ಕನ್ನಡಪ್ರಭ ವಾರ್ತೆ, ತುಮಕೂರುರಸ್ತೆ ಅಪಘಾತಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 40 ಬ್ಲ್ಯಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅಗತ್ಯವಿರುವ ಕಡೆ ರಸ್ತೆ ಉಬ್ಬು ಹಾಗೂ ತಡೆ ಸೇರಿದಂತೆ ಆಗಸ್ಟ್ 8 ರೊಳಗಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಸ್ತೆ ಸುರಕ್ಷತಾ ಸಭೆ ನಡೆಸಿ ಮಾತನಾಡಿದ ಅವರು, ಪದೇ ಪದೇ ರಸ್ತೆ ಅಪಘಾತಗಳು ಸಂಭವಿಸಿ ಜನರು ಪ್ರಾಣ ಕಳೆದುಕೊಳ್ಳುತ್ತಿರುವ ಅಪಾಯಕಾರಿ ರಸ್ತೆಗಳಲ್ಲಿ ಪೊಲೀಸ್ ಇಲಾಖೆಯಿಂದ ಈಗಾಗಲೇ 40 ಬ್ಲ್ಯಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಗುರುತಿಸಲಾಗಿರುವ ಬ್ಲ್ಯಾಕ್ ಸ್ಪಾಟ್‌ಗಳಲ್ಲಿ ಈವರೆಗೂ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದರು.ಅವೈಜ್ಞಾನಿಕ ಸ್ಪೀಡ್ ಬ್ರೇಕರ್ ನಿರ್ಮಾಣದಿಂದ ಹಾಗೂ ರಸ್ತೆ ಮಾರ್ಗಸೂಚಿಗಳಿಲ್ಲದೆ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿವೆ. ಸ್ಪೀಡ್ ಬ್ರೇಕರ್‌ಗಳನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕು. ರಸ್ತೆ ಮಾರ್ಗಸೂಚಿಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು. ಅಗತ್ಯ ದಾಖಲೆಗಳಿಲ್ಲದೆ ರಸ್ತೆಗಳಲ್ಲಿ ಸಂಚರಿಸುವ ಶಾಲಾ ವಾಹನ ಸೇರಿದಂತೆ ಎಲ್ಲಾ ವಾಹನ ಹಾಗೂ ಚಾಲಕರ ಪರವಾನಗಿಗಳನ್ನು ಪರಿಶೀಲಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿ.ಗೋಪಾಲ್ , ಪುರುಷೋತ್ತಮ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಸಾದ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು. ನಂತರ ಚಿಕ್ಕಹಳ್ಳಿ, ಹಿರೇಹಳ್ಳಿ ಟಿವಿಎಸ್ ಕ್ರಾಸ್, ಪಂಡಿತನಹಳ್ಳಿ ಗೇಟ್ ಮತ್ತು ಕ್ಯಾತ್ಸಂದ್ರ ಟೋಲ್ ಬಳಿ ಗುರುತಿಸಲಾಗಿರುವ ಬ್ಲ್ಯಾಕ್ ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.