ಡಿಸಿಸಿ ಬ್ಯಾಂಕ್, ಮನ್ಮುಲ್ ರೈತರ ಎರಡು ಕಣ್ಣುಗಳು ಇದ್ದಂತೆ: ಕೆ.ಎಂ.ಉದಯ್

KannadaprabhaNewsNetwork |  
Published : Nov 16, 2026, 01:45 AM IST
15ಕೆಎಂಎನ್ ಡಿ22  | Kannada Prabha

ಸಾರಾಂಶ

ರಾಜ್ಯದ ಎಲ್ಲಾ ಸಹಕಾರ ಸಂಘಗಳ ಉಳಿವು ಮತ್ತು ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಸಂಘಗಳಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು 20 ಕೋಟಿ ರು. ಅನುದಾನ ನೀಡಿದ್ದಾರೆ. ಸಹಕಾರ ಸಂಘಗಳ ಬಲವರ್ಧನೆಗೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಡಿಸಿಸಿ ಬ್ಯಾಂಕ್ ಮತ್ತು ಮನ್ಮುಲ್ ಸಂಸ್ಥೆಗಳು ಎರಡು ಕಣ್ಣುಗಳಾಗಿ ಜಿಲ್ಲೆಯ ಗ್ರಾಮೀಣ ಭಾಗದ ರೈತರು ಹಾಗೂ ಹೈನುಗಾರರ ಆರ್ಥಿಕ ಪ್ರಗತಿ ಸಾಧಿಸಲು ನೆರವಾಗಿವೆ ಎಂದು ಶಾಸಕ ಕೆ.ಎಂ.ಉದಯ್ ಬಣ್ಣಿಸಿದರು.

ಸಮೀಪದ ಅಣ್ಣೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ರಾಜ್ಯ ಸಹಕಾರ ಮಹಾ ಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಸಹಕಾರ ಇಲಾಖೆ, ಅಣ್ಣೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘ ಸೇರಿದಂತೆ ಮದ್ದೂರು ತಾಲೂಕಿನ ವಿವಿಧ ಸಹಕಾರ ಸಂಘಗಳ ಆಶ್ರಯದಲ್ಲಿ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಎಲ್ಲಾ ಸಹಕಾರ ಸಂಘಗಳ ಉಳಿವು ಮತ್ತು ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಸಂಘಗಳಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು 20 ಕೋಟಿ ರು. ಅನುದಾನ ನೀಡಿದ್ದಾರೆ. ಸಹಕಾರ ಸಂಘಗಳ ಬಲವರ್ಧನೆಗೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ ಎಂದರು.

ಸಹಕಾರ ಕ್ಷೇತ್ರದಲ್ಲಿ ಯುವಕರು ಜವಾಬ್ದಾರಿ ವಹಿಸಿಕೊಂಡು ಮುನ್ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ. ಡಿಸಿಸಿ ಬ್ಯಾಂಕ್ ಮತ್ತು ಮನ್ಮುಲ್‌ನಲ್ಲಿಯೂ ಯುವ ನಾಯಕತ್ವ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಈ ಹಿಂದೆ ಕೆಲವೇ ವ್ಯಕ್ತಿಗಳ ಹಿಡಿತದಲ್ಲಿದ್ದ ಸಹಕಾರ ಸಂಘಗಳು ಇಂದು ಪಾರದರ್ಶಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಇದರ ಪರಿಣಾಮವಾಗಿ ಸಂಘಗಳ ಆದಾಯವೂ ಗಣನೀಯವಾಗಿ ಹೆಚ್ಚಾಗಿದೆ ಎಂದರು.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಲೀಟರ್ ಹಾಲಿಗೆ ಏಕಕಾಲದಲ್ಲಿ 7 ರು. ಹೆಚ್ಚಳ ಮಾಡಿರುವುದು ಸರ್ಕಾರದ ರೈತಪರ ಕಾಳಜಿಗೆ ಸಾಕ್ಷಿಯಾಗಿದೆ. ರೈತರ ಹಾಗೂ ಹೈನುಗಾರರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ರೈತರು ದುಬಾರಿ ಪಶು ಆಹಾರ ಖರೀದಿಸುವ ಬದಲು ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಆಹಾರ ನೀಡಿ ಹೆಚ್ಚಿನ ಹಾಲು ಉತ್ಪಾದಿಸುವ ವಿಧಾನಗಳನ್ನು ತಿಳಿದುಕೊಳ್ಳಬೇಕು. ಇದಕ್ಕಾಗಿ ಪಶು ಆಹಾರ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಪ್ರಾತ್ಯಕ್ಷಿಕೆಗಳನ್ನು ಆಯೋಜಿಸಲಾಗಿದೆ ಎಂದರು.

ಜಿಲ್ಲೆಯ ಅನೇಕ ಹಾಲು ಉತ್ಪಾದಕರ ಸಂಘಗಳು ಹಾಗೂ ಡೈರಿಗಳಿಗೆ ಸ್ವಂತ ಕಟ್ಟಡಗಳಿಲ್ಲದೆ ಕೆಲವು ಸಂಘಗಳು ಹಳೆಯ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿವೆ. ಇವುಗಳ ಅಭಿವೃದ್ಧಿಗಾಗಿ ಈ ಬಾರಿ ವಿಶೇಷ ಅನುದಾನ ಒದಗಿಸಲಾಗುತ್ತಿದೆ. ಈ ಅನುದಾನವನ್ನು ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಬಳಸದೆ, ಸೊಸೈಟಿ, ಡೈರಿ ಹಾಗೂ ಉತ್ಪಾದಕರ ಸಂಘಗಳ ಕಟ್ಟಡ ನಿರ್ಮಾಣ ಮತ್ತು ಅಭಿವೃದ್ಧಿಗೆ ವಿನಿಯೋಗಿಸಬೇಕು ಎಂದರು.

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಮಾತನಾಡಿ, ಗ್ರಾಮೀಣ ರೈತರು ಹಾಗೂ ಹೈನುಗಾರರಿಗೆ ಆರ್ಥಿಕ ನೆರವು ಒದಗಿಸುವಲ್ಲಿ ಡಿಸಿಸಿ ಬ್ಯಾಂಕ್ ಪ್ರಮುಖ ಪಾತ್ರ ವಹಿಸುತ್ತಿದೆ. ಕಡಿಮೆ ಬಡ್ಡಿದರದಲ್ಲಿ ವಿವಿಧ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ರೈತರ ಆರ್ಥಿಕ ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಬ್ಯಾಂಕ್ ಸದಾ ಶ್ರಮಿಸುತ್ತಿದೆ ಎಂದರು.

ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಮಳಿಗೆಯಲ್ಲಿ ಕೆವಿಎಸ್ ಸರ್ಟಿಫಿಕೇಟ್ ಯೋಜನೆಯ ಕುರಿತು ಮಾಹಿತಿ ನೀಡಲಾಯಿತು.

ಮನ್ಮುಲ್ ಅಧ್ಯಕ್ಷ ಹರೀಶ್ ಬಾಬು ಮಾತನಾಡಿ, ಹೈನುಗಾರರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ಪ್ರತಿ ಲೀಟರ್ ಹಾಲಿಗೆ 7 ರೂ. ಹೆಚ್ಚಳ ಮಾಡುವ ಮೂಲಕ ಸಂಕಷ್ಟದಲ್ಲಿದ್ದ ರೈತರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಮನ್ಮುಲ್ ನಿರ್ದೇಶಕ ಎ.ಎಸ್.ರಾಜೀವ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ತೈಲೂರು ಚೆಲುವರಾಜು, ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಜೋಗಿಗೌಡ, ನಿರ್ದೇಶಕ ಸಂದರ್ಶ್, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಂ. ನಂದೀಶ್, ಉಪಾಧ್ಯಕ್ಷೆ ಜ್ಯೋತಿ, ನಿರ್ದೇಶಕ ಆರ್.ಸಿ.ಎಸ್.ಮಹೇಶ್, ಗಿರೀಶ್ ಕ್ಯಾತಘಟ್ಟ, ಮೆಣಸಗೆರೆ ಪ್ರಕಾಶ್, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಕೆ. ಅನಿತಾ , ನಾಗಭೂಷಣ್, ಮನ್ಮುಲ್ ವ್ಯವಸ್ಥಾಪಕ ಡಾ.ಮಂಜೇಶ್ ಗೌಡ, ನಿವೃತ್ತ ಪ್ರಾಧ್ಯಾಪಕ ಬಿ.ಎಸ್. ಬೋರೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಹಕಾರ ಸಂಘಗಳ ಪದಾಧಿಕಾರಿಗಳು, ರೈತರು ಹಾಗೂ ರೈತ ಮಹಿಳೆಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಸಂಪರ್ಕ ಹೆಚ್ಚಳದಿಂದ ಅಭಿವೃದ್ಧಿಗೆ ಪೂರಕ: ಶಾಸಕ ದಿನಕರ ಶೆಟ್ಟಿ
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಕೆ.ರುದ್ರಪ್ಪ ಆಯ್ಕೆ