ಕನ್ನಡಪ್ರಭ ವಾರ್ತೆ ಮಂಡ್ಯ
ಪೋಷಕರು ತಮ್ಮ ಮಕ್ಕಳಿಗೆ ಕೇವಲ ಅಂಕ ಗಳಿಕೆಯ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುತ್ತಿರುವುದರಿಂದ ಮಕ್ಕಳಲ್ಲಿ ಸಂಕುಚಿತ ಮನೋಭಾವನೆ ಬೆಳೆದು ಸಾಮಾಜಿಕ ತಿಳುವಳಿಕೆ ಕುಂಠಿತವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡೀನ್ ಪ್ರೊ. ಎನ್.ಲಕ್ಷ್ಮೀ ಹೇಳಿದರು.ನಗರದ ಸ್ವರ್ಣಸಂದ್ರದ ಎಇಟಿ ಶಿಕ್ಷಣ ಮಹಾವಿದ್ಯಾನಿಲಯ ಆಯೋಜಿಸಿದ್ದ ಪ್ರಶಿಕ್ಷಣೋತ್ಸವ ಹಾಗೂ ಪ್ರಥಮ ವರ್ಷದ ಪರೀಕ್ಷಾರ್ಥಿಗಳ ಸ್ವಾಗತ ಸಮಾರಂಭ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿ ಮಾತನಾಡಿದರು.
ಮಕ್ಕಳಲ್ಲಿ ಇರುವ ಸೃಜನಶೀಲತೆ ಹಾಗೂ ಪ್ರತಿಭೆಯನ್ನು ಗುರುತಿಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಪ್ರೌಢಾವಸ್ಥೆಯಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಮೂಲಕ ಅವರಲ್ಲಿ ಸೌಹಾರ್ದತೆ, ತಾಳ್ಮೆ, ಸಹನೆ, ವಿವೇಚನೆ ಹಾಗೂ ಸಮಯಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಸಹಕಾರಿಯಾದಾಗ ಮಾತ್ರ ಶಿಕ್ಷಣದ ಉದ್ದೇಶ ಫಲಿಸಲು ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟರು.ಎಇಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶಾರದಾ ರಮೇಶ ರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳು ಪ್ರಸ್ತುತ ದಿನಮಾನದಲ್ಲಿ ಉನ್ನತ ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಆಧುನಿಕ ಕಾಲದಲ್ಲೂ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಅವಕಾಶಗಳ ಕೊರತೆಯಿಂದ ಅವರ ಪ್ರತಿಭೆಯನ್ನು ಅಭಿವ್ಯಕ್ತಿಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು.
ವಿದ್ಯಾರ್ಥಿಗಳು ತಂತ್ರಜ್ಞಾನದ ಹೆಸರಿನಲ್ಲಿ ಮೊಬೈಲ್ ಬಳಕೆಗೆ ದಾಸರಾಗುತ್ತಿರುವುದು ಮಾನಸಿಕ ಖಿನ್ನತೆಗೆ ಕಾರಣವಾಗಿದ್ದು ಅವರಲ್ಲಿ ಮಾನಸಿಕ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ಈ ಸಂಬಂಧ ಶಿಕ್ಷಕರು ಹಾಗೂ ಸಂಘ ಸಂಸ್ಥೆಗಳು ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನ ರೂಪಿಸಬೇಕಿದೆ ಎಂದರು.ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಡಾ. ಎಸ್.ಶಿವಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ವಿದ್ಯಾಸಾಗರ್, ನಿರ್ದೇಶಕರಾದ ಆಷಾರಾಣಿ, ವಿದ್ಯಾ, ಪ್ರಾಧ್ಯಾಪಕರಾದ ಎಚ್ .ಸಿ. ಧರ್ಮೇಶ್, ಕೆ. ಮೋಹನ್, ಸುಕೇಶ್ ದಯಾನಂದ, ರಕ್ಷಿತಾ, ವಾಣಿ , ಬೀರೇಶ್ವರಿ, ಉಷಾ, ಸೌಮ್ಯ ಇತರರಿದ್ದರು.