ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ಉಪಸ್ಥಿತಿಯಲ್ಲಿ ನಡೆಯಿತು.ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಶಾಲಾ ಕಾಲೇಜು ಹಂತದಲ್ಲಿ ಮತ್ತಷ್ಟು ಹೆಚ್ಚಿನ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು. ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್, ಡೆಂಟಲ್ ಸೇರಿದಂತೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲೂ ಸಹ ಅರಿವು ಮೂಡಿಸಬೇಕು. ರಜೆ ಅವಧಿಯಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.ಈ ಸಂದರ್ಭ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ವಾರಕ್ಕೆ ಮೂರು ದಿನವಾದರೂ ವಿವಿಧ ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಬೇಕು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೂ ಮಾಹಿತಿ ನೀಡಿ ಅವರ ಸಲಹೆ ಮಾರ್ಗದರ್ಶನ ಪಡೆಯುವಂತಾಗಬೇಕು ಎಂದು ಹೇಳಿದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಡ್ರಗ್ಸ್ ನಿಯಂತ್ರಣ ಇಲಾಖೆಗಳು ಸೇರಿದಂತೆ ವಿದ್ಯಾರ್ಥಿ ನಿಲಯಗಳು, ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಇಲಾಖೆ ಹೀಗೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಮತ್ತಷ್ಟು ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಹೇಳಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಇಂಟಲಿಜೆಂಟ್ ವಿಭಾಗದ ಇನ್ಸ್ಪೆಕ್ಟರ್ ಸುರೇಂದ್ರ ಟಿ.ಆರ್., ಅಬಕಾರಿ ನಿರೀಕ್ಷಕರಾದ ಚೇತನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್, ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಪಲ್ಲೇದ್, ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ಅಧಿಕಾರಿ ಆಶಾ, ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.