ದತ್ತಪೀಠ: ಮುಂದಿನ ಕ್ರಮಕ್ಕೆ ಸಂಪುಟ ಉಪ ಸಮಿತಿ ರಚನೆ

KannadaprabhaNewsNetwork |  
Published : Jan 19, 2024, 01:53 AM IST

ಸಾರಾಂಶ

ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದ ಧಾರ್ಮಿಕ ಪದ್ಧತಿ ಆಚರಣೆಗೆ ಸಂಬಂಧಿಸಿದ ಪ್ರಕರಣ ಸುಪ್ರೀಂ ಕೋರ್ಟ್‌ ನಲ್ಲಿದ್ದು, ಅದಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿಲುವು ಹಾಗೂ ಆಕ್ಷೇಪಣಾ ಹೇಳಿಕೆ ಸಲ್ಲಿಸಬೇಕಿದೆ. ಅದನ್ನು ಸಿದ್ಧಪಡಿಸುವ ಸಲುವಾಗಿ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

- ಸುಪ್ರೀಂಕೋರ್ಟ್‌ಗೆ ನಿಲುವು, ಆಕ್ಷೇಪಣೆ ಸಲ್ಲಿಕೆ ಬಗ್ಗೆ ಸಮಿತಿ ನಿರ್ಧಾರ- ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚನೆ: ಸಂಪುಟ ನಿರ್ಧಾರ

ಕನ್ನಡಪ್ರಭ ವಾರ್ತೆ ಬೆಂಗಳೂರುಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದ ಧಾರ್ಮಿಕ ಪದ್ಧತಿ ಆಚರಣೆಗೆ ಸಂಬಂಧಿಸಿದ ಪ್ರಕರಣ ಸುಪ್ರೀಂ ಕೋರ್ಟ್‌ ನಲ್ಲಿದ್ದು, ಅದಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿಲುವು ಹಾಗೂ ಆಕ್ಷೇಪಣಾ ಹೇಳಿಕೆ ಸಲ್ಲಿಸಬೇಕಿದೆ. ಅದನ್ನು ಸಿದ್ಧಪಡಿಸುವ ಸಲುವಾಗಿ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಸಚಿವ ಸಂಪುಟ ಸಭೆ ನಂತರ ಮಾಧ್ಯಮಗಳಿಗೆ ಈ ವಿವರ ನೀಡಿದ ಸಚಿವ ಎಚ್‌.ಕೆ.ಪಾಟೀಲ್‌, ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿಯಲ್ಲಿ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಅಧಿನಿಯಮ 1991ರ ಅನ್ವಯ 1947ರ ಆಗಸ್ಟ್‌ 15ರಲ್ಲಿ ಆಚರಿಸಲಾಗುತ್ತಿದ್ದ ಧಾರ್ಮಿಕ ಪದ್ಧತಿಗಳ ಸ್ವರೂಪ ಮತ್ತು ಗುಣ ಲಕ್ಷಣಗಳನ್ನು ಮುಂದುವರಿಸಿಕೊಂಡು ಹೋಗುವಂತೆ ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಆದರೆ, ಆ ಆದೇಶವನ್ನು ಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆ ರಿಟ್‌ ಅರ್ಜಿಯನ್ನು ಮಾನ್ಯ ಮಾಡಿದ್ದ ಹೈಕೋರ್ಟ್‌, ಸರ್ಕಾರದ ಆದೇಶವನ್ನು ರದ್ದು ಪಡಿಸಿತ್ತು.ನಂತರ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸೈಯದ್ ಗೌಸ್‌ ಮೊಹಿಯುದ್ದೀನ್‌ ಶಾಖಾದ್ರಿ ಎಂಬುವವರು ಸುಪ್ರೀಂ ಕೋರ್ಟನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಸರ್ವೋಚ್ಚ ನ್ಯಾಯಾಲಯಕ್ಕೆ ಲಿಖಿತ ಆಕ್ಷೇಪಣಾ ಹೇಳಿಕೆ ಸಲ್ಲಿಸಬೇಕಿದೆ. ಹೀಗಾಗಿ ಅದನ್ನು ಸಿದ್ಧಪಡಿಸಲು ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದರು.ಗೃಹ ಸಚಿವರನ್ನು ಸಂಪುಟ ಉಪಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಅವರೊಂದಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ, ಮುಜರಾಯಿ ಸಚಿವ, ಕಂದಾಯ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಈ ಸಮಿತಿಯು ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಿ, ಲಿಖಿತ ಆಕ್ಷೇಪಣಾ ಹೇಳಿಕೆ ದಾಖಲಿಸುವ ಸಂಬಂಧ ಶಿಫಾರಸುಗಳನ್ನು ಸಲ್ಲಿಸಬೇಕಿದೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌