ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಕಂದಾಯ ಗ್ರಾಮಗಳ ರಚನೆ ಕುರಿತಂತೆ ಜೂನ್ 30 ರ ಗಡುವು ನಿಗದಿಪಡಿಸಲಾಗಿದ್ದು, ಹೊಸ ಕಂದಾಯ ಘಟಕಗಳ ರಚನೆಗೆ ನಿಷೇಧ ಅನ್ವಯ ಆಗಲಿದೆ. ಈ ನಿಷೇಧ ತೆರವಾಗಲು 2 ವರ್ಷ ಆಗಬಹುದು. ಹೀಗಾಗಿ ಬಾಕಿ ಇರುವ ಎಲ್ಲ ಕಂದಾಯ ಗ್ರಾಮಗಳ ರಚನೆ ಕಾರ್ಯ ಜೂ. 30ರೊಳಗಾಗಿ ಪೂರ್ಣಗೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಪಂಯಲ್ಲಿ ವಸತಿ ಪ್ರದೇಶಗಳ ಪಟ್ಟಿ ಇದೆ. ಕಂದಾಯ ಗ್ರಾಮಗಳ ಸಂಖ್ಯೆಗಿಂತ ವಸತಿ ಪ್ರದೇಶಗಳ ಸಂಖ್ಯೆ ಹೆಚ್ಚಿದೆ. ಇಲ್ಲಿ ದಾಖಲೆ ರಹಿತ ವಸತಿ ಪ್ರದೇಶಗಳ ನಮೂದಾಗಿರುತ್ತವೆ. ಕಂದಾಯ ಇಲಾಖೆಯ ಬಳಿ ದಾಖಲೆ ಸಹಿತ ಗ್ರಾಮಗಳ ಮಾಹಿತಿ ಇರುತ್ತದೆ ಎಂದು ತಿಳಿಸಿದ ಅವರು, ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗಮನಿಸಿ, ಗ್ರಾಮ ರಚನೆ ಮಾಡಬೇಕು. ದಾಖಲೆ ರಹಿತ ಇದ್ದಲ್ಲಿ ಅವರಿಗೆ ಒಂದು ದಾಖಲೆ ಕಲ್ಪಿಸಿ, ಬದುಕು ಕಲ್ಪಿಸಿಕೊಡಬೇಕಿದೆ ಎಂದರು.
ಜಿಲ್ಲೆಯಲ್ಲಿ ಹಟ್ಟಿ, ತಾಂಡಾ ನಿವಾಸಿಗಳಿಗೆ ಶಾಶ್ವತ ನೆಮ್ಮದಿ ನೀಡುವ ಸಲುವಾಗಿ ತಾಂಡಾಗಳಿಗೆ ಕಂದಾಯ ಗ್ರಾಮದ ಸ್ಥಾನಮಾನ ನೀಡಲು ನಮ್ಮ ಸರ್ಕಾರ ನಿರ್ಧರಿಸಿದ್ದು, ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಅರ್ಹವಿರುವ ಗ್ರಾಮಗಳಿಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪ್ರತಿಕ್ರಿಯಿಸಿ, ಕಂದಾಯ ಗ್ರಾಮಗಳ ರಚನೆಗೆ ಜಿಲ್ಲೆಯಲ್ಲಿ ಒಟ್ಟು 74 ಗ್ರಾಮಗಳ ಗುರುತಿಸಲಾಗಿದ್ದು, ಈಗಾಗಲೇ 71 ಪ್ರಾಥಮಿಕ ಸೂಚನೆ ಹಾಗೂ ಸರ್ಕಾರದಿಂದ 51 ಗ್ರಾಮಗಳು ಅಂತಿಮ ಅಧಿಸೂಚನೆ ಹೊರಡಿಸಿದ್ದು, 1 ಗ್ರಾಮವು ಅಂತಿಮ ಅಧಿಸೂಚನೆಗೆ ಸಲ್ಲಿಕೆಯಾಗಿದೆ. ಇನ್ನೂ 19 ಗ್ರಾಮಗಳು ಅಂತಿಮ ಅಧಿಸೂಚನೆಗೆ ಬಾಕಿ ಇರುವ ಗ್ರಾಮಗಳಾಗಿವೆ ಎಂದು ಮಾಹಿತಿ ನೀಡಿದರು.
ಭೂ ಸುರಕ್ಷಾ ಯೋಜನೆಯನ್ನು ಭೂ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದು, ಈ ಯೋಜನೆ ತ್ವರಿತಗತಿಯಲ್ಲಿ ಆಗಬೇಕು. ಜಿಲ್ಲೆಯಲ್ಲಿ ಸರಾಸರಿ 10 ಸಾವಿರ ಪುಟಗಳ ಸ್ಕ್ಯಾನ್ ಹಾಗೂ ಅಪ್‌ಲೋಡ್ ಆಗಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ರಾಜ್ಯ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ. ಇದೇ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.