ಕನ್ನಡಪ್ರಭ ವಾರ್ತೆ ಸಕಲೇಶಪುರ
ಬಾಳ್ಳುಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನೂತನ ಫೀಡರ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದಲ್ಲಿ ಲೋಡ್ ಸಾಮರ್ಥ್ಯಕ್ಕೆ ಅನುಗುಣವಾಗಿ ವಿದ್ಯುತ್ ಪೂರೈಕೆಯಾಗದೆ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದರಿಂದ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತಿರಲಿಲ್ಲ. ಇದನ್ನು ಮನಗಂಡು ಪ್ರತ್ಯೇಕ ಫೀಡರ್ ನಿರ್ಮಿಸಿ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ನೂತನ ‘ಕೆಂಚಮ್ಮ ಫೀಡರ್’ನಿಂದ ಪಾಳ್ಯ ಭಾಗದ ಐದು, ಮಗ್ಗೆ ಭಾಗದ ೩೩ ಹಾಗೂ ಬಾಳ್ಳುಪೇಟೆ ಭಾಗದ ೧೪ ಗ್ರಾಮಗಳು ಸೇರಿದಂತೆ ಒಟ್ಟು ೫೨ ಗ್ರಾಮಗಳಿಗೆ ಅನುಕೂಲವಾಗಲಿದೆ. ಇದರಿಂದ ಈ ಪ್ರದೇಶದಲ್ಲಿ ವಿದ್ಯುತ್‌ನ ಲೋಡ್ ಹಂಚಿಕೆ ಸುಧಾರಿಸಿ, ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ. ಇದೇ ರೀತಿಯಲ್ಲಿ ಮಗ್ಗೆ ಭಾಗದಲ್ಲಿಯೂ ಮತ್ತೊಂದು ಫೀಡರ್ ಚಾರ್ಜ್ ಮಾಡುವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಬಾರಿ ಮಳೆಯ ಪ್ರಮಾಣ ಹಾಗೂ ಮುಂದಿನ ಬೇಸಿಗೆ ಪರಿಸ್ಥಿತಿಯನ್ನು ಗಮನಿಸಿದರೆ ವಿದ್ಯುತ್ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಮಳೆ ಕೊರತೆಯಾದರೆ ಬೇಸಿಗೆಯಲ್ಲಿ ವಿದ್ಯುತ್ ಉತ್ಪಾದನೆ ಹಾಗೂ ಪೂರೈಕೆಯಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಹೀಗಾಗಿ ಬೇಸಿಗೆ ಆರಂಭವಾಗುವ ಮುನ್ನವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ವಿದ್ಯುತ್ ಇಂದಿನ ಜೀವನದ ಅತ್ಯವಶ್ಯಕ ಭಾಗವಾಗಿದೆ. ಕೃಷಿ, ಕುಡಿಯುವ ನೀರು, ಸಣ್ಣ ಕೈಗಾರಿಕೆ, ವ್ಯಾಪಾರ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿದ್ಯುತ್ ಅನಿವಾರ್ಯ. ಹೀಗಾಗಿ ವಿದ್ಯುತ್ ಕೊರತೆ ಅಥವಾ ನಿರಂತರ ವ್ಯತ್ಯಯದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರ್ಕಾರ ಹಾಗೂ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಮಲೆನಾಡು ಪ್ರದೇಶದಲ್ಲಿ ಮಳೆಗಾಲದಲ್ಲಿ ವಿದ್ಯುತ್ ವ್ಯತ್ಯಯ ಹಾಗೂ ವಿದ್ಯುತ್ ಮಾರ್ಗಗಳಿಗೆ ಹಾನಿಯಾಗುವ ಸಮಸ್ಯೆ ಸಾಮಾನ್ಯವಾಗಿದೆ. ಇದನ್ನು ತಡೆಯಲು ಮಳೆಗಾಲ ಆರಂಭಕ್ಕೂ ಮುನ್ನವೇ ವಿದ್ಯುತ್ ಮಾರ್ಗಗಳ ನಿರ್ವಹಣೆ, ರಸ್ತೆ ಬದಿಯ ಮರಗಿಡಗಳ ತೆರವು ಹಾಗೂ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕಾರಿಗಳು ಕೂಡ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೂ ಮಲೆನಾಡು ಭಾಗದ ಭೌಗೋಳಿಕ ಪರಿಸ್ಥಿತಿಯಿಂದ ಕೆಲ ಸಂದರ್ಭಗಳಲ್ಲಿ ನಿರೀಕ್ಷಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದರು. ಮಳೆಗಾಲದಲ್ಲಿ ಪ್ರತಿದಿನವೂ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಲವು ಕರೆಗಳು ಬರುತ್ತಿದ್ದು, ಕೆಇಬಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಲಾಗುತ್ತಿದೆ. ವಿದ್ಯುತ್ ಇಲಾಖೆಯ ಸಿಬ್ಬಂದಿಗೂ ಒಂದು ಮನವಿ ಮಾಡುತ್ತೇನೆ. ಮಳೆಗಾಲದಲ್ಲಿ ಎದುರಾಗುವ ಸಮಸ್ಯೆಗಳನ್ನು ಮಳೆಗಾಲದಲ್ಲೇ ಪರಿಹರಿಸುವ ಬದಲು, ಬೇಸಿಗೆಯಲ್ಲೇ ಅಗತ್ಯ ಮುನ್ನೆಚ್ಚರಿಕಾ ಕಾಮಗಾರಿಗಳನ್ನು ಪೂರ್ಣಗೊಳಿಸಿ. ಆಗ ಮಳೆಗಾಲದಲ್ಲಿ ಎದುರಾಗುವ ಅನಾಹುತ ಹಾಗೂ ವಿದ್ಯುತ್ ವ್ಯತ್ಯಯಗಳನ್ನು ಬಹುಮಟ್ಟಿಗೆ ತಪ್ಪಿಸಬಹುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಾರ್ವಜನಿಕರಿಗೆ ಯಾವುದೇ ಸಂದರ್ಭದಲ್ಲಿ ವಿದ್ಯುತ್ ಕೊರತೆ ಉಂಟಾಗದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ತಮ್ಮ ಆದ್ಯತೆಯಾಗಿದ್ದು, ಸರ್ಕಾರ ಹಾಗೂ ವಿದ್ಯುತ್ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಈ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಅವರು ಭರವಸೆ ನೀಡಿದರು.ಈ ಸಂಧರ್ಭದಲ್ಲಿ ಸೆಸ್ಕಾಂ ಕಾರ್ಯಪಾಲಕ ಅಭಿಯಂತರ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ಹರೀಶ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಮುಖಂಡರಾದ ಉದಯಶಂಕರ್, ಭರತ್ ರೈ ಮೆಣಸಮಕ್ಕಿ ಶಿವಕುಮಾರ್, ಅಣ್ಣಪ್ಪ ಸೇರಿದಂತೆ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗ ಇತರರು ಉಪಸ್ಥಿತರಿದ್ದರು.