ಕನ್ನಡಪ್ರಭವಾರ್ತೆ ಚನ್ನಪಟ್ಟಣ
ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿ ಚನ್ನಪಟ್ಟಣ ಮತ್ತು ಕನಕಪುರ ತಾಲೂಕಿನಲ್ಲಿ ಜನ ಜಾನುವಾರುಗಳಿಗೆ ಆಗುತ್ತಿರುವ ತೊಂದರೆಯನ್ನು ಪ್ರಸ್ತಾಪಿಸಿ, ಮಳೆ ಕೊರತೆಯಿಂದ ತಾಲೂಕಿನಲ್ಲಿ ಸಂಪೂರ್ಣ ಬರದ ಛಾಯೆ ಆವರಿಸಿದೆ. ರೈತರ ಬೆಳೆಗಳು ಒಣಗಿ ನಷ್ಟ ಅನುಭವಿಸುವಂತಾಗಿದೆ. ಬಹುತೇಕ ಭಾಗಗಳಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳದೇ ಭೂಮಿ ಬಂಜರವಾಗಿ ಉಳಿದಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳು ತಾಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿ ತಾಲೂಕಿನಲ್ಲಿ ಆಗಿರುವ ಮಳೆ ಮತ್ತು ಬೆಳೆ ನಷ್ಟದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಹೋಗಿ, ಜಿಲ್ಲೆಯ ರಾಮನಗರ ಮತ್ತು ಮಾಗಡಿ ತಾಲೂಕುಗಳನ್ನು ಬರ ಪೀಡಿತ ತಾಲೂಕನ್ನಾಗಿ ಘೋಷಣೆ ಮಾಡಿದ್ದಾರೆ. ಈವರೆವಿಗೂ ಚನ್ನಪಟ್ಟಣ ಮತ್ತು ಕನಕಪುರ ತಾಲೂಕನ್ನು ಬರ ಪೀಡಿತ ಪ್ರದೇಶವನ್ನಾಗಿ ಘೋಷಣೆ ಮಾಡದೇ ಮೀನಮೇಷ ಎಣಿಸಲಾಗುತ್ತಿದೆ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದರು.ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ಷೇತ್ರದ ಶಾಸಕರು ಮತ್ತು ಜಿಲ್ಲಾಡಳಿತ ತಾಲೂಕು ಅಧಿಕಾರಿಗಳಿಂದ ಸಮಗ್ರ ವರದಿ ಪಡೆದುಕೊಂಡು ಈ ಕೂಡಲೇ ಚನ್ನಪಟ್ಟಣ ಮತ್ತು ಕನಕಪುರ ತಾಲೂಕು ಬರ ಪೀಡಿತವೆಂದು ಘೋಷಣೆ ಮಾಡಿ ಪರಿಹಾರದ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು.
ಕೃಷಿಕ ಸಮಾಜ ಸಮಿತಿ ತಾಲೂಕು ಅಧ್ಯಕ್ಷ ಸಿ.ರಾಜೇಶ್ ಮಾತನಾಡಿ, ತಾಲೂಕಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿ ರೈತರು ತುಂಬಾ ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕನ್ನು ಬರಪೀಡಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು. ಉದ್ಯೋಗ ಖಾತರಿ ಯೋಜನೆ, ಕುಡಿಯುವ ನೀರಿನ ಪೂರೈಕೆ, ಜಾನುವಾರುಗಳಿಗೆ ಮೇವು ಪೂರೈಕೆ, ಬ್ಯಾಂಕ್ ಸಾಲ ಮನ್ನಾದಂತಹ ಪರಿಹಾರ ಕಾರ್ಯಗಳನ್ನು ಕೈಗೊಂಡು ರೈತರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ಒತ್ತಾಯಿಸಿದರು.