ಕನ್ನಡಪ್ರಭ ವಾರ್ತೆ ಮಂಡ್ಯ
ಮೈಸೂರಿನಿಂದ ಆಗಮಿಸಿದ ಕೆಆರ್‌ಐಡಿಎಲ್‌ನ ಅಧೀಕ್ಷಕ ಅಭಿಯಂತರ ಗೋಪಾಲಪ್ಪ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಹೊಸ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಹಳೆಯ ಕಟ್ಟಡ ಸಾಮಗ್ರಿಗಳನ್ನು ಸಂಬಂಧಿತ ಇಲಾಖೆಗೆ ಹಸ್ತಾಂತರಿಸುವುದು ನಿಗಮದ ಅಧಿಕಾರಿಗಳ ಕರ್ತವ್ಯವಾಗಿದೆ ಎಂದರು.
ಮಂಡ್ಯ ಜಿಪಂ ಆವರಣದಲ್ಲಿ ನಿರ್ಮಿಸಿರುವ ಸಂಪನ್ಮೂಲ ಕೇಂದ್ರದ ಕಾಮಗಾರಿ ಆರಂಭಕ್ಕೂ ಮುನ್ನ ಇದ್ದ ಹಳೆಯ ಕಟ್ಟಡದ ಸಾಮಗ್ರಿಗಳನ್ನು ಜಿಲ್ಲಾ ಪಂಚಾಯ್ತಿ ಅಧಿಕಾರಿಗಳಿಗೆ ಹಸ್ತಾಂತರಿಸಬೇಕಾಗಿತ್ತು. ಆದರೆ, ಆ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸಿರುವ ಕುರಿತು ದಾಖಲೆಗಳೊಂದಿಗೆ ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಮಂಡ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಸೋಮಶೇಖರ್ ವಿರುದ್ಧ ಸಮಗ್ರ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಭ್ರಷ್ಟಾಚಾರ ವಿರೋಧಿ ವೇದಿಕೆ ಉಪಾಧ್ಯಕ್ಷ ಜಯರಾಮ್ ಮಾತನಾಡಿ, ಅಧೀಕ್ಷಕ ಅಭಿಯಂತರರು ತಕ್ಷಣ ತನಿಖೆ ನಡೆಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆಯಲಾಗಿದೆ ಎಂದರು.