ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ: ದಿನೇಶ್ ಗುಂಡೂರಾವ್‌

KannadaprabhaNewsNetwork |  
Published : Oct 08, 2025, 01:00 AM IST
ಕೊಪ್ಪ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌, ಶಾಸಕ ಟಿ.ಡಿ. ರಾಜೇಗೌಡ ಇದ್ದರು. | Kannada Prabha

ಸಾರಾಂಶ

ಕೊಪ್ಪ, ರಾಜ್ಯದ ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರನ್ನು ಕಡ್ಡಾಯವಾಗಿ ನೇಮಕ ಮಾಡಲು ತೀರ್ಮಾನ ಮಾಡಿರುವ ಸರ್ಕಾರ ತಾಯಿ ಮಗುವಿನ ಆರೋಗ್ಯಕ್ಕೆ ಆದ್ಯತೆ ನೀಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- ತಾಯಿ ಮತ್ತು ಮಕ್ಕಳ ಆಸ್ಪತ್ರೆ, ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗ ಶಾಲೆ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಕೊಪ್ಪ

ರಾಜ್ಯದ ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರನ್ನು ಕಡ್ಡಾಯವಾಗಿ ನೇಮಕ ಮಾಡಲು ತೀರ್ಮಾನ ಮಾಡಿರುವ ಸರ್ಕಾರ ತಾಯಿ ಮಗುವಿನ ಆರೋಗ್ಯಕ್ಕೆ ಆದ್ಯತೆ ನೀಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಪ್ಪ ಪಟ್ಟಣದಲ್ಲಿ ₹14 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಅವರು, ತಲಾ ಇಬ್ಬರಂತೆ ಸ್ತ್ರೀರೋಗ, ಮಕ್ಕಳ ತಜ್ಞರು, ಅರಿವಳಿಕೆ ತಜ್ಞರು, ಒಬ್ಬರು ರೆಡಿಯಾಲಾಜಿಸ್ಟ್ ಅನ್ನು ನೇಮಿಸಿಕೊಳ್ಳಲಾಗುವುದು. ಜನರಿಗೆ ಅಗತ್ಯ ಸೇವೆ ಪೂರೈಸಲು ಸರ್ಕಾರ ಬದ್ಧವಾಗಿದೆ. ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು.ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಯನ್ನು ಕೇವಲ ಮೂರು ತಿಂಗಳಲ್ಲಿ ಅನುಷ್ಠಾನಕ್ಕೆ ತಂದರು. ಸರ್ಕಾರ ನುಡಿದಂತೆ ನಡೆದಿದ್ದು, ದೇಶದ ಜನರಿಗೆ ಅಚ್ಚರಿಯಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇದೆ. ಮಹಿಳಾ ಸಬಲೀಕರಣಕ್ಕೆ ಒತ್ತು ಕೊಟ್ಟಿದೆ. ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆತ್ಮ ಗೌರವ ಸಿಕ್ಕಿದೆ ಎಂದು ಹೇಳಿದರು.100 ಹಾಸಿಗೆಗಳ ಆಸ್ಪತ್ರೆ ಮಂಜೂರು ಮಾಡಿ ಶೃಂಗೇರಿಯ ಋಣ ತೀರಿಸುವ ಕೆಲಸ ಮಾಡಿದ್ದು, ಇನ್ನು ಆರೇಳು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಬೇಕಿದೆ. ನಮ್ಮ ಸರ್ಕಾರದ ಅವಧಿಯಲ್ಲಿಯೇ ಉದ್ಘಾಟನೆಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇಂದು ವಾಲ್ಮೀಕಿ ಜಯಂತಿ, ರಾಮಾಯಣ ಭಾರತದ ಬೆಳವಣಿಗೆಗೆ ಸ್ಫೂರ್ತಿ ಎಂದು ಈ ಸಂದರ್ಭದಲ್ಲಿ ಸ್ಮರಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೂತನ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿ, ವಾಲ್ಮೀಕಿ ಬರೆದ ರಾಮಾಯಣವನ್ನು ಭಾರತ ಮಾತ್ರವಲ್ಲ ಇಡೀ ಪ್ರಪಂಚವೇ ಶ್ಲಾಘಿಸುತ್ತದೆ. ಅಯೋಧ್ಯೆ ರಾಮನ ಆದರ್ಶ ಕೊಟ್ಟ ಮಾತನ್ನು ಪಾಲಿಸಲು ಮಾತ್ರವೇ ಹೊರತು ಅಧಿಕಾರಕ್ಕಾಗಿ ಅಲ್ಲ. ರಾಮಾಯಣ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲಾ ಧರ್ಮದವರಿಗೂ ದಾರಿದೀಪ ಎಂದು ಹೇಳಿದರು.ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಗ್ಯಾರಂಟಿ ಯೋಜನೆಗೆ ₹50-60 ಸಾವಿರ ಕೋಟಿ ಕೊಟ್ಟರೂ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ಹಿಂದೆ ಬಿದ್ದಿಲ್ಲ. ಅಭಿವೃದ್ಧಿ ನಿಟ್ಟಿನಲ್ಲಿ ₹14.69 ಕೋಟಿ ವೆಚ್ಚದಲ್ಲಿ ಇಲ್ಲಿ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಾಣವಾಗಿದೆ. ಆಸ್ಪತ್ರೆ ಮುಂದುವರಿದ ಅಭಿವೃದ್ಧಿ ಕಾಮಗಾರಿಗೆ ಸಚಿವರನ್ನು ಕೇಳಿದ ಕೂಡಲೇ ₹1.34 ಕೋಟಿ ಮಂಜೂರು ಮಾಡಿದ್ದಾರೆ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತುಕೊಟ್ಟು ಕೆಲಸ ಮಾಡುತ್ತಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ವಾಲ್ಮೀಕಿ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಉಪ ವಿಭಾಗಾಧಿಕಾರಿ ಸುದರ್ಶನ್, ಆರೋಗ್ಯ ಇಲಾಖೆ ಮೈಸೂರು ವಿಭಾಗ ಜಂಟಿ ನಿರ್ದೇಶಕಿ ಮಲ್ಲಿಕಾ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್‌ಬಾಬು, ತಹಸೀಲ್ದಾರ್ ಲಿಖಿತಾ ಮೋಹನ್, ಪಪಂ ಅಧ್ಯಕ್ಷೆ ಎಚ್.ಆರ್.ರೇಖಾ, ತಾಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರ ಕಿರೀಟಿ, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್, ಆರೋಗ್ಯ ಶಿಕ್ಷಣಾಧಿಕಾರಿ ಸುಧಾಕರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ಬಗರ್ ಹುಕುಂ ಸಮಿತಿ ಸದಸ್ಯರು, ಕೆಡಿಪಿ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

೭ಸಿಕೆಎಂ೭: 7 ಕೆಸಿಕೆಎಂ 4ಕೊಪ್ಪದ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌, ಶಾಸಕ ಟಿ.ಡಿ. ರಾಜೇಗೌಡ ಇದ್ದರು.

PREV

Recommended Stories

ರಾಜ್ಯದಲ್ಲಿ 18500 ಶಿಕ್ಷಕರ ನೇಮಕ : ಮಧು ಬಂಗಾರಪ್ಪ
ವಾಯವ್ಯ ಸಾರಿಗೆಗೆ ಶೀಘ್ರ 700 ಹೊಸ ಬಸ್‌ : ಕಾಗೆ