ಪೊಲೀಸ್ ಕ್ರೀಡಾಕೂಟದಲ್ಲಿ ಡಿಎಆರ್ ತಂಡ ಚಾಂಪಿಯನ್‌

KannadaprabhaNewsNetwork |  
Published : Nov 27, 2026, 03:00 AM IST
ಫೋಟೊ26ಬಿಕೆಟಿ2, ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ) | Kannada Prabha

ಸಾರಾಂಶ

ನವನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯಲ್ಲಿ ಕ್ರೀಡಾ ಮನೋಭಾವ, ದೈಹಿಕ ಸಾಮರ್ಥ್ಯ, ಶಿಸ್ತು ಹಾಗೂ ತಂಡದ ಮನೋಭಾವ ಬೆಳೆಸುವ ಉದ್ದೇಶದಿಂದ ಮೂರು ದಿನಗಳ ಕಾಲ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2026ಕ್ಕೆ ಅದ್ಧೂರಿ ತೆರೆ ಬಿದ್ದಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ನವನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯಲ್ಲಿ ಕ್ರೀಡಾ ಮನೋಭಾವ, ದೈಹಿಕ ಸಾಮರ್ಥ್ಯ, ಶಿಸ್ತು ಹಾಗೂ ತಂಡದ ಮನೋಭಾವ ಬೆಳೆಸುವ ಉದ್ದೇಶದಿಂದ ಮೂರು ದಿನಗಳ ಕಾಲ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2026ಕ್ಕೆ ಅದ್ಧೂರಿ ತೆರೆ ಬಿದ್ದಿತು.

ಮೂರು ದಿನಗಳ ಕಾಲ ನಡೆದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಬಾಗಲಕೋಟೆ ಡಿಎಆರ್ ವಿಭಾಗದ ರಾಜು ದಾಸರ ಹಾಗೂ ಡಿಸಿಆರ್‌ಬಿ ವಿಭಾಗದ ವಿದ್ಯಾ ಹಿರೇನಾಯಕ ಅವರು ವೈಯಕ್ತಿಕ ಚಾಂಪಿಯನ್‌ಶಿಪ್‌ ಪಡೆದುಕೊಂಡರು. ವಿವಿಧ ಸ್ಪರ್ಧೆಗಳಲ್ಲಿ ಒಟ್ಟಾರೆ ಉತ್ತಮ ಪ್ರದರ್ಶನ ನೀಡಿದ ಬಾಗಲಕೋಟೆ ಡಿಎಆರ್ ತಂಡವು ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿತು.

ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಬೆಳಗಾವಿ ವಲಯದ ಆರಕ್ಷಕ ಮಹಾನಿರೀಕ್ಷಕ ಸಂದೀಪ ಪಾಟೀಲ ಅವರು, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿ ಉತ್ತಮ ಸಾಧನೆ ಮಾಡಿರುವುದು ಸಂತಸ ತಂದಿದೆ.ಮೂರು ದಿನಗಳ ಕಾಲ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ನಡೆಯುವ ಪೊಲೀಸ್ ಕ್ರೀಡಾಕೂಟಗಳಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಹಾರೈಸಿದರು.

ಕಳೆದ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬಾಗಲಕೋಟೆ ಜಿಲ್ಲೆ 8ನೇ ಸ್ಥಾನ ಪಡೆದಿತ್ತು. ಈ ಬಾರಿ ಜಿಲ್ಲೆಯ ಕ್ರೀಡಾಪಟುಗಳು ಇನ್ನಷ್ಟು ಪರಿಶ್ರಮ ವಹಿಸಿ 1 ರಿಂದ 3ನೇ ಸ್ಥಾನದೊಳಗೆ ಬರಬೇಕು ಎಂಬ ಗುರಿ ಹೊಂದಬೇಕು. ಈ ನಿಟ್ಟಿನಲ್ಲಿ ಆಯ್ಕೆಯಾಗಿರುವ ಕ್ರೀಡಾಪಟುಗಳು ನಿರಂತರ ಅಭ್ಯಾಸ ನಡೆಸಬೇಕು. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಜಿಲ್ಲೆಯ ಕ್ರೀಡಾಪಟುಗಳಿಗೆ ಅಗತ್ಯವಾದ ತರಬೇತಿ ಹಾಗೂ ಮಾರ್ಗದರ್ಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಬೆಳಗಾವಿಯಲ್ಲಿ ಒಂದು ವಾರ ವಿಶೇಷ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ಆರಕ್ಷಕ ಮಹಾನಿರೀಕ್ಷಕ ಸಂದೀಪ ಪಾಟೀಲ ತಿಳಿಸಿದರು.ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ.ಎಂ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.----ಕೋಟ್‌ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ದೈಹಿಕ ಕ್ಷಮತೆ ಮಾತ್ರವಲ್ಲದೆ, ಮಾನಸಿಕ ದೃಢತೆ, ಆತ್ಮವಿಶ್ವಾಸ, ಶಿಸ್ತು ಹಾಗೂ ತಂಡದ ಮನೋಭಾವವೂ ವೃದ್ಧಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಸಿಬ್ಬಂದಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ರಾಜ್ಯ ಮಟ್ಟದಲ್ಲಿ ನಡೆಯುವ ಪೊಲೀಸ್ ಕ್ರೀಡಾಕೂಟಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಬೇಕು.ಸಂದೀಪ ಪಾಟೀಲ, ಬೆಳಗಾವಿ ವಲಯದ ಆರಕ್ಷಕ ಮಹಾನಿರೀಕ್ಷಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಗುರಿ
ರೈತರಿಗೆ ಪ್ರತಿ ಟನ್‌ಗೆ ₹3,825 ರಂತೆ ಬಿಲ್ ಪಾವತಿ