ಅಂಕುಶಾಪುರ ಕಾಚೇನಹಳ್ಳಿ ಅರಣ್ಯ ಪ್ರದೇಶಕ್ಕೆ ಡೀಸಿ ಡಾ.ಕುಮಾರ ಭೇಟಿ, ಪರಿಶೀಲನೆ

KannadaprabhaNewsNetwork |  
Published : Jul 11, 2025, 11:48 PM IST
11ಕೆಎಂಎನ್ ಡಿ12 | Kannada Prabha

ಸಾರಾಂಶ

ಸಹಸ್ರ ಗಿಡ ನೆಡುವ ಅಭಿಯಾನ ಸಮಾರಂಭದಲ್ಲಿ ವಿವಿಧ ಶಾಲಾ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಳ್ಳುವರೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಕುಡಿಯುವ ನೀರು ಮತ್ತು ಗಣ್ಯರಿಗೆ ತಾತ್ಕಾಲಿಕ ಶೌಚಾಲಯ ಕಲ್ಪಿಸಬೇಕು.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ಅಂಕುಶಾಪುರ ಕಾಚೇನಹಳ್ಳಿ ಅರಣ್ಯ ಪ್ರದೇಶದಲ್ಲಿ ಜು.13ರಂದು ನಡೆಯುವ ಮಾತೃಗೊಂದು ಮರ ಸಹಸ್ರ ಗಿಡನೆಡುವ ಅಭಿಯಾನದಲ್ಲಿ ರಾಜ್ಯ ಉಚ್ಛ ನ್ಯಾಯಾಲಯ ನಾಲ್ವರು ನಾಯಮೂರ್ತಿಗಳು ಸೇರಿ ಉಪಲೋಕಾಯುಕ್ತರು ಮತ್ತು ಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅರಣ್ಯ ಪ್ರದೇಶಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಬೆಂಗಳೂರಿನ ಮಾತೃ ಫೌಂಡೇಷನ್‌ನಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಡೆಯುವ ಸಸಿ ನೆಡುವ ಕಾರ್ಯಕ್ರಮದಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎಸ್.ಜಿ.ಪಂಡಿತ್, ಬಿ.ಎಂ.ಶ್ಯಾಂಪ್ರಸಾದ್, ಎಸ್.ರಾಚಯ್ಯ, ಟಿ.ಎಂ.ನದಾಫ್, ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ, ಬಿ.ವೀರಪ್ಪ, ರಾಜ್ಯ ಗ್ರಾಹಕ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಜಿ.ಟಿ.ಶಿವಶಂಕರೇಗೌಡ, ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್‌ಶೆಟ್ಟಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಶಿಷ್ಟಾಚಾರ ಪಾಲಿಸುವ ಜೊತೆಗೆ ಯಾವುದೇ ಸಣ್ಣ ಪುಟ್ಟ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ರೂಪುರೇಷೆಗಳ ಕುರಿತು ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಸಮಾರಂಭದಲ್ಲಿ ವಿವಿಧ ಶಾಲಾ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಳ್ಳುವರೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಕುಡಿಯುವ ನೀರು ಮತ್ತು ಗಣ್ಯರಿಗೆ ತಾತ್ಕಾಲಿಕ ಶೌಚಾಲಯ ಕಲ್ಪಿಸಬೇಕು ಎಂದರು.

ಸಮಾರಂಭ ನಡೆಯುವ ಆಸುಪಾಸಿನಲ್ಲಿರುವ ಹಂದಿ ಗೂಡುಗಳನ್ನು ತೆರವುಗೊಳಿಸಬೇಕು. ವೇದಿಕೆ ಮತ್ತು ಪೆಂಡಾಲ್‌ನ ಸುರಕ್ಷತೆ ನೋಡಿಕೊಳ್ಳಬೇಕು. ಗಣ್ಯರು ಸಂಚರಿಸುವ ಮಾರ್ಗದಲ್ಲಿ ಯಾವುದೇ ಅಡಚಣೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಶಾಲಾ ಕಾಲೇಜುಗಳ ಮಕ್ಕಳು ಮತ್ತು ಸಾರ್ವಜನಿಕರಿಗೆ ಮಾಡುವ ಊಟದ ವ್ಯವಸ್ಥೆ ಅಚ್ಚುಕಟ್ಟಾಗಿರಬೇಕು ಮತ್ತು ಗುಣಮಟ್ಟದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವರಾಮು, ಸಂಪತ್‌ ಪಟೇಲ್, ಬಿಇಒ ಕೆ.ಯೋಗೇಶ್, ಮಾತೃ ಫೌಂಡೇಷನ್ ಅಧ್ಯಕ್ಷ ಹಾಗೂ ಹಿರಿಯ ವಕೀಲ ಆರ್.ಚಂದ್ರಕುಮಾರ್, ಪಟ್ಟಣದ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್ ಸೇರಿದಂತೆ ಎಆರ್‌ಟಿಒ ಕಚೇರಿ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾಪಂ ಅಧಿಕಾರಿಗಳು ಇದ್ದರು.

PREV