ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ಮಂಗಳವಾರ ಉಳ್ಳಾಲ ತಾಲೂಕು ಮಟ್ಟದ ಕುಡಿಯುವ ನೀರಿನ ಯೋಜನೆ, ಅತಿವೃಷ್ಟಿ- ಅನಾವೃಷ್ಟಿ ಕುರಿತು ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಮಳೆ ಹಾನಿ, ಮನೆ ಕುಸಿತ, ಕಾಡುಪ್ರಾಣಿಗಳ ದಾಳಿ ಸೇರಿದಂತೆ ವಿವಿಧ ಪ್ರಾಕೃತಿಕ ಘಟನೆಗಳು ಸಂಭವಿಸಿದಾಗ ಸಂತ್ರಸ್ತರಿಗೆ ಪರಿಹಾರ ನೀಡಲು ದಾಖಲೆಗಳ ಕೊರತೆಯ ನೆಪದಲ್ಲಿ ಪರಿಹಾರ ವಿಳಂಬಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಘಟನೆಗಳು ನಡೆದಿರುವುದು ವಾಸ್ತವ ಆಗಿದ್ದರೂ ಸಾರ್ವಜನಿಕರಿಗೆ ಪರಿಹಾರ ನೀಡಲು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಘಟನೆಗಳ ಬಗ್ಗೆ ಆಯಾ ಸ್ಥಳಗಳಿಗೆ ಭೇಟಿ ನೀಡಿ ದೃಢೀಕರಿಸಿ ಪರಿಹಾರವನ್ನು ತ್ವರಿತವಾಗಿ ವಿತರಿಸಬೇಕು ಕಟ್ಟುನಿಟ್ಟಾಗಿ ಸೂಚಿಸಿದರು.ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಗ್ರಾಮ ಪಂಚಾಯ್ತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಕಂದಾಯ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಸಂಶಯದ ಮೇಲೆ ಜನರಿಗೆ ಪರಿಹಾರ ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಸ್ಪೀಕರ್ ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಪಂಚಾಯ್ತಿ ಡೋರ್ ನಂಬರ್ ದಾಖಲೆಗಳನ್ನು ಸಲ್ಲಿಸಿದ ನಂತರವೂ ವಾಸ ಯೋಗ್ಯ ಪ್ರಮಾಣ ಪತ್ರ ನೀಡಲು ಕೇಳುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ಷೇಪಿಸುತ್ತಿದ್ದಾರೆ. ಇದರಿಂದ ವಿದ್ಯುತ್ ಸಂಪರ್ಕ ನೀಡಲು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಮನೆ ನಿರ್ಮಿಸಿದ ನಂತರ ಗ್ರಾಮ ಪಂಚಾಯ್ತಿ ಸಿಸಿ ಪಡೆದು ವಿದ್ಯುತ್ ಸಂಪರ್ಕ ನೀಡುವಂತೆ ನಿರ್ದೇಶಿಸಿದರು.
ಐದು ವರ್ಷಗಳಿಗೊಮ್ಮೆ ನಡೆಯುವ ಉಳ್ಳಾಲ ಉರೂಸ್ ಈ ತಿಂಗಳಲ್ಲಿ ಆರಂಭವಾಗಲಿದ್ದು, ಎಲ್ಲ ಪ್ರಮುಖ ರಸ್ತೆಗಳನ್ನು ಸುಸಜ್ಜಿತಗೊಳಿಸಬೇಕು. ದೇಶದ ವಿವಿಧ ಕಡೆಗಳಿಂದ ಭಕ್ತಾದಿಗಳು ಬರುವುದರಿಂದ ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದೂ ಸೂಚಿಸಿದರು.
ಕುಡಿಯುವ ನೀರಿನ ಯೋಜನೆಗಳನ್ನು ಭವಿಷ್ಯದ 30 ವರ್ಷಗಳ ಜನಸಂಖ್ಯೆಯ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಬೇಕು. ಯಾವುದೇ ಕುಡಿಯುವ ನೀರಿನ ಯೋಜನೆಯಲ್ಲಿ ಮನೆ ಮನೆಗೆ ನಳ್ಳಿ ನೀರಿನ ಸಂಪರ್ಕ ನೀಡಲು ಸಾರ್ವಜನಿಕರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದರು.