ಹಾಸನಾಂಬ ನೃತ್ಯ ವೈಭವದ ರಾಜ್ಯ ಮಟ್ಟದ ನೃತ್ಯಸ್ಪರ್ಧೆ ಕಾರ್ಯಕ್ರಮ
ಹಾಸನಾಂಬ ಜಾತ್ರೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ನೃತ್ಯ ವೈಭವ ಕಾರ್ಯಕ್ರಮವನ್ನು ಆಯೋಜಿಸಿರುವುದು ಹಾಸನ ಜಿಲ್ಲೆಯ ಇತಿಹಾಸದಲ್ಲಿ ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು.
ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಹಾಗೂ ಕನ್ನಡ-ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಗುರುವಾರ ಸಂಜೆ ಆಯೋಜಿಸಿದ್ದ ಹಾಸನಾಂಬ ನೃತ್ಯ ವೈಭವ ರಾಜ್ಯ ಮಟ್ಟದ ನೃತ್ಯಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ವರ್ಷದ ಜಾತ್ರಾ ಮಹೋತ್ಸವ ಬಹಳ ಅಚ್ಚುಕಟ್ಟಾಗಿ ನಡೆಯಲಿದೆ ಎನ್ನುವ ವಿಶ್ವಾಸ ಮೂಡಿದೆ. ಸಾರ್ವಜನಿಕ ಭಕ್ತಾದಿಗಳ ಸಹಕಾರವನ್ನೂ ಈ ನಿಟ್ಟಿನಲ್ಲಿ ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದರು.
ನೃತ್ಯ ವೈಭವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ೨೦ ತಂಡಗಳು ಭಾಗವಹಿಸಿದ್ದು, ಪ್ರಥಮ ಸ್ಥಾನ ಪಡೆದವರಿಗೆ ೧ ಲಕ್ಷ ರು. ಹಾಗೂ ದ್ವಿತೀಯ ಬಹುಮಾನವಾಗಿ ೫೦ ಸಾವಿರ ರುಪಾಯಿ ನಗದು ಬಹುಮಾನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಶಾಸಕ ಎಚ್.ಪಿ.ಸ್ವರೂಪ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಬಿ.ಆರ್.ಪೂರ್ಣಿಮಾ, ಉಪ ವಿಭಾಗಾಧಿಕಾರಿ ಮಾರುತಿ, ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ತಾರಾನಾಥ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ಇದ್ದರು.