ಕನ್ನಡಪ್ರಭ ವಾರ್ತೆ ಉಡುಪಿ
ಕಾಂಗ್ರೆಸ್ ಪಕ್ಷವು ಕೇವಲ ಓಟಿಗಾಗಿ ಮಾತ್ರ ದಲಿತರನ್ನು ಓಲೈಸುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಲಿತ ಸಮಾಜ ಒಂದಾಗಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನೆಹರು ಅವರೇ ಮೀಸಲಾತಿಯನ್ನು ವಿರೋಧಿಸಿ ತನ್ನ ಅಂದಿನ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದರು. ಎರಡು ಬಾರಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಮತ್ತು ಅವರನ್ನು ಸೋಲಿಸಿದವರಿಗೆ ಪದ್ಮ ಪ್ರಶಸ್ತಿ ನೀಡಿರುವುದು ಕಾಂಗ್ರೆಸ್ ನ ದಲಿತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಮಮತಾ, ಕೇಜ್ರಿವಾಲ್ ಪ್ರಸ್ತಾಪಿಸಿದರೂ ಸಿದ್ದರಾಮಯ್ಯ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡೋಣ ಎಂದಿರುವುದು ಇದಕ್ಕೆ ತಾಜಾ ಉದಾಹರಣೆ ಎಂದವರು ಹೇಳಿದರು.ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ, ಎಸ್.ಸಿ.ಪಿ. - ಟಿ.ಎಸ್.ಪಿ. ನಿಧಿಯ 25,000 ಕೋಟಿ ರು.ಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿ, ಮುಸಲ್ಮಾನರಿಗೆ 10 ಸಾವಿರ ಕೋಟಿ ರು. ಘೋಷಣೆ ಮಾಡಿರುವುದು ಸಿದ್ದರಾಮಯ್ಯನವರ ದಲಿತ ವಿರೋಧಿ ನೀತಿಯನ್ನು ತೋರಿಸುತ್ತಿದೆ. ತನ್ನದೇ ಪಕ್ಷದ ದಲಿತ ಶಾಸಕನ ಮನೆಗೆ ಬೆಂಕಿ ಬಿದ್ದಾಗ ಸುಮ್ಮನೆ ಕುಳಿತಿದ್ದ ಕಾಂಗ್ರೆಸ್ ನಾಯಕರು, ನಾವು ದಲಿತರ ಅಭಿವೃದ್ಧಿ ಮಾಡುತ್ತೇವೆ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದವರು ಟೀಕಿಸಿದರು.
ಮೋದಿ ಸರ್ಕಾರ ಅಂಬೇಡ್ಕರ್ ರವರಿಗೆ ಸಂಬಂಧಿಸಿದ 5 ಸ್ಥಳಗಳನ್ನು ಅಭಿವೃದ್ಧಿಗೆ ‘ಪಂಚತೀರ್ಥ’ ಯೋಜನೆ, ದೆಹಲಿಯಲ್ಲಿ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ ನಿರ್ಮಾಣ, ಕರ್ನಾಟಕದಲ್ಲಿ ಅಂಬೇಡ್ಕರ್ ಅವರು ಭೇಟಿ ನೀಡಿದ 10 ಸ್ಥಳಗಳನ್ನು 20 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದೆ ಎಂದರು..ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಪ್ರ. ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ., ಎಸ್.ಸಿ. ಮೋರ್ಚಾ ಜಿಲ್ಲಾ ಮುಖಂಡರಾದ ಮಾಧವ ಸಾಲಿಗ್ರಾಮ, ಹಿರಿಯಣ್ಣ ಉಪ್ಪೂರು, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.