ಕೊಡಗು ಜಿಲ್ಲೆಯ 64 ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಪರವಾನಗಿ ನೀಡುವ ಸಂಬಂಧ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮಾಹಿತಿ ಒದಗಿಸುವಂತೆ ಖಾಸಗಿ ಬಸ್ ಮಾಲೀಕರ ಸಂಸ್ಥೆಯವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ಮಾಡಿದ್ದಾರೆ. ಶುಕ್ರವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆಯ 64 ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಪರವಾನಗಿ ನೀಡುವ ಸಂಬಂಧ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮಾಹಿತಿ ಒದಗಿಸುವಂತೆ ಖಾಸಗಿ ಬಸ್ ಮಾಲೀಕರ ಸಂಸ್ಥೆಯವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಬೇಡಿಕೆ ಸಂಬಂಧ ಈಗಾಗಲೇ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಬಗ್ಗೆ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಸರ್ವೇ ಮಾಡಲಾಗಿದ್ದು, ಈ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಖಾಸಗಿ ಬಸ್ ಸಂಸ್ಥೆಯವರು ಅಕ್ಟೋಬರ್ ಕೊನೆ ವಾರದಲ್ಲಿ ನಡೆಯುವ ಸಭೆಗೂ ಮುಂಚಿತವಾಗಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಖಾಸಗಿ ಬಸ್‌ಗಳ ಓಡಾಟಕ್ಕೆ ಯಾವ ರೀತಿ ತೊಂದರೆಯಾಗುತ್ತದೆ ಎಂಬ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು. ಸಾರಿಗೆ ಸಂಪರ್ಕ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸ್ಪಂದಿಸುವುದು ಅತಿ ಮುಖ್ಯವಾಗಿದೆ. ಎಲ್ಲರೂ ಸಹಕಾರ ಮನೋಭಾವದಿಂದ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬಸ್ ಸಂಚಾರ ಸಂಬಂದ ಪ್ರತಿಯೊಬ್ಬರೂ ಸರ್ಕಾರದ ನಿಯಮ ಪಾಲಿಸಬೇಕು. ಸಾರ್ವಜನಿಕರು, ವಿದ್ಯಾರ್ಥಿಗಳು ಹೀಗೆ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಖಾಸಗಿ ಬಸ್ ಸಂಸ್ಥೆಗಳ ಪರವಾಗಿ ಮಾತನಾಡಿದ ವಕೀಲರು, ಬಸ್‌ಗಳ ವೇಳಾಪಟ್ಟಿಯಂತೆ ಯಾವುದೇ ಬಸ್‌ಗಳು ಅರ್ಧಗಂಟೆಗೊಮ್ಮೆ ಸಂಚರಿಸುವಂತಾಗಬೇಕು ಎಂದು ಕೋರಿದರು.
ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಮೇಶ್ ಜೋಯಪ್ಪ ಮಾತನಾಡಿ, ಕೋವಿಡ್ ನಂತರ ಖಾಸಗಿ ಬಸ್‌ಗಳು ನಷ್ಟದಲ್ಲಿ ಸಂಚರಿಸುತ್ತಿವೆ. ಆದ್ದರಿಂದ ಖಾಸಗಿ ಬಸ್‌ಗಳ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಹಿಂದಿನಿಂದಲೂ ಸಾರ್ವಜನಿಕರಿಗಾಗಿ ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ಜಿಲ್ಲೆಯ ಕುಗ್ರಾಮಗಳಲ್ಲೂ ಸಹ ಖಾಸಗಿ ಬಸ್‌ಗಳು ಓಡಾಡುತ್ತಿವೆ ಎಂದು ರಮೇಶ್ ಜೋಯಪ್ಪ ಸಭೆಯ ಗಮನಕ್ಕೆ ತಂದರು.
ಕೆಎಸ್‌ಆರ್‌ಟಿಸಿ ಸಂಸ್ಥೆಯ ವಿಭಾಗದ ಡಿಟಿಒ ಜೈಶಾಂತ ಮಾತನಾಡಿ, ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಕೊಡಗು ಜಿಲ್ಲೆಯಲ್ಲಿ 64 ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಪರವಾನಗಿ ನೀಡುವಂತಾಗಬೇಕು ಎಂದು ಮನವಿ ಮಾಡಿದರು.
ಕೊಡಗು ಜಿಲ್ಲೆಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ ಕಲ್ಪಿಸುವಂತೆ ಸಾರ್ವಜನಿಕರಿಂದ ಸಾಕಷ್ಟು ಬೇಡಿಕೆ/ ಮನವಿ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಪರವಾನಗಿ ನೀಡುವಂತೆ ಸಭೆಯಲ್ಲಿ ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಾಚಾರ್, ಖಾಸಗಿ ಬಸ್ ಮಾಲಿಕರು, ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.