ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸೇರಿದಂತೆ ಎಲ್ಲರೂ ಪಕ್ಷ ಹೇಳಿದಂತೆ ಕೇಳುತ್ತೇವೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿ. ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ತ್ಯಾಗದ ಇತಿಹಾಸದ ಬಗ್ಗೆ ನಮಗೆಲ್ಲ ಗೊತ್ತಿದೆ. ಆದ್ದರಿಂದ ವಿಶೇಷ ಅರ್ಥವನ್ನು ಕಲ್ಪಿಸುವುದು ಬೇಡ ಎಂದು ಪ್ರಶ್ನೆಯೊಂದಕ್ಕೆ ಸಚಿವೆ ಉತ್ತರಿಸಿದರು.ನವೆಂಬರ್ ಕ್ರಾಂತಿ ಅಂದರೆ ಬರೀ ಭ್ರಾಂತಿ ಎಂದು ಸಚಿವ ಎಚ್.ಸಿ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅವರು ನಮ್ಮ ಪಕ್ಷದ ಹಿರಿಯ ಮುಖಂಡರು, ಸಂಪುಟದಲ್ಲಿ ಅತ್ಯಂತ ಬುದ್ಧಿವಂತ ಮಂತ್ರಿ. ಅವರೇನು ಹೇಳಿದರೂ ಅದಕ್ಕೆ ನಾನು ಬೆಂಬಲಿಸುತ್ತೇನೆ ಎಂದು ಹೇಳಿದರು. ಪ್ರತ್ಯೇಕ ರಾಜ್ಯಕ್ಕೆ ಬೆಂಬಲ ಇಲ್ಲ:ಕರ್ನಾಟಕ ರಾಜ್ಯೋತ್ಸವ ದಿನ ಬಹಳ ಪವಿತ್ರವಾದದ್ದು. ಕನ್ನಡ ನಾಡಿನ ಏಕೀಕರಣದ ದಿನ, ಈ ದಿನ ನಾನು ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುವುದಿಲ್ಲ. ಪ್ರತ್ಯೇಕ ಧ್ವಜ ಹಾರಿಸಿದವರಿಗೆ ನಾನು ಬೆಂಬಲ ಮಾಡಲ್ಲ, ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು.
ಧರ್ಮಸ್ಥಳ ಪವಿತ್ರ ಕ್ಷೇತ್ರ:ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಕೋರ್ಟ್ ನಿರ್ಬಂಧ ಹೇರಿದೆ. ಕೋರ್ಟ್ ಆದೇಶವನ್ನು ನಾವು ಪಾಲಿಸುತ್ತೇವೆ. ಸರ್ಕಾರಕ್ಕೆ, ತನಿಖೆಗೆ ಹಿನ್ನಡೆ ಆಗಿದೆ ಎಂಬುದು ಸರಿಯಲ್ಲ. ತಡೆಯಾಜ್ಞೆಯನ್ನು ತೆರವು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಧರ್ಮಸ್ಥಳ ಪವಿತ್ರ ಕ್ಷೇತ್ರ ಕ್ಷೇತ್ರ ಎಂಬ ಸಂದೇಶ ಹೊರಗೆ ಬರಬೇಕು ಎಂದರು.-------