ಜನರಿಗೆ ಸಂವಿಧಾನ ಮಹತ್ವ ಸಾರಲು ಜಿಲ್ಲಾಧಿಕಾರಿ ದಿವ್ಯಾಪ್ರಭು ಕರೆ

KannadaprabhaNewsNetwork | Published : Jan 23, 2024 1:49 AM

ಸಾರಾಂಶ

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರೀಯಾಶೀಲರಾಗಿ ಸಂವಿಧಾನದ ಮಹತ್ವವನ್ನು ಜನರಿಗೆ ತಿಳಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾಧಿಕಾರಿ ದಿವ್ಯಾಪ್ರಭು ಜಿ.ಆರ್.ಜೆ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗಸಂವಿಧಾನದ ಮಹತ್ವ ಸಾರುವ ನಿಟ್ಟಿನಲ್ಲಿ ಇದೇ ಜನವರಿ 26ರಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡುವರು. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ, ಪಟ್ಟಣ ಪಂಚಾಯಿತಿ, ಪುರಸಭೆ ವ್ಯಾಪ್ತಿಯಲ್ಲಿ ಸ್ತಬ್ಧಚಿತ್ರ ಮೆರವಣಿಗೆ ನಡೆಯಲಿದೆ. ಎಲ್ಲಾ ಹಂತದ ಅಧಿಕಾರಿಗಳು ಕ್ರೀಯಾಶೀಲವಾಗಿ ಭಾಗಿಯಾಗಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂವಿಧಾನದ ಮಹತ್ವವನ್ನು ಜನರಿಗೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಜಿ.ಆರ್.ಜೆ ಕರೆ ನೀಡಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹಾದೇವಪ್ಪ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆಯವರು ಬಹಳಷ್ಟು ಆಸಕ್ತಿ ವಹಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ರೂಪಿಸಿದ್ದಾರೆ. ಇದನ್ನು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಯಶಸ್ವಿಗೊಳಿಸಲು ಸೂಚನೆ ನೀಡಿದ್ದಾರೆ. ಅತ್ಯುತ್ತಮವಾಗಿ ಸ್ತಬ್ಧಚಿತ್ರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನಮನ ಗೆಲ್ಲುವ 3 ಜಿಲ್ಲೆಗಳ ಸ್ತಬ್ಧಚಿತ್ರಗಳಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಸಂವಿಧಾನ ಜಾಗೃತಿ ಜಾಥಾದಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ನೊಂದಣಿ ಮಾಡುವ ಮೂಲಕ ಜಿಲ್ಲೆಯಲ್ಲಿ ಕಾರ್ಯ ಕ್ರಮ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯಾಪ್ರಭು ಜೆ.ಆರ್.ಜೆ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚನೆ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷರಾಗಿದ್ದು, ತಾ.ಪಂ, ಇಓ ಉಪಾಧ್ಯಕ್ಷರಾಗಿರುತ್ತಾರೆ. ತಹಶೀಲ್ದಾ ರ್‌ಗಳು ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಚಿವರು, ಸಂಸದರು, ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಶಿಷ್ಟಾಚಾರದ ಪ್ರಕಾರ ಎಲ್ಲಾ ಜನಪ್ರನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಯಶಸ್ವಿಗೊಳಿಸಬೇಕು. ಗ್ರಾಮಮಟ್ಟದಲ್ಲಿ ಪಿ.ಡಿ.ಓಗಳು ಎಲ್ಲಾ ಗ್ರಾ.ಪಂ ಸದಸ್ಯರು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಆಯಾ ಅಧಿಕಾರಿಗಳು ಚುನಾಯಿತ ಸದಸ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಒಬ್ಬ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರ ನೀಡಬೇಕು. ನುರಿತ ಭಾಷಣಕಾರರಿಂದ ಸಂವಿಧಾನ ಪೀಠಿಕೆ ಬಗ್ಗೆ ಭಾಷಣ ಮಾಡಿಸಬೇಕು. ಈಗಾಗಲೇ ಜಾಥಾ ಹಾಗೂ ಸ್ತಬ್ಧಚಿತ್ರ ತೆರಳುವ ಮಾರ್ಗನಕ್ಷೆಯನ್ನು ತಯಾರಿಸಲಾಗಿದೆ. ಸಂಜೆಯ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು. ಸ್ತಬ್ಧಚಿತ್ರ ತೆರಳುವ ಮಾರ್ಗಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರ ಮೆರವಣಿಗೆ ಇದೇ ಜ.26 ರಿಂದ ಪ್ರಾರಂಭವಾಗಿ ಫೆ.23 ವರೆಗೆ ನಡೆಯಲಿದೆ. ಸ್ಥಬ್ದಚಿತ್ರದ ವಾಹನ ಉಸ್ತುವಾರಿ ಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರಭಾರ ಉಪವಿಭಾಗಾಧಿಕಾರಿ ವಿವೇಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭಾರತಿ.ಬಣಕಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಓ.ಪರಮೇಶ್ವರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ರೇಣುಪ್ರಸಾದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಾಂತರಾಜ್ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Share this article