ಕನ್ನಡಪ್ರಭ ವಾರ್ತೆ, ತುಮಕೂರುಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿಂದ ಸಂಭವಿಸಿರುವ ಸಾವುಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗವಾಗಿರುವ ಪಾವಗಡ ತಾಲೂಕಿನಲ್ಲಿ ಕೋವಿಡ್ ಮುನ್ನೆಚ್ಚರಿಕೆ ಹಾಗೂ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಗಳವಾರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಬರ ಪರಿವೀಕ್ಷಣೆ ಮತ್ತು ಮುಂಗಾರು ಹಂಗಾಮಿನ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ನೆರೆ ರಾಜ್ಯವಾಗಿರುವ ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿದ್ದು, ಗಡಿ ಭಾಗದ ತಾಲೂಕಾಗಿರುವ ಪಾವಗಡದಲ್ಲಿ ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದರು. ಈ ಹಿಂದೆ ಕೋವಿಡ್ ವೇಳೆ ಕೈಗೊಂಡ ಎಲ್ಲ ಕ್ರಮಗಳನ್ನು ಮತ್ತೊಂದು ಸಲ ಕೈಗೊಳ್ಳಬೇಕು. ಹಿಂದೆ ಆದ ಸಣ್ಣ ಪುಟ್ಟ ತಪ್ಪುಗಳು ಸಹ ಆಗಬಾರದು. ಈಗಾಗಲೇ ಸರ್ಕಾರ ಎಲ್ಲ ಸ್ಥಿತಿ ಎದುರಿಸಲು ಸಾಕಷ್ಟು ಅನುದಾನ ನೀಡಿದ್ದು ಜಿಲ್ಲಾಡಳಿತದ ಬಳಿ ಅನುದಾನ ಲಭ್ಯವಿದೆ. ತಾಲೂಕಿನ ಆಸ್ಪತ್ರೆಳಲ್ಲಿ ಬೇಕಾಗಿರುವ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳು ಶ್ರಮಿಸಬೇಕು. ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಜಾಗೃತಿ ಮೂಡಿಸಬೇಕು. ಯಾವುದೇ ಕಾರಣಕ್ಕೂ ಇದನ್ನು ಲಘುವಾಗಿ ಪರಿಗಣಿಸಬಾರದು. ಇದು ನಮ್ಮ ಜವಾಬ್ದಾರಿಯಾಗಿದ್ದು ಅದಕ್ಕೆ ತಕ್ಕಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ತಾಲೂಕು ಅಧಿಕಾರಿಗಳೊಂದಿಗೆ ಸಹಕರಿಸಿ ಪರಿಸ್ಥಿತಿ ಅವಲೋಕಿಸಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಸೂಚಿಸಿದರು. ಪ್ರಸ್ತುತ ಮುಂಗಾರು ಹಂಗಾಮಿನ ಮಳೆಯ ಸ್ಥಿತಿ, ಬಿತ್ತನೆ ಪ್ರಗತಿ, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ ಕುರಿತು ಸಮಗ್ರವಾಗಿ ಪರಿಶೀಲಿಸಿದ ಅವರು, ಮಳೆಯಿಂದ ಉಂಟಾದ ಹಾನಿಗಳಿಗೆ ಪರಿಹಾರ ಪಾವತಿಯ ಪ್ರಗತಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜಿನ ಸ್ಥಿತಿ, ಜಾನುವಾರುಗಳಿಗೆ ಮೇವು ಲಭ್ಯತೆ, ಕೆರೆಗಳ ಒತ್ತುವರಿ ತೆರವು ಹಾಗೂ ಸಂರಕ್ಷಣೆ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಪರಿಶೀಲಿಸಿದರು.