ, ಅಮಿತ್ ಶಾ ಅವರ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು. ಅಂಬೇಡ್ಕರರನ್ನು ಅವಮಾನಿಸಿದ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದೇ ವೇಳೆ ಅಪರ್ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್‌ಪಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.ನಗರದ

ಪ್ರಮುಖ ರಸ್ತೆಯೇ ಬಂದ್:

ನಗರದ ಸ್ಟೇಷನ್‌ನಿಂದ ಗಾಂಧಿ ಚೌಕ್‌ ತಲುಪಲು ಇದ್ದ ಮುಖ್ಯ ರಸ್ತೆಯನ್ನೇ ಡಾ.ಅಂಬೇಡ್ಕರ ಸರ್ಕಲ್ ಎದುರಿಗೆ ಬಂದ್ ಮಾಡಲಾಗಿತ್ತು. ಬೇರೆ ಮಾರ್ಗಗಳಿಂದ ಸುತ್ತುವರಿದು ಸಂಚಾರ ಮಾಡಿ ವಾಹನ ಸವಾರರು ಪರದಾಡುವಂತಾಯಿತು. ಈ ರಸ್ತೆಯಲ್ಲಿ ಜನರು ಹಾಗೂ ವಾಹನಗಳ ಸಂಚಾರವಿಲ್ಲದ್ದರಿಂದ ರಸ್ತೆ ಬಿಕೋ ಎನ್ನುತ್ತಿತ್ತು. ಪ್ರತಿಭಟನೆಯಲ್ಲಿ ಮುಖಂಡರಾದ ಮಥಿನಕುಮಾರ ದೇವದರ, ಸುನೀಲ ಸೂರ್ಯವಂಶಿ, ರಾಘು ಕಲಮೇಶ್ವರ, ಮಹಾದೇವ ಕಾಂಬಳೆ, ಪರಶುರಾಮ ಛಲಭಾವಿ ಸೇರಿದಂತೆ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು, ಅಂಬೇಡ್ಕರ ಅಭಿಮಾನಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ