ಬಳ್ಳಾರಿ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಮಳೆ ಹಾನಿಯಿಂದಾಗಿ ಸಂಭವಿಸಬಹುದಾದ ಅವಘಡಗಳನ್ನು ನಿಭಾಯಿಸಲು ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲೂಕು ತಹಸೀಲ್ದಾರರೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಆರಂಭಿಕ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಪೂರಕವಾಗಿ ಆರೋಗ್ಯ ಇಲಾಖೆಯು ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಇದಕ್ಕೆ ಸ್ಥಳೀಯ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಸೂಚಿಸಿದರು.
ಮಳೆಯಿಂದಾಗುವ ಮನೆಹಾನಿ ಮತ್ತು ಗುಡುಗು-ಸಿಡಿಲಿನಿಂದ ಜನ-ಜಾನುವಾರು ಪ್ರಾಣಹಾನಿ ತಡೆಗಟ್ಟಲು ಜಾಗೃತಿ ಮೂಡಿಸಬೇಕು. ಮಳೆ, ಸಿಡಿಲಿನಿಂದ ಉಂಟಾಗುವ ಯಾವುದೇ ಹಾನಿ ವರದಿಯನ್ನು ತ್ವರಿತವಾಗಿ ಸಲ್ಲಿಸಲು ಅಧಿಕಾರಿಗಳನ್ನು ನಿಯೋಜಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ವರದಿ ನೀಡಬೇಕು ಎಂದರು.ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಸರಬರಾಜು ಮಾಡಬೇಕು. ಈ ಬಾರಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ಎಲ್ಲ ತಾಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವುದು ವರದಿಯಾಗುತ್ತಿದೆ. ವಿದ್ಯುತ್ ಅವಘಡ ಉಂಟಾಗದಂತೆ ನಿಗಾ ವಹಿಸಬೇಕು. ಸಾರ್ವಜನಿಕರು ವಿದ್ಯುತ್‍ಗೆ ಸಂಬಂಧಿಸಿದಂತೆ ದೂರುಗಳಿಗೆ ಕರೆ ಮಾಡಿದಲ್ಲಿ ತಕ್ಷಣವೇ ಸ್ಪಂದಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.ಬಳ್ಳಾರಿ ನಗರದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಇತರೆ ಚರಂಡಿ ಮಾರ್ಗಗಳನ್ನು ಸ್ವಚ್ಛಗೊಳಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಹಲವು ಸಮನ್ವಯ ವಿಷಯಗಳ ಕುರಿತು ಚರ್ಚೆ ನಡೆಸಿದರು.ಸಹಾಯಕ ಆಯುಕ್ತ ಹೇಮಂತ್ ಎನ್., ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಮಹಾನಗರ ಪಾಲಿಕೆ ಆಯುಕ್ತ ಜಿ. ಖಲೀಲ್‍ಸಾಬ್, ಡಿಎಚ್‍ಒ ಡಾ. ವೈ. ರಮೇಶ್‍ಬಾಬು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಇತರರು ಉಪಸ್ಥಿತರಿದ್ದರು.