ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಸಭೆಯ ತೀರ್ಮಾನದಂತೆ ಜನವರಿ 17 ರಿಂದ 19ರವರೆಗೆ ಅದ್ಧೂರಿಯಾಗಿ ಉತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಬೆಳಗಾವಿಯ ಚಲಿಗಾಲದ ಅಧಿವೇಶನ ಡಿ.19ರವರೆಗೆ ನಡೆಯಲಿದೆ. ಜನವರಿ 3 ರಿಂದ ಬಾದಾಮಿ ಬನಶಂಕರಿ ದೇವಿಯ ಜಾತ್ರೆ ಕೂಡ ಒಂದು ತಿಂಗಳವರೆಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉತ್ಸವ ಮುಂದೂಡಲಾಗಿದೆ. ಕಾರ್ಯಕ್ರಮದ ಸಿದ್ಧತೆ ಈಗಾಗಲೇ ಪ್ರಾರಂಭಗೊಂಡಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೊಂದು ರಾಷ್ಟ್ರೀಯ ಉತ್ಸವವಾಗಿರುವುದರಿಂದ ಅಂತಾರಾಷ್ಟ್ರೀಯ ಮಟ್ಟದ ಖ್ಯಾತಕಲಾವಿದರು, ಸಂಗೀತಗಾರರು, ನೃತ್ಯ ತಂಡಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ತಿಳಿಸಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಿದಂತೆ ನೃತ್ಯೋತ್ಸವ ರೂಪದಲ್ಲಿ ಚಾಲುಕ್ಯ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಓಡಿಸ್ಸಾದಲ್ಲಿ ಮೂರು ತಿಂಗಳುಗಳ ಕಾಲ ನಡೆಯುತ್ತದೆ. ಆ ಮಾದರಿಯಲ್ಲಿ ಮೂರು ದಿನಗಳ ಕಾಲ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಇದಕ್ಕೆ ಕಾಲಾವಕಾಶ ಬೇಕಾಗಿರುವದರಿಂದ ಜನವರಿ 17ಕ್ಕೆ ಉತ್ಸವ ಮುಂದೂಡಲಾಗಿದೆ. ಈ ಬಾರಿ ನೃತ್ಯೋತ್ಸವ ಜೊತೆಗೆ ಗ್ರಾಮೀಣ ಕ್ರೀಡೆಗಳನ್ನು ಸಹ ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತವಿರುವ ಚಾಲುಕ್ಯರ ಐತಿಹಾಸಿಕ ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಮೆಲಕು ಹಾಕುವ ಈ ಮೂರು ದಿನಗಳ ಸಂಗೀತ ನೃತ್ಯೋತ್ಸವದಲ್ಲಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಕಲಾವಿದರು, ಸಂಗೀತಗಾರರು, ನೃತ್ಯ ತಂಡಗಳನ್ನು ಆಹ್ವಾನಿಸಲಾಗುತ್ತಿದೆ. ಚಾಲುಕ್ಯರ ನಾಡಿನ ಐತಿಹಾಸಿಕ ಪರಂಪರೆ ಕುರಿತಂತೆ ವಿಚಾರಗೋಷ್ಠಿ ಸಹ ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ದಿನ ಬಾದಾಮಿಯಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಐಹೊಳೆಯಲ್ಲಿ ಕಾರ್ಯಕ್ರಮದ ಸಮಾರೋಪ ನಡೆಯಲಿದೆ ಎಂದು ಹೇಳಿದರು.ಸುದ್ದಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಸೇರಿದಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಉಪಸ್ಥಿತರಿದ್ದರು.