ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಪಂ ನೂತನ ಸಭಾಭವನದಲ್ಲಿ ಜರುಗಿದ ಪಂಚ ಗ್ಯಾರಂಟಿ ಯೋಜನೆಯ ಕಾರ್ಯಾಗಾರ-ಉತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ವಿವಿಧ ಸಮಿತಿ ರಚಿಸಲಾಗಿದೆ. ಸಮಿತಿಗೆ ವಹಿಸಿಕೊಟ್ಟ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಸೂಚನೆ ನೀಡಿದರು.
ರಾಜ್ಯ ಸರಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸು ಸಾರಲು ಹಾಗೂ ಅರ್ಹ ಫಲಾನುಭವಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆ ಕಾರ್ಯಾಗಾರ-ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಸಮಿತಿಗಳಿಗೆ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆಂದು ತಿಳಿಸಿದರು.ಕಾರ್ಯಕ್ರಮಕ್ಕೆ 3 ಸಾವಿರಕ್ಕೂ ಅಧಿಕ ಫಲಾನುಭವಿಗಳು ಆಗಮಿಸುತ್ತಿದ್ದು, ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಜಿಲ್ಲಾ ಸಂಚಾರಿ ಅಧಿಕಾರಿಗಳಿಗೆ ತಿಳಿಸಿದರು. ಕಲಾಭವನ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಮಾಹಿತಿ ಸೇರಿದಂತೆ ವಿವಿಧ ಪ್ರದರ್ಶನ ಮತ್ತು ಮಾರಾಟ ಮಳಿಗೆ ಹಾಕುವ ವ್ಯವಸ್ಥೆ ಆಗಬೇಕು. ಕಾರ್ಯಕ್ರಮದಲ್ಲಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಂಡ ಫಲಾನುಭವಿಗಳ ಪಟ್ಟಿ ನೀಡಿದಲ್ಲಿ ಅವರಿಗೆ ಅನಿಸಿಕೆ ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅನೀಲಕುಮಾರ ದಡ್ಡಿ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕು ಮಟ್ಟದ ಅನುಷ್ಠಾನ ಪ್ರಾಧಿಕಾರ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳ ಕರೆತರುವ ಕೆಲಸ ಮಾಡಬೇಕು. ಉತ್ಸವದಲ್ಲಿ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಕ್ರಮಕೈಗೊಳ್ಳಲು ಸಭೆಗೆ ತಿಳಿಸಿದರು.ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷೆ ಜಯಶ್ರೀ ತಿಮ್ಮಾಪೂರ, ರಫೀಕ್ ಇಸ್ಮಾಯಿಲ್ ಸಾಬ್ ಬೈರಕದಾರ, ಶಿವಪ್ಪ ಕೋನೇರಿ, ರವೀಂದ್ರ ಯಡಹಳ್ಳಿ, ಜಿಪಂ ಯೋಜನಾ ನಿರ್ದೇಶಕ ಎಸ್.ಎಂ. ಕಾಂಬಳೆ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಸೇರಿದಂತೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು, ಯೋಜನೆ ಅನುಷ್ಠಾನ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.