ಹುಬ್ಬಳ್ಳಿ:
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ದರ ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಿಎಂ ಮತ್ತು ಡಿಸಿಎಂ ಪ್ರತಿಕೃತಿ ದಹಿಸಿದರು.ಇಲ್ಲಿನ ನ್ಯೂ ಇಂಗ್ಲಿಷ್ ಸ್ಕೂಲ್ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಅವುಗಳನ್ನು ಈಡೇರಿಸುವಲ್ಲಿ ಹೆಣಗಾಡುತ್ತಿದೆ. ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಆರೋಪಿಸಿದರು.ಏಕಾಏಕಿಯಾಗಿ ಆಸ್ತಿ ತೆರಿಗೆ, ಸಾರಿಗೆ ಸೇವೆ, ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟು ಉಳಿದ ಸೇವೆ ಮತ್ತು ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಹಗಲು ದರೋಡೆ ಮಾಡುತ್ತಿದೆ. ಕೂಡಲೇ ಸರ್ಕಾರ ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಬೇಕು. ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.ನೇತೃತ್ವ ವಹಿಸಿದ್ದ ಹು-ಧಾ ಪೂರ್ವ ಕ್ಷೇತ್ರದ ಅಧ್ಯಕ್ಷ ಪ್ರಭುನವಲಗುಂದ ಮಠ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ಬೆಲೆ ಏರಿಕೆ ನಿರಂತರವಾಗಿ ನಡೆಯುತ್ತಿದೆ. ಅಗತ್ಯ ವಸ್ತು, ಹಾಲು, ವಿದ್ಯುತ್ ದರವನ್ನು ಏಕಾಏಕಿ ಹೆಚ್ಚಿಸಲಾಗಿದೆ. ಇದರಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ತಕ್ಷಣ ರಾಜ್ಯಪಾಲರು ಜನ ವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ನಂತರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಬಿಜೆಪಿ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಮುಖಂಡರಾದ ರಂಗಾ ಬದ್ದಿ, ಅನೂಪ ಬಿಜವಾಡ, ಅಣ್ಣಪ್ಪ ಗೋಕಾಕ, ಚಂದ್ರಶೇಖರ ಗೋಕಾಕ, ರಾಜು ಜರತಾರಘರ್, ಲಕ್ಷ್ಮಿಕಾಂತ ಘೋಡಕೆ, ವೆಂಕಟೇಶ ಕಾಟವೆ, ಸವಿತಾ ಚವ್ಹಾಣ, ಉಮೇಶ ದುಶಿ, ಸುವರ್ಣಾ ಜಂಗಮಗೌಡರ, ಪ್ರತಿಭಾ ಪವಾರ,ರಾಜು ಕೋರ್ಯಾಣಮಠ, ನೀಲಕಂಠ ತಡಸದ, ಮಂಜುನಾಥ ಕಲಾಲ್ ಸೇರಿದಂತೆ ಅನೇಕರಿದ್ದರು.ಟ್ರಾಫಿಕ್ ಜಾಮ್:
ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ ಕಾರಣಕ್ಕೆ ನ್ಯೂ ಇಂಗ್ಲಿಷ್ ಸ್ಕೂಲ್ ಎದುರು ವಾಹನ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಇಪ್ಪತ್ತು ನಿಮಿಷಕ್ಕೂ ಹೆಚ್ಚು ಸಮಯ ವಾಹನಗಳು ಟ್ರಾಫಿಕ್‌ನಲ್ಲಿ ನಿಲ್ಲುವಂತಾಯಿತು. ನಂತರ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.