ಕನ್ನಡಪ್ರಭ ವಾರ್ತೆ ಕನಕಗಿರಿ
ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಹಜರತಹುಸೇನ ಮುಜಾವರ ಹೇಳಿದರು.ಇಲ್ಲಿನ ತಾಪಂ ಕಚೇರಿಯ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹೊಸ ಪಡಿತರ ಚೀಟಿಗೆ ಅರ್ಜಿದಾರರ ಮಾಹಿತಿಯನ್ನು ಭರ್ತಿ ಮಾಡುವಾಗ ಆದಾಯದ ಮಿತಿಯನ್ನು ನಿಯಮಿತವಾಗಿ ನಮೂದು ಮಾಡಲು ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗೆ ಸೂಚಿಸಲಾಗಿದೆ. ಬಾಕಿ ಉಳಿದ 243 ಫಲಾನುಭವಿಗಳ ವಿವಿಧ ತಾಂತ್ರಿಕ ಕಾರಣಗಳನ್ನು ಪರಿಹರಿಸಿ ಯೋಜನೆಯ ಸದ್ಬಳಕೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ನಂತರ ಗೃಹಲಕ್ಷ್ಮೀ ಯೋಜನೆಯ ಕುರಿತು ಚರ್ಚಿಸಿ, ಬಾಕಿ ಇರುವ 139 ಫಲಾನುಭವಿಗಳು ಅರ್ಜಿ ಸಲ್ಲಿಸಿದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಗುರುತಿಸಿ ಪೂರ್ಣಗೊಳಿಸಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಸದರಿ ಯೋಜನೆಯಡಿ ಸಮಸ್ಯೆಗಳಿರುವ ಫಲಾನುಭವಿಗಳ ಸಂಖ್ಯೆ 154 ಇದ್ದು, ಇವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಮೇಲ್ಕಾಣಿಸಿದ ಸಂಖ್ಯೆಯನ್ನು ಕಡಿಮೆಗೊಳಿಸಲು ತಿಳಿಸಿದರು.
ಇನ್ನೂ ಗೃಹಜ್ಯೋತಿ ಯೋಜನೆಯಡಿ ಬಾಕಿಯಿರುವ 938 ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ವ್ಯಾಪ್ತಿಗೆ ತರಲು ತಿಳಿಸಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಾಗಿ ಬಸ್ ಸೌಕರ್ಯ ಒದಗಿಸಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಯುವನಿಧಿ ಯೋಜನೆಯ ಕುರಿತು ಪ್ರಗತಿ ಪರಿಶೀಲನೆ ನಡೆಸಿ, ಅಗಸ್ಟ್ ತಿಂಗಳ ಪ್ರಗತಿಯನ್ನು ತುಲನೆ ಮಾಡಿ ಸೆಪ್ಟಂಬರ್ ತಿಂಗಳಲ್ಲಿ ಆದ 1098 ಫಲಾನುಭವಿಗಳಿಗೆ ಯೋಜನೆಯ ಸದುಪಯೋಗ ನೀಡಿದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ತಿಳಿಸಿದರು.ನಂತರ ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಮತ್ತು ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಪಂ ಇಒ ಕೆ. ರಾಜಶೇಖರ, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಗ್ಯಾರಂಟಿ ಯೋಜನೆಯ ತಾಲೂಕು ಸದಸ್ಯರು, ತಾಪಂ ಸಿಬ್ಬಂದಿ ಇದ್ದರು.