ಬಳ್ಳಾರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾದ್ಯಂತ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಮೊದಲನೇ ಗೇಟ್ ಬಳಿಯ ಡಾ.ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಜರುಗಿತು.
ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಮಾಲಾರ್ಪಣೆ ಮಾಡುವುದರ ಮೂಲಕ ಸಂವಿಧಾನ ಶಿಲ್ಪಿಯ ಸಾಧನೆ, ಸೇವೆ ಸ್ಮರಿಸಿದರು.ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಸ್ಪಿ ರಂಜಿತಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಖಲೀಲಸಾಬ್, ಎಎಸ್ಪಿ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಸಕೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಸಮಾಜದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕ ಇವರ ಆಶ್ರಯದಲ್ಲಿ ಸಂವಿಧಾನದ ಹರಿಕಾರ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ಭಾನುವಾರ ಆಚರಿಸಲಾಯಿತು.
ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಪ್ರಭಾರ ಕುಲಪತಿ ಪ್ರೊ.ವಿಜಯಕುಮಾರ್ ಮಲಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ನಗರದ ಅಂಬೇಡ್ಕರ್ ಅವರ ಪುತ್ಥಳಿಗೆ ಪಕ್ಷದ ಮುಖಂಡರು ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.