ಮಳೆಯಿಂದಾಗಬಹುದಾದ ಅನಾಹುತ ತಡೆಗಟ್ಟಲು ಡೀಸಿ ಲತಾಕುಮಾರಿ ಸೂಚನೆ

KannadaprabhaNewsNetwork |  
Published : Jun 23, 2025, 11:48 PM IST
23ಎಚ್ಎಸ್ಎನ್15 :  | Kannada Prabha

ಸಾರಾಂಶ

ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಗಮನಹರಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯಲ್ಲಿ ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು, ರೈತರ ಆತ್ಮಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಂಡು ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದರು.

ಹಾವು ಕಡಿತ ಹಾಗೂ ಆಕಸ್ಮಿಕ ಸಾವು ಕುರಿತು ಪ್ರತ್ಯೇಕ ವರದಿ ನೀಡುವಂತೆ ನಿರ್ದೇಶನ ನೀಡಿದರಲ್ಲದೆ ಪರಿಹಾರ ವಿತರಣೆಗೆ ಕ್ರಮವಹಿಸುವಂತೆ ತಿಳಿಸಿ, ಮಳೆಯಿಂದ ಹಾನಿಯಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಿರಂತರವಾಗಿ ಬೀಳುವ ಮಳೆಯಿಂದ ಹುಲ್ಲಿನ ಬಣವೆಗಳು ನೆನೆದು ಫಂಗಸ್ ಆಗುವುದರಿಂದ ಜಾನುವಾರುಗಳು ತಿನ್ನಲು ಯೋಗ್ಯವಾಗಿರುವುದಿಲ್ಲ, ಈ ನಿಟ್ಟಿನಲ್ಲಿ ನಿಗಾವಹಿಸಲು ಅಧಿಕಾರಿಗಳಿಗೆ ಹೇಳಿ, ದೊಡ್ಡ ಜಾನುವಾರು, ಸಣ್ಣ ಜಾನುವಾರುಗಳು ಆಕಸ್ಮಿಕವಾಗಿ ಸಾವು ಸಂಭವಿಸಿದಾಗ ಪರಿಹಾರ ನೀಡಲು ಕ್ರಮಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಅಗ್ನಿಶಾಮಕ ಇಲಾಖೆಗೆ ಅಗತ್ಯ ವಾಹನ ಖರೀದಿಗಾಗಿ ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ನಗರ ಪ್ರದೇಶಗಳಲ್ಲಿ ರಾಜಕಾಲುವೆಗಳು ಮತ್ತು ಚರಂಡಿಗಳ ಸ್ವಚ್ಛತೆಗೆ ಕ್ರಮವಹಿಸಿ ಮಳೆಯ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಕಟ್ಟೆ, ಗೋಕಟ್ಟೆ, ಬೃಹತ್ ನೀರಾವರಿಗಳ ಬಗ್ಗೆ ಪ್ರತ್ಯೇಕವಾಗಿ ಪಟ್ಟಿ ತಯಾರಿಸಿ ನೀಡುವಂತೆ ಸೂಚಿಸಿದ ಅವರು, ನಗರದ ಸ್ವಚ್ಛತೆಗೆ ಹೆಚ್ಚು ಗಮನಹರಿಸಿ ನೀರು ನಿಲ್ಲದಂತೆ ಎಚ್ಚರವಹಿಸಿ ಎಂದರು.ಪ್ಲಾಸ್ಟಿಕ್ ಅನ್ನು ರಸ್ತೆಗಳಲ್ಲಿ ಬಿಸಾಡುವುದನ್ನು ತಪ್ಪಿಸಲು ಕ್ರಮ ವಹಿಸಿ ಎಂದು ಸೂಚಿಸಿದರು.

ಮಳೆಗಾಳಿಗೆ ಬೀಳುವಂತಿರುವ ವಿದ್ಯುತ್ ಕಂಬಗಳು ಹಾಗೂ ಜೋತಾಡುವ ವಿದ್ಯುತ್ ತಂತಿಗಳನ್ನು ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರಲ್ಲದೆ, ವಿದ್ಯುತ್ ಕಂಬಗಳಿಂದ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಂಡು ಬಳಕೆ ಮಾಡಲಾಗುತ್ತಿದೆಯೇ ಎಂಬುದನ್ನು ಗಮನಹರಿಸಿ ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಗಮನಹರಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದರು.

ನಾಯಿ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿದಲ್ಲಿ ಮುಂದಿನ ಮೂರು ನಾಲ್ಕು ವರ್ಷಗಳಲ್ಲಿ ನಾಯಿ ಹಾವಳಿಯನ್ನು ನಿಯಂತ್ರಿಸ ಬಹುದಾಗಿದೆ. ಶಾಲಾ ಆವರಣ, ಆಸ್ಪತ್ರೆ ಆವರಣ ಹಾಗೂ ಮತ್ತಿತರ ಕಡೆಗಳಲ್ಲಿ ಮರದ ಕೊಂಬೆಗಳು ವಿದ್ಯುತ್ ತಂತಿಗೆ ತಾಗುವಂತಿದ್ದರೆ ಅವುಗಳನ್ನು ಕತ್ತರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಯಾವುದೇ ಸಮಸ್ಯೆ ಇದ್ದರೂ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!