ಕಾರವಾರ: ಶಿರೂರು ಗುಡ್ಡ ಕುಸಿತದಿಂದ ಉಂಟಾದ ಪ್ರವಾಹ ಸಂತ್ರಸ್ತ 27 ಕುಟುಂಬಗಳನ್ನು ಶಾಶ್ವತವಾಗಿ ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.
ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರೆವೇರಿಸಿ ಅವರು ಮಾತನಾಡಿದರು. ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಉಳುವರೆ ಗ್ರಾಮದಲ್ಲಿನ ಪ್ರವಾಹ ಸಂತ್ರಸ್ತ 27 ಕುಟುಂಬಗಳನ್ನು ಸ್ಥಳಾಂತರಿಸಲು ಅಂಕೋಲಾ ತಾಲೂಕಿನ ದೇವಿಗದ್ದೆ ಗ್ರಾಮದಲ್ಲಿ 38 ಗುಂಟೆ ಜಮೀನು ಗುರುತಿಸಲಾಗಿದೆ. ಈ ಜಾಗದಲ್ಲಿ ಜಿಲ್ಲಾ ಪಂಚಾಯಿತಿಯಿಂದ ಆಶ್ರಯ ಯೋಜನೆಯಡಿ ನಿವೇಶನಗಳನ್ನು ನೀಡಲು ಅಗತ್ಯ ಇರುವ ಎಲ್ಲ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳಲಾಗುತ್ತಿದೆ ಎಂದರು.ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ದೇಶದ ಸ್ವಾತಂತ್ರಕ್ಕಾಗಿ ಬಲಿದಾನಗೈದವರನ್ನು ನಾವು ಇಂದು ಸ್ಮರಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ₹6.65 ಕೋಟಿಗೂ ಅಧಿಕ ಮಹಿಳೆಯರು ಪ್ರಯಾಣಿಸಿದ್ದು, ₹182 ಕೋಟಿ ವೆಚ್ಚ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ₹198 ಕೋಟಿಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 3,20,231 ಅಧಿಕ ಮಹಿಳೆಯರಿಗೆ ₹651 ಕೋಟಿಗೂ ಅಧಿಕ ಮೊತ್ತ ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 3,86,426 ಕುಟುಂಬಗಳಿಗೆ ₹200 ಕೋಟಿಗೂ ಅಧಿಕ ಮೊತ್ತದ ಉಚಿತ ವಿದ್ಯುತ್ ವಿತರಿಸಲಾಗಿದೆ. ಯುವನಿಧಿ ಯೋಜನೆಯಡಿ 3,098 ಫಲಾನುಭವಿಗಳಿಗೆ ₹1.28 ಕೋಟಿ ನಿರುದ್ಯೋಗ ಭತ್ಯೆ ವಿತರಿಸಲಾಗಿದೆ ಎಂದರು.ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಸ್ವಂತ ಕಟ್ಟಡದ ಸೌಲಭ್ಯ ಒದಗಿಸಿ, ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪೂರಕವಾಗುವಂತಹ ಎಲ್ಲ ವ್ಯವಸ್ಥೆಗಳನ್ನು ಒದಗಿಸಲು ಸದಾ ಬದ್ಧವಾಗಿದ್ದು, ಜಿಲ್ಲೆಯ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಅಂಗಾಂಗ ದಾನ ಮಾಡಿದ ಕುಟುಂಬಗಳಿಗೆ ಸನ್ಮಾನ, ಎಸ್‌ಎಸ್‌ಎಲ್‌ಸಿ ಉನ್ನತ ಶ್ರೇಣಿ ಪಡೆದ ವಿದ್ಯಾರ್ಧಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಮೀನುಗಾರರಿಗೆ ಅಭಿನಂದಿಸಲಾಯಿತು. ಶಿರೂರು ಗುಡ್ಡ ಕುಸಿತದಿಂದ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಸಲ್ಲಿಸಲಾಯಿತು.ಪೊಲೀಸ್, ಅರಣ್ಯ, ಗೃಹ ರಕ್ಷಕ ದಳ, ಎನ್‌ಸಿಸಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಸೇವಾದಳ, ತಂಡಗಳಿಂದ ಆಕರ್ಷಕ ಪಥ ಸಂಚಲನ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ., ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಾಜಪೂತ, ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಮತ್ತಿತರರು ಇದ್ದರು.