ತಾಲೂಕುವಾರು ಕಂಟ್ರೋಲ್ ರೂಮ್ ಸ್ಥಾಪನೆಗೆ ಡಿಸಿ ಸೂಚನೆ

KannadaprabhaNewsNetwork |  
Published : Feb 04, 2026, 01:15 AM IST
9 | Kannada Prabha

ಸಾರಾಂಶ

ಜಿಲ್ಲೆಯ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ತಾಲೂಕುವಾರು ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ತಾಲೂಕುವಾರು ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿ, ಜನಸಾಮಾನ್ಯರ ದೂರುಗಳು ಮತ್ತು ತುರ್ತು ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸುವ ವ್ಯವಸ್ಥೆ ಅಗತ್ಯವಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಲ್ಲ ಗ್ರಾಮ ಪಂಚಾಯತಿವಾರು ಕುಡಿಯುವ ನೀರಿನ ಮೈಕ್ರೋ ಬಯೋಲಾಜಿಕಲ್ ಪರೀಕ್ಷೆ ನಡೆಸಬೇಕು ಹಾಗೂ ವಸತಿ ನಿಲಯಗಳಲ್ಲಿಯೂ ನೀರಿನ ಗುಣಮಟ್ಟ ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು. ಗ್ರಾಮೀಣ ಜಲವಿತರಣಾ ಅಧಿಕಾರಿಗಳು ಜಲಜೀವನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು. ವಿಶೇಷವಾಗಿ ಮಧುಗಿರಿ, ಪಾವಗಡ ಮತ್ತು ಶಿರಾ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರಿನ ಗುಣಮಟ್ಟದಲ್ಲಿ ಏರುಪೇರಿನಿಂದ ಸಾರ್ವಜನಿಕರಿಗೆ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನ್ಯಾಯಬೆಲೆ ಅಂಗಡಿಗಳಲ್ಲಿ 70 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆಬಾಗಿಲಿಗೆ ಆಹಾರ ಧಾನ್ಯ ತಲುಪಿಸುವ ವ್ಯವಸ್ಥೆ ಸಮರ್ಪಕವಾಗಿ ನಡೆಯುತ್ತಿಲ್ಲ ಹಾಗೂ ಅಂಗಡಿಗಳ ಸಮಯ ಪಾಲನೆ ಕಳಪೆಯಾಗಿದೆ ಎಂಬ ದೂರುಗಳು ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸೌಮ್ಯ ಅವರಿಗೆ ಸೂಚಿಸಿದರು.ಇದಲ್ಲದೆ, ಗ್ರಾಮ ಪಂಚಾಯತಿ ವಾರು ಸ್ವಚ್ಛತಾ ಕಾರ್ಯಗಳನ್ನು ಸಮರ್ಪಕವಾಗಿ ನಡೆಸಬೇಕು. ಈ ವಿಷಯದಲ್ಲಿ ಕೆಲ ಅಧಿಕಾರಿಗಳು ಉದಾಸೀನತೆ ತೋರಿರುವುದು ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭ, ಉಪವಿಭಾಗಾಧಿಕಾರಿಗಳು ನಾಹೀದಾ ಜಮ್ ಜಮ್, ಗೋಟೂರು ಶಿವಪ್ಪ, ಸಪ್ತಶ್ರೀ, ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ