ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಜರುಗಿದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂದು ಬೆಳಗ್ಗೆ 7.30ಕ್ಕೆ ಜಿಲ್ಲಾಡಳಿತ ಭವನದ ಮುಂದೆ ಇರುವ ಅಶೋಕ ಸ್ಥಂಬದ ವೃತ್ತದಿಂದ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.
ಮೆರವಣಿಗೆಯಲ್ಲಿ ನಾಡಿನ ಸಾಹಿತ್ಯ, ಇತಿಹಾಸ, ಸಂಸ್ಕೃತಿ, ಚಾಲುಕ್ಯರ ಪರಂಪರೆ ಹಾಗೂ ಕರ್ನಾಟಕ ವೈಭವ ಬಿಂಬಿಸುವಂತ ಸ್ಥಬ್ಧ ಚಿತ್ರ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡ ಆಹ್ವಾನಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಲಾಯಿತು. ಕನ್ನಡ ಸಾಹಿತ್ಯ ಪರಂಪರೆಗೆ ಬಾಗಲಕೋಟೆ ಜಿಲ್ಲೆ ಪಾತ್ರ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಕನ್ನಡ ನಾಡು ನುಡಿಯ ಕುರಿತು ಕನ್ನಡ ಗೀತೆಗಳ ಸಮೂಹ ಗಾಯನ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆಗೆ ಕ್ರಮವಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.ಕಾರ್ಯಕ್ರಮ ಸಿದ್ಧತೆಗೆ ವಿವಿಧ ಸಮಿತಿ ರಚಿಸಲಾಗಿದ್ದು, ಸಮಿತಿ ಸದಸ್ಯರ ಕರ್ತವ್ಯಗಳ ಬಗ್ಗೆ ಸಭೆ ಕರೆದು ಕಾರ್ಯಕ್ರಮ ರೂಪು-ರೇಷೆ ತಯಾರಿಸಿ, ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರ ಗೀತೆ, ನಾಡಗೀತೆ ಹಾಗೂ ಕುವೆಂಪು ವಿರಚಿತ ನೇಗಿಲಯೋಗಿ ಗೀತೆ ಹಾಡಿಸುವ ವ್ಯವಸ್ಥೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಯಿತು.
ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಎಲ್ಲ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಯಿತು. ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು. ಜಿಲ್ಲೆಯಾದ್ಯಂತ ಕನ್ನಡಕ್ಕೆ ಮೊದಲ ಆದ್ಯತೆ ನೀಡುವ ಜೊತೆಗೆ ಜಿಲ್ಲೆಯಲ್ಲಿ ಶೇ.60ರಷ್ಟು ಸಮರ್ಪಕ ಕನ್ನಡ ಅನುಷ್ಠಾನ ಹಾಗೂ ಕನ್ನಡದಲ್ಲಿಯೇ ನಾಮಫಲಕ ಕಡ್ಡಾಯವಾಗಿ ಅಳವಡಿಕೆಗೆ ಕ್ರಮವಹಿಸುವಂತೆ ಕನ್ನಡಪರ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು. ಪ್ರಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಸ್ವಾಗತಿಸಿ, ಕೊನೆಗೆ ವಂದಿಸಿದರು.