ಒಂದು ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ಡಿಸಿ ಸೂಚನೆ

KannadaprabhaNewsNetwork |  
Published : Feb 29, 2024, 02:06 AM IST
ಸಭೆಯಲ್ಲಿ ಮಾತನಾಡುತ್ತಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌. | Kannada Prabha

ಸಾರಾಂಶ

2017ರಿಂದ ನೋಂದಣಿಯಾದ ಎಲ್ಲ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು ಮಾಲೀಕರು ಅಫಿಧಾವಿತ್ ಸಲ್ಲಿಸಬೇಕು ಎಂದು ಅವರು ಆರ್‌ಟಿಒಗೆ ನಿರ್ದೇಶಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

2017ರಿಂದ ನೋಂದಣಿಯಾಗಿರುವ ಎಲ್ಲ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2017ರಿಂದ ನೋಂದಣಿಯಾದ ಎಲ್ಲ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು ಮಾಲೀಕರು ಅಫಿಧಾವಿತ್ ಸಲ್ಲಿಸಬೇಕು ಎಂದು ಅವರು ಆರ್‌ಟಿಒಗೆ ನಿರ್ದೇಶಿಸಿದರು.

ನಿರ್ಲಕ್ಷ್ಯ ಸಹಿಸಲಾಗದು: ಸಾರ್ವಜನಿಕರ ಜೀವರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ಇದರಲ್ಲಿ ನಿರ್ಲಕ್ಷ್ಯ ಸಹಿಸುವ ಪ್ರಶ್ನೆಯೇ ಇಲ್ಲ. ಬಸ್‌ಗಳಲ್ಲಿ ಬಾಗಿಲು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿದೆ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತಿತರ ರಾಜ್ಯಗಳ ಬಸ್‌ಗಳಲ್ಲಿ ಬಾಗಿಲು ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೂ ಜಾರಿಗೆ ತರಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಫ್ಲೈಓವರ್ ಕತ್ತಲು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾದುಹೋಗಿರುವ ಸುರತ್ಕಲ್, ಕೂಳೂರು, ಕೊಟ್ಟಾರಚೌಕಿ, ಕುಂಟಿಕಾನ, ಪಂಪ್‌ವೆಲ್ ಮೇಲ್ಸೇತುವೆಗಳಲ್ಲಿ ದಾರಿದೀಪದ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆ ಕತ್ತಲು ಆವರಿಸಿರುವ ಬಗ್ಗೆ ಜಿಲ್ಲಾಧಿಕಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ 10 ವರ್ಷಗಳಿಂದ ಈ ಸಮಸ್ಯೆ ಇದ್ದರೂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಮಹಾನಗರ ಪಾಲಿಕೆಯೊಂದಿಗೂ ವ್ಯವಹರಿಸಿಲ್ಲ. ಹೆದ್ದಾರಿಯ ಮೂಲ ಯೋಜನೆಯಲ್ಲಿಯೇ ಇದನ್ನು ಯಾಕೆ ಸೇರಿಸಿಲ್ಲ ಎಂಬುದರ ಬಗ್ಗೆ ವಿವರಣೆ ನೀಡುವಂತೆ ಜಿಲ್ಲಾಧಿಕಾರಿ ಸಭೆಯಲ್ಲಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸ್ಟೇಟ್‌ಬ್ಯಾಂಕ್ ವೃತ್ತ ಸಮಸ್ಯೆ: ನಗರದ ಹೃದಯಭಾಗದ ಸ್ಟೇಟ್‌ ಬ್ಯಾಂಕ್ ಹ್ಯಾಮಿಲ್ಟನ್ ವೃತ್ತವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ವಾಹನ ಸವಾರರು ತೀವ್ರ ಗೊಂದಲಕ್ಕೀಡಾಗುತ್ತಿದ್ದಾರೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದರು. ಇಡೀ ವೃತ್ತವನ್ನು ಸಮಗ್ರವಾಗಿ ಪುನರ್‌ನಿರ್ಮಿಸಿ ಸಂಚಾರ ವ್ಯವಸ್ಥೆ ಏರ್ಪಡಿಸಲು ಆಗ್ರಹಿಸಿದರು.

ಜಿಲ್ಲಾಧಿಕಾರಿ ಮಾತನಾಡಿ, ಡಿ.ಸಿ. ಕಚೇರಿಯ ಮುಂದಿನ ವೃತ್ತವೇ ಈ ರೀತಿ ಅನಿಶ್ಚಿತತೆ ಸ್ಥಿತಿಯಲ್ಲಿ ನಿಲ್ಲಿಸಿರುವುದು ಸರಿಯಲ್ಲ. ಈ ವೃತ್ತದ ಸುತ್ತಮುತ್ತಲಿನಲ್ಲಿ ಪಾರ್ಕಿಂಗ್, ಫ್ಲೆಕ್ಸ್, ಕಟೌಟ್ ಸಮಸ್ಯೆಯೂ ಇದೆ. ಯಾವುದೇ ಸ್ಮಾರ್ಟ್‌ ಸಿಟಿ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯವಾಗಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಇನ್ನೊಂದು ಸಮಸ್ಯೆ ಸೃಷ್ಟಿಯಾಗಬಾರದು. ಈ ನಿಟ್ಟಿನಲ್ಲಿ ನಗರಪಾಲಿಕೆ, ನಗರ ಪೊಲೀಸ್ ಮತ್ತು ಸ್ಮಾರ್ಟ್‌ ಸಿಟಿ ಅಧಿಕಾರಿಗಳು ಸೇರಿ ಸಮನ್ವಯದಿಂದ ಸ್ಟೇಟ್‌ಬ್ಯಾಂಕ್ ವೃತ್ತ ಸಂಚಾರ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಉಪ ಪೊಲೀಸ್ ಆಯುಕ್ತ ದಿನೇಶ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ಆರ್‌ಟಿಒ ಶ್ರೀಧರ್ ಮಲ್ನಾಡ್, ಲೋಕೋಪಯೋಗಿ ಕಾರ್ಯಕಾರಿ ಎಂಜಿನಿಯರ್ ಅಮರನಾಥ್ ಜೈನ್ ಮತ್ತಿತರರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ