ಮತ ಎಣಿಕೆ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಡಿಸಿ ಸೂಚನೆ

KannadaprabhaNewsNetwork | Published : Jun 2, 2024 1:45 AM

ಸಾರಾಂಶ

ನಿಯೋಜಿತ ಅಧಿಕಾರಿಗಳು, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಮತ ಎಣಿಕೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಮತ ಎಣಿಕೆ ತರಬೇತಿಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿಕೆಕನ್ನಡಪ್ರಭ ವಾರ್ತೆ ಕೊಪ್ಪಳ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ನಿಯೋಜಿತ ಅಧಿಕಾರಿಗಳು, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಮತ ಎಣಿಕೆ ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ಹೇಳಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಸೆಕ್ಟರ್ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸಹಾಯಕ ಅಧಿಕಾರಿಗಳಿಗೆ ಮತ ಎಣಿಕೆ ಕಾರ್ಯದ ಕುರಿತು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ ಜರುಗಿದ ಎರಡನೇ ಹಂತದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಫಲಿತಾಂಶ ಜೂನ್ 4ಕ್ಕೆ ಹೊರ ಬರಲಿದ್ದು, ಅಂದು ಮತ ಎಣಿಕಾ ಕಾರ್ಯವನ್ನು ನಗರದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯದಲ್ಲಿ ಆಯೋಗ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸುಗಮ ಮತ ಎಣಿಕೆಗಾಗಿ ನಿಯೋಜಿಸಲಾದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಯಾವುದೇ ತೊಂದರೆ ಉಂಟಾದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ಪ್ರಾತ್ಯಕ್ಷಿಕೆ ತರಬೇತಿ:

ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಮತ ಎಣಿಕೆ ಕಾರ್ಯದ ಕುರಿತು ಸಂಪೂರ್ಣ ವಿವರ ನೀಡಿದರು. ಅಲ್ಲದೆ ಮತ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ಎಲ್ಲ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು, ಜಿಲ್ಲಾ ಚುನಾವಣಾ ಶಾಖೆಯ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲ ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳು ಇತರರಿದ್ದರು.

Share this article