ಸಕಲೇಶಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಿ

KannadaprabhaNewsNetwork |  
Published : Oct 01, 2026, 01:30 AM IST
ಬರದ ನೆರವಿಗೆ ಸಕಲೇಶಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಿ ಎಚ್.ಡಿ.ರೇವಣ್ಣ | Kannada Prabha

ಸಾರಾಂಶ

ಹಾಸನ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದು, ಮಳೆಯ ಕೊರತೆಯಿಂದ ಕೃಷಿ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕನ್ನೂ ಬರಪೀಡಿತ ಪ್ರದೇಶವೆಂದು ಘೋಷಿಸಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಸೇರಿದಂತೆ ಅಗತ್ಯ ಪರಿಹಾರ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್. ಡಿ. ರೇವಣ್ಣ ಸರ್ಕಾರವನ್ನು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಹಾಸನ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದು, ಮಳೆಯ ಕೊರತೆಯಿಂದ ಕೃಷಿ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕನ್ನೂ ಬರಪೀಡಿತ ಪ್ರದೇಶವೆಂದು ಘೋಷಿಸಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಸೇರಿದಂತೆ ಅಗತ್ಯ ಪರಿಹಾರ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್. ಡಿ. ರೇವಣ್ಣ ಸರ್ಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಲವು ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಮಳೆಯ ಕೊರತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿರುವ ಸಕಲೇಶಪುರ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕಾಫಿ ತೋಟಗಳಿಗೆ ಮಳೆ ಅತ್ಯಂತ ಅಗತ್ಯವಾಗಿದ್ದು, ಸತತ ಎರಡು-ಮೂರು ದಿನ ಮಳೆ ಬಾರದಿದ್ದರೂ ಬೆಳೆ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಪರಿಸ್ಥಿತಿಯನ್ನು ಪರಿಗಣಿಸಿ ಸಕಲೇಶಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದರು.ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಹಾಗೂ ತಹಸೀಲ್ದಾರ್‌ಗಳು ಕಚೇರಿಯಲ್ಲಿ ಲಭ್ಯವಾಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ. ಜಿಲ್ಲಾಧಿಕಾರಿಗಳು ಪ್ರತಿದಿನ ಕನಿಷ್ಠ ನಾಲ್ಕು ಗಂಟೆಗಳ ಕಾಲ ಕಚೇರಿಯಲ್ಲಿ ಲಭ್ಯವಿದ್ದು, ಪಿಂಚಣಿ ಸೇರಿದಂತೆ ಸಾರ್ವಜನಿಕರ ಬಾಕಿ ಕೆಲಸಗಳನ್ನು ಪರಿಶೀಲಿಸಿ ಪರಿಹರಿಸಬೇಕು. ಒಂದು ತಿಂಗಳೊಳಗೆ ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅರಸೀಕೆರೆ ಜನರ ಋಣ ತೀರಿಸಲು ಸಾಧ್ಯವಿಲ್ಲ ಕ್ಷೇತ್ರದ ಜನರು ತಮ್ಮ ಪಕ್ಷವನ್ನು ಮೂರು ಬಾರಿ ಬೆಂಬಲಿಸಿ ಗೆಲ್ಲಿಸಿದ್ದು, ಅವರ ಋಣವನ್ನು ಜೀವನಪೂರ್ತಿ ತೀರಿಸಲು ಸಾಧ್ಯವಿಲ್ಲ ಎಂದು ಭಾವುಕರಾಗಿ ಹೇಳಿದರು. ಎಲ್ಲ ಸಮಾಜದ ಜನರು ತಮ್ಮ ಮೇಲೆ ವಿಶ್ವಾಸವಿಟ್ಟು ಪಕ್ಷವನ್ನು ಬೆಂಬಲಿಸಿದ್ದಾರೆ. ಅರಸೀಕೆರೆ ಜನರ ಪ್ರೀತಿ ಮತ್ತು ಬೆಂಬಲವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು. ಕುಡಿಯುವ ನೀರಿಗೆ ತುರ್ತು ಅನುದಾನ ಬಿಡುಗಡೆ ಮಾಡಿ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ತುರ್ತಾಗಿ ₹ 2ರಿಂದ 3 ಕೋಟಿ ಅನುದಾನವನ್ನು ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಬಿಡುಗಡೆ ಮಾಡಬೇಕು. ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಕೊಳವೆಬಾವಿ ಹಾಗೂ ಪೈಪ್‌ಲೈನ್‌ಗಳನ್ನು ನಿರ್ಮಿಸಬೇಕು. ತೀವ್ರ ಕೊರತೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಪ್ರತ್ಯೇಕವಾಗಿ 5 ಕೋಟಿ ಅನುದಾನ ನೀಡಬೇಕು. ಬರ ಪರಿಸ್ಥಿತಿಯಲ್ಲಿ ಜನರು ಹಾಗೂ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.ಮೆಕ್ಕೆಜೋಳ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲಿಜಿಲ್ಲೆಯಲ್ಲಿ ಸುಮಾರು 2.20 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆ ನಷ್ಟವಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರು ಬೆಳೆಗೆ ಮಾಡಿರುವ ವಾಸ್ತವಿಕ ವೆಚ್ಚವನ್ನು ಪರಿಗಣಿಸಿ ಪರಿಹಾರ ನೀಡಬೇಕು. ಕೇವಲ 2 ಸಾವಿರ ಪರಿಹಾರ ನೀಡುವುದರಿಂದ ರೈತರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಹೇಳಿದರು. ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗಿದ್ದು, ಕೇಂದ್ರದ ತಂಡವೂ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದೆ. ರೈತರ ಹಿತದೃಷ್ಟಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಮನ್ವಯದಿಂದ ಅಗತ್ಯ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು. ರೈತರ ನೆರವಿಗೆ ಮತ್ತೊಮ್ಮೆ ಒನ್‌ಟೈಮ್ ಸಾಲಮನ್ನಾ ಪ್ರಸ್ತುತ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮತ್ತೊಮ್ಮೆ ಒನ್‌ಟೈಮ್ ಸಾಲಮನ್ನಾ ಯೋಜನೆ ಜಾರಿಗೆ ತರಬೇಕು ಎಂದು ರೇವಣ್ಣ ಆಗ್ರಹಿಸಿದರು. ಹಿಂದೆ ಜಿಲ್ಲಾ ಬ್ಯಾಂಕ್‌ಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲಮನ್ನಾ ಮೂಲಕ ರೈತರಿಗೆ ನೆರವು ನೀಡಲಾಗಿತ್ತು. ಅದೇ ರೀತಿಯಲ್ಲಿ ಈಗಲೂ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದರು.

ಪಂಚಾಯಿತಿ ಹಾಗೂ ನಗರಸಭೆಗಳ ಮೀಸಲಾತಿ ವಿಚಾರ ನ್ಯಾಯಾಲಯದ ವಿಚಾರಣೆಯಲ್ಲಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೈಗೊಳ್ಳುವ ತೀರ್ಮಾನದಂತೆ ಪಕ್ಷ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗಂಗಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶೇಖರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವತ್ಸಲ ಶೇಖರಪ್ಪ, ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ಜೆಡಿಎಸ್ ಮುಖಂಡರಾದ ಲಾಳನಕೆರೆ ಯೋಗೀಶ್, ಗಣೇಶ್, ಬಸವಲಿಂಗಪ್ಪ, ಹರ್ಷ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

=== ಬಾಕ್ಸ್‌::::2028ರ ಚುನಾವಣೆಗೆ ಒಗ್ಗಟ್ಟಾಗಿ ಸಂಘಟನೆ2028ರ ವಿಧಾನಸಭಾ ಚುನಾವಣೆವರೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ನಾಯಕತ್ವದಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಎನ್‌ಡಿಎ ಮೈತ್ರಿಕೂಟವನ್ನು ಗೆಲ್ಲಿಸುವ ಗುರಿಯೊಂದಿಗೆ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಕ್ಷೇತ್ರಗಳಲ್ಲಿ ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳಬೇಕು ಎಂದು ರೇವಣ್ಣ ಕರೆ ನೀಡಿದರು.

-----

ಬಾಕ್ಸ್‌::: ಪಿಂಚಣಿ ವಿಳಂಬಕ್ಕೆ ತಪ್ಪಿಸಲು ಆಗ್ರಹ

ಗ್ರಾಮೀಣ ಪ್ರದೇಶಗಳಲ್ಲಿ 80ರಿಂದ 85 ವರ್ಷ ವಯಸ್ಸಿನ ವೃದ್ಧರು, ವಿಧವೆಯರು ಹಾಗೂ ಅಂಗವಿಕಲರು ಸೇರಿದಂತೆ ಹಲವು ಮಂದಿ ಕಳೆದ 6ರಿಂದ 8 ತಿಂಗಳಿನಿಂದ ಪಿಂಚಣಿ ಸಿಗದೆ ಪರದಾಡುತ್ತಿದ್ದಾರೆ. ಪಿಂಚಣಿ ಹಣವೇ ಅನೇಕ ಕುಟುಂಬಗಳಿಗೆ ಜೀವನಾಧಾರವಾಗಿದ್ದು, ವಿಳಂಬದಿಂದ ವೃದ್ಧರು ಹಾಗೂ ಅಶಕ್ತರು ತೊಂದರೆ ಅನುಭವಿಸುತ್ತಿದ್ದಾರೆ. ಅಗತ್ಯವಿದ್ದರೆ ಜೆಡಿಎಸ್‌ನ ಮುಖಂಡರು ಪ್ರತಿ ಊರಿನಲ್ಲೂ ಗೌರವಯುತವಾಗಿ ಅಧಿಕಾರಿಗಳನ್ನು ನೋಡಿಕೊಳ್ಳುತ್ತಾರೆ. ಹಿಂದಿನಿಂದಲೇ ಅರಸೀಕೆರೆಯಿಂದಲೇ ಶುರುವಾಗಲಿ. ಈ ಕೂಡಲೇ ಪಿಂಚಣಿಯನ್ನು ಫಲಾನುಭವಿಗಳಿಗೆ ತಲುಪಿಸಲಿ ಎಂದು ಹೇಳಿದರು.

===

ಫೋಟೋ ಶೀರ್ಷಿಕೆ

ಸುದ್ದಿಗೋಷ್ಠಿಯಲ್ಲಿ ಶಾಸಕ ರೇವಣ್ಣ ಮಾತನಾಡಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗಂಗಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶೇಖರಪ್ಪ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲಿನ ದರಕ್ಕಿಂತ ನೀರು ದುಬಾರಿ ಕಾಲ ದೂರವಿಲ್ಲ: ಬೌದ್ಧೆ
ಎನ್‌ಡಿಆರ್‌ಎಫ್ ತಂಡದವರಿಂದ ಮುಂಜಾಗ್ರತೆ ಕುರಿತು ಪ್ರಾತ್ಯಕ್ಷಿಕೆ