ಕನ್ನಡಪ್ರಭ ವಾರ್ತೆ ಯಾದಗಿರಿ
ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಇರುವಂತಹ ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳನ್ನು ಸಕಾಲಕ್ಕೆ ದೊರಕಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಲಿಂಗ, ಲಿಂಗತ್ವ, ಲೈಂಗಿಕತೆ ಸಂವೇದನಾಶೀಲ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಮೀಸಲಿಟ್ಟಿದ್ದು, ಇವುಗಳ ಲಾಭ ಅವರಿಗೆ ಸಕಾಲಕ್ಕೆ ದೊರಕಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರನ್ನು ಸಬಲರನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸುವಂತೆ ಅವರು ಸೂಚನೆ ನೀಡಿದರು.ವಿಶೇಷವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿವಿಧ ನಿಗಮದ ಅಧಿಕಾರಿಗಳು, ಕಂದಾಯ, ಶಿಕ್ಷಣ ಇಲಾಖೆ, ವಿವಿಧ ಬ್ಯಾಂಕ್ ಅಧಿಕಾರಿಗಳು ಲಿಂಗತ್ವ ಅಲ್ಪಸಂಖ್ಯಾತರಿಗೆ ವಿವಿಧ ಸವಲತ್ತುಗಳನ್ನು ಆದ್ಯತೆ ಮೇಲೆ ದೊರಕಿಸಬೇಕು. ಅವರ ಶ್ರಮಕ್ಕೆ ಸಕಾಲಕ್ಕೆ ಸ್ಪಂದಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ಆದ್ಯತೆ ಮೇಲೆ ಅವರಿಗೆ ಸಿಗುವ ಸೌಲಭ್ಯಗಳನ್ನು ದೊರಕಿಸಬೇಕು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ತರುವ ದಿಶೆಯಲ್ಲಿ ಅಧಿಕಾರಿಗಳು ಶ್ರಮಿಸುವಂತೆ ಸಲಹೆ ನೀಡಿದರು.
ಈ ವೇಳೆ ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡಿ, ಡಿಎಚ್‌ಒ ಡಾ.ಪ್ರಭುಲಿಂಗ ಮಾನಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರೇಮಮೂರ್ತಿ ಕೆ.ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ ದೊಡಮನಿ, ಕ್ರೀಡಾ ಇಲಾಖೆ ಅಧಿಕಾರಿ ರಾಜು ಬಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಲಕ್ಷ್ಮಣ ಮಾಳವೀಕ, ಚೇಂಜ್ ಫೌಂಡೆಶನ್ ಅಧ್ಯಕ್ಷೆ ಮಾಯಾ ಎಸ್.ಆರ್. ನಾಯಕ ಸೇರಿದಂತೆ ಇತರರಿದ್ದರು.