ಅದ್ಧೂರಿ ಆಚರಣೆಗೆ ಜಿಲ್ಲಾಧಿಕಾರಿ ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ ಒಂದಕ್ಕೆ 50 ವರ್ಷ ಪೂರ್ಣಗೊಳ್ಳುವ ಹಿನ್ನೆಲೆ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಹೆಚ್ಚು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚನೆ ನೀಡಿದರು. ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಪೂರ್ವಭಾವಿ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯೋತ್ಸವದ ಅಂಗವಾಗಿ ಅಂದು ಬೆಳಗ್ಗೆ 7.30ಕ್ಕೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಯು ನಗರದ ನೀಲಕಂಠೇಶ್ವರ ದೇಗುಲದಿಂದ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ ನಮ್ಮ ನಾಡು, ನುಡಿ, ಸಂಸ್ಕೃತಿ ಬಿಂಬಿಸುವ ವಿವಿಧ ವೈವಿಧ್ಯಮಯ ಜಾನಪದ ಕಲಾತಂಡಗಳು ಪಾಲ್ಗೊಳ್ಳಲಿವೆ. ಇದಕ್ಕೆ ಬೇಕಾದ ತಂಡಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯವಸ್ಥೆಗೊಳಿಸಬೇಕು ಎಂದರು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಭದ್ರಾ ಮೇಲ್ದಂಡೆ ಯೋಜನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಸ್ತಬ್ಧಚಿತ್ರಗಳು, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರದ ಯೋಜನೆಗಳ ನ್ನು ಸ್ತಬ್ಧಚಿತ್ರಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೆರವಣಿಗೆಯು ನಗರದ ನೀಲಕಂಠೇಶ್ವರದ ದೇಗುಲದಿಂದ ಹೊರಟು, ಪ್ರಮುಖ ರಸ್ತೆ ಮೂಲಕ ರಾಜ್ಯೋತ್ಸವ ಸಮಾರಂಭ ಜರುಗುವ ಪೊಲೀಸ್ ಕವಾಯತು ಮೈದಾನದವರೆಗೆ ಸಾಗಿ ಬರಲಿದೆ. ಅಂದು ಬೆಳಿಗ್ಗೆ 9ಕ್ಕೆ ಪೊಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ನೆರವೇರಲಿದ್ದು, ಶಿಷ್ಠಾಚಾರದ ಅನ್ವಯ ಎಲ್ಲ ಗಣ್ಯಮಾನ್ಯರನ್ನು ಆಹ್ವಾನಿಸಲಾಗುವುದು. ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಅಂದು ಬೆಳಿಗ್ಗೆ ಪೊಲೀಸ್ ಕವಾಯತು ಮೈದಾನದಲ್ಲಿ ಹಾಗೂ ಸಂಜೆ ತರಾಸು ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು. ಕಾರ್ಯಕ್ರಮದಲ್ಲಿ ಐದು ಗೀತೆಗಳ ಕಲರವ ಕರ್ನಾಟಕಕ್ಕೆ 50ರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷವಾಗಿ ಈ ನಾಡಿನ ಹೆಸರಾಂತ 5 ಕವಿಗಳು ರಚಿಸಿರುವ ಗೀತೆಗಳನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಇದರನ್ವಯ ಹುಯಿಲಗೋಳ ನಾರಾಯಣರಾಯರು ರಚಿಸಿರುವ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ ಬೇಂದ್ರ ರಚಿಸಿರುವ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕರು ರಚಿಸಿರುವ ಹೊತ್ತಿತೋ ಹೊತ್ತಿತು ಕನ್ನಡದ ದೀಪ, ಹಾಗೂ ಚನ್ನವೀರ ಕಣವಿ ಅವರು ಬರೆದಿರುವ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ 5 ಗೀತೆಗಳನ್ನು ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡಿಸಬೇಕು, ಇದಕ್ಕಾಗಿ ಉತ್ತಮ ಗೀತ ಗಾಯನ ತಂಡವನ್ನು ಆಯ್ಕೆಮಾಡಿ, ಹಾಡುಗಳನ್ನು ಪ್ರಸ್ತುತಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ರೀತಿ, ಜಿಲ್ಲೆಯ ಎಲ್ಲೆಡೆಯೂ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 5 ಗೀತೆಗಳನ್ನು ಕಡ್ಡಾಯವಾಗಿ ಹಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಚರಿಸಲು ಅನುವಾಗುವಂತೆ ರಚಿಸಲಾಗಿರುವ ಸ್ವಾಗತ ಸಮಿತಿ, ಹಣಕಾಸು ಸಮಿತಿ, ಮೆರವಣಿಗೆ ಸಮಿತಿ ಹಾಗೂ ಜಿಲ್ಲಾಮಟ್ಟದ ಪ್ರಶಸ್ತಿಗೆ ಆಯ್ಕೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ನಗರಸಭೆ ಪೌರಾಯುಕ್ತೆ ರೇಣುಕಾ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ ಶಿವಸ್ವಾಮಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಮತ್ತಿತರರು ಇದ್ದರು. --------------- ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಮಾತನಾಡಿದರು. -------ಫೋಟೋ ಫೈಲ್ ನೇಮ್ 25 ಸಿಟಿಡಿ 3--