ಕನ್ನಡಪ್ರಭ ವಾರ್ತೆ ಮಂಡ್ಯ
ವಕ್ಫ್ ಕಾಯಿದೆ ಸಮಾಜ ವಿರೋಧಿಯಾಗಿದ್ದು ಸಮಾಜಕ್ಕೆ ಮಾರಕವಾಗಿದೆ. ಕೇಂದ್ರ ಸರ್ಕಾರ ವಕ್ಫ್‌ಗೆ ನೀಡಿರುವ ಅಧಿಕಾರವನ್ನು ನಿಷ್ಕ್ರಿಯಗೊಳಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಹಾಡ್ಯ ರಮೇಶ್‌ರಾಜು ಒತ್ತಾಯಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ವಿವಿಧ ಸಂಘಟನೆಗಳ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿ, ಅಸಂವಿಧಾನಿಕವಾದ ವಕ್ಫ್ ಕಾಯಿದೆ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ಎಲ್ಲರೂ ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಿ ಈ ದುರಂತದಿಂದ ಪಾರಾಗಬೇಕು. ರಾಜ್ಯ ಸರ್ಕಾರ ಒಂದು ದಿನದ ಅಧಿವೇಶನ ಕರೆದು ಕಾಯ್ದೆಗೆ ನೀಡಿರುವ ಅಧಿಕಾರವನ್ನು ರದ್ದುಪಡಿಸಬೇಕು ಎಂಬ ಒಂದು ಸಾಲಿನ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕು ಎಂದು ಒತ್ತಾಯಿಸಿದರು.
ವಕ್ಫ್‌ನಿಂದ ಆಗುತ್ತಿರುವ ಅವಾಂತರಗಳನ್ನು ವಿರೋಧಿಸಲು ವಕ್ಫ್ ವಿರೋಧಿ ರೈತ ಒಕ್ಕೂಟ ಸ್ಥಾಪಿಸಿ ಸ್ವಾಮೀಜಿಗಳ ನೇತೃತ್ವದಲ್ಲಿ ಇದೇ ನ.೧೯ ರಂದು ನಗರದ ಸಿಲ್ವರ್ ಜುಬಿಲಿ ಪಾರ್ಕ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಮುಂಬರುವ ನ.೨೬ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಎಲ್ಲ ಸಂಘಟನೆಗಳು ಈ ಹೋರಾಟಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.ಸಭೆಯಲ್ಲಿ ಭಾರತೀಯ ಕಿಸಾನ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಜಿಲ್ಲಾಧ್ಯಕ್ಷ ಬೂದನೂರು ಅಪ್ಪಾಜಿ, ಜಿ.ಸಿ.ಬಸವರಾಜು, ಜೈ ಕರ್ನಾಟಕ ಪರಿಷತ್ ರಾಜ್ಯಾಧ್ಯಕ್ಷ ಎಸ್.ನಾರಾಯಣ್, ಕದಂಬ ಸೇನೆ ರಾಜ್ಯ ಅಧ್ಯಕ್ಷ ಬೇಕ್ರಿ ರಮೇಶ್, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜೋಗಿಗೌಡ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಸಾತನೂರು ವೇಣುಗೋಪಾಲ್, ಭಜರಂಗ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್, ಸೊ.ಸಿ. ಪ್ರಕಾಶ್, ಕರ್ನಾಟಕ ರಕ್ಷಣಾ ವೇದಿಕೆಯ ಅಶೋಕ್ ಮತ್ತಿತರರಿದ್ದರು.