ಹಾನಗಲ್ಲ: ಕುಸುಮ್ ಯೋಜನೆ ಮೂಲಕ ಪ್ರತಿ ತಾಲೂಕಿನಲ್ಲಿ 20 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಹಾನಗಲ್ಲ ವಿಧಾನಸಭಾ ಕ್ಷೇತ್ರದ ಅಕ್ಕಿಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ನೀಡಲಾಯಿತು. 2013ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್‌ಸೆಟ್‌ಗಳಿಗೆ ನೀಡುವ ತ್ರಿಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದರು.₹665 ಕೋಟಿ ವೆಚ್ಚದಲ್ಲಿ ಹಾನಗಲ್ಲ ಕ್ಷೇತ್ರದ ಬಾಳಂಬೀಡ ಏತ ನೀರಾವರಿ ಯೋಜನೆ, ಹಿರೇಕೌಂಶಿ ಮತ್ತು ಇತರ 9 ಗ್ರಾಮಗಳ 77 ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇವೆ. ₹2018 ಕೋಟಿ ವೆಚ್ಚದ ವರದಾ ಮತ್ತು ಬೇಡ್ತಿ ನದಿ ಜೋಡಣೆ ವಿಚಾರವನ್ನು ರಾಷ್ಟ್ರೀಯ ನದಿ ಪ್ರಾಧಿಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.
ರೈತರಿಗಾಗಿ ಹಾಲಿನ ಬೆಲೆ ಹೆಚ್ಚಳ ಮಾಡಿದ್ದೇವೆ. ಈ ಹಣವನ್ನು ಸರ್ಕಾರ ಏನಾದರೂ ತೆಗೆದುಕೊಂಡಿದೆಯೇ? ಇದನ್ನು ರೈತರಿಗೆ ನೀಡಿದ್ದೇವೆ. ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಾದಾಗ ಬಿಜೆಪಿಯವರು ಆಕ್ರೋಶ ವ್ಯಕ್ತಪಡಿಸಲಿಲ್ಲ. ಈಗ ಕಾಂಗ್ರೆಸ್ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರು ಯಾವಾಗ ನಮ್ಮ ಮೇಲೆ ಆಕ್ರೋಶ ವ್ಯಕ್ತಪಡಿಸಿದರೋ ಅದೇ ದಿನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿತು. ಅಧಿಕಾರದಲ್ಲಿ ಇರುವ ನಾವು ನಿಮ್ಮ ನೆರವಿಗೆ ನಿಲ್ಲಬೇಕೆ ಹೊರತು ಪಿಕ್ ಪಾಕೆಟ್ ಮಾಡಲು ಅಲ್ಲ ಎಂದರು.ನಾವು ಅಧಿಕಾರಕ್ಕೆ ಬರುವ ಮುಂಚೆ ಕೊಟ್ಟ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ನಿಮಗೆ ನಾವು ಆಸರೆಯಾಗಿ ನಿಂತು ಆಧಾರವಾಗಿದ್ದೇವೆ. ಕೇಂದ್ರ ಸರ್ಕಾರ ನಮ್ಮ ರಾಜ್ಯದಿಂದ ಹೋದ ತೆರಿಗೆಯಲ್ಲಿ ಕೇವಲ ಶೇ. 13ರಷ್ಟನ್ನು ಮಾತ್ರ ವಾಪಸ್ ಕೊಡುತ್ತಿದೆ. ಆದರೂ ನಾವು ₹4 ಲಕ್ಷ ಕೋಟಿಗೂ ಅಧಿಕ ಗಾತ್ರದ ಬಜೆಟ್ ಅನ್ನು ರಾಜ್ಯದ ಅಭಿವೃದ್ಧಿಗಾಗಿ ಮಂಡನೆ ಮಾಡಿದ್ದೇವೆ ಎಂದರು.ಗ್ಯಾರಂಟಿ ಯೋಜನೆ ವಿರೋಧ ಮಾಡುತ್ತಿದ್ದ ಬಿಜೆಪಿಯವರು ನಂತರ ಮಹಾರಾಷ್ಟ್ರ, ಹರಿಯಾಣ, ಮಧ್ಯಪ್ರದೇಶ, ದೆಹಲಿ ಚುನಾವಣೆಯಲ್ಲಿ ಅವರೂ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ಪ್ರಧಾನಿ ಕರ್ನಾಟಕದ ಖಜಾನೆ ಬರಿದಾಗಿ ಹೋಯಿತು ಎಂದರು. ಗ್ಯಾರಂಟಿ ಯೋಜನೆಗಳಿಗೆ ₹52 ಸಾವಿರ ಕೋಟಿ ಕೊಟ್ಟು ರಾಜ್ಯದಲ್ಲಿ ಸಾವಿರಾರು ಕೋಟಿ ರುಪಾಯಿಗಳ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ನಮಗೆ ಸಿಕ್ಕಿರುವ ಅವಕಾಶ ವ್ಯರ್ಥವಾಗಬಾರದು ಎಂದು ನಿಮ್ಮ ಸೇವೆ ಮಾಡುತ್ತಿದ್ದೇವೆ ಎಂದರು.
ನಾವು ಹಾನಗಲ್ಲ ಕ್ಷೇತ್ರಕ್ಕೆ ಕೇವಲ ಅಭಿವೃದ್ಧಿ ಕೆಲಸಗಳ ಉದ್ಘಾಟನೆಗೆ ಬಂದಿಲ್ಲ. ಬದಲಾಗಿ ನೀವು ನಮಗೆ ಕೊಟ್ಟ ಶಕ್ತಿಗೆ ಪ್ರತಿಯಾಗಿ ನಿಮ್ಮ ಋಣ ತೀರಿಸಲು ಬಂದಿದ್ದೇವೆ. ನೀವು ನಮ್ಮ ಪಕ್ಷದ ಮೇಲೆ ನಂಬಿಕೆಯಿಟ್ಟು ಆಯ್ಕೆ ಮಾಡಿದ್ದೀರಿ. ರಾಜಕಾರಣಿಗಳಿಗೆ ಅಂತಿಮವಾಗಿ ಮತದಾರನೇ ಈಶ್ವರ. ಮತದಾರನಿಗೆ ಸೇವೆ ಮಾಡಬೇಕು ಎಂಬುದು ನಮ್ಮ ಸಂಕಲ್ಪ. ಇದಕ್ಕೆ ಬದ್ಧವಾಗಿ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯದ ಉದ್ದಗಲಕ್ಕೂ ನಾವು ಇದೇ ಕೆಲಸವನ್ನು ಮಾಡುತ್ತಿದ್ದೇವೆ ಎಂದು ನುಡಿದರು.ಹಾನಗಲ್ಲಿನ ಶಾಸಕ ಶ್ರೀನಿವಾಸ ಮಾನೆ ಅವರು ಅತ್ಯಂತ ಕ್ರಿಯಾಶೀಲರು. ನೀರಾವರಿ, ಲೋಕೋಪಯೋಗಿ ಮಾತ್ರವಲ್ಲ ಎಲ್ಲ ಇಲಾಖೆಗಳಿಂದ ಜನರಿಗೆ ಉಪಯೋಗವಾಗುವ ಕೆಲಸ ಮಾಡುತ್ತಿದ್ದಾರೆ. ಕಂದಾಯ, ವಿದ್ಯುತ್ ಇಲಾಖೆಯಿಂದ ರೈತರಿಗೆ ಬೇಕಾದಂತಹ ಕೆಲಸ ಮಾಡಿಕೊಡುತ್ತಿದ್ದಾರೆ. ಸಮುದಾಯದ ಬೆಂಬಲ ಇಲ್ಲದೇ ಹೋದರೂ ಕಳೆದ ಎರಡು ದಶಕಗಳಿಂದ ಜನಸೇವೆ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೂ ಇವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಿ ನಮ್ಮ ಮೇಲೆ ನಂಬಿಕೆ ಇಟ್ಟವರು ನೀವು. ಉಪಚುನಾವಣೆಯಲ್ಲಿ ನಮ್ಮ ಪರವಾಗಿ ನೀವು ಕೊಟ್ಟ ತೀರ್ಪು ಐತಿಹಾಸಿಕವಾದುದು ಎಂದರು.