ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು ಚಿತ್ರದುರ್ಗ ನಗರದ ವಿವಿಧ ಮತಗಟ್ಟೆ ಹಾಗೂ ಚೆಕ್ಪೋಸ್ಟ್ಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರದುರ್ಗ ತಾಲೂಕು ಕ್ಯಾದಿಗೆರೆ ಹಾಗೂ ನಗರದ ಆರ್‌ಟಿಓ ಕಚೇರಿ ಮುಂಭಾಗದ ಚೆಕ್‍ಪೋಸ್ಟ್‌ಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಚೆಕ್‍ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಿದರು.
ಬಿಸಿಯೂಟ ದವಸ ಧಾನ್ಯ ನಿರ್ವಹಣೆಗೆ ಸೂಚನೆ: ನಗರದ ಜೋಗಿಮಟ್ಟಿ ರಸ್ತೆಯ ಕರುವಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಪರಿಶೀಲನೆ ವೇಳೆ, ಶಾಲೆಯಲ್ಲಿ ಸರಿಯಾದ ರೀತಿಯಲ್ಲಿ ಬಿಸಿಯೂಟದ ದವಸ ಧಾನ್ಯಗಳ ನಿರ್ವಹಣೆ ಮಾಡದಿರುವುದು ಕಂಡುಬಂತು. ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಿಸಿಯೂಟಕ್ಕೆ ಬಳಸುವ ದವಸ ಧಾನ್ಯಗಳನ್ನು ಸರಿಯಾದ ಸ್ಥಳದಲ್ಲಿ ಶೇಖರಿಸಿಡಬೇಕು. ದಾಸ್ತಾನು ಸಂಗ್ರಹವನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.ನಗರದ ಸಂತ ಜೋಸೆಫರ ಕಾನ್ವೆಂಟ್ ಶಾಲೆ, ಮಹಾರಾಣಿ ಕಾಲೇಜು, ಕಾಮನಬಾವಿ ಬಡಾವಾಣೆ, ವಿ.ಪಿ.ಬಡಾವಣೆ ಶಾಲೆಗಳ ಮತಗಟ್ಟೆಗಳನ್ನು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯಕ್ತೆ ಎಂ.ರೇಣುಕಾ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.