ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತಲುಪಿಸಿ

KannadaprabhaNewsNetwork | Published : Oct 6, 2024 1:22 AM

ಸಾರಾಂಶ

ಹಳ್ಳಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ₹ 2 ಸಾವಿರ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಬಹಳಷ್ಟು ದೂರುಗಳು ದಾಖಲಾಗುತ್ತಿವೆ. ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಿಸಬೇಕು.

ಧಾರವಾಡ:

ಗ್ಯಾರಂಟಿ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ಮುಟ್ಟುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಅಳ್ನಾವರ ಮತ್ತು ಕುಂದಗೋಳ ತಾಲೂಕಿನ ಕೆಲವು ಭಾಗಗಳಲ್ಲಿ ಸಾರಿಗೆ ಬಸ್‌ಗಳ ಹೆಚ್ಚಿನ ಬೇಡಿಕೆ ಇದೆ. ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸಬೇಕು. ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಹಳ್ಳಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ₹ 2 ಸಾವಿರ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಬಹಳಷ್ಟು ದೂರುಗಳು ದಾಖಲಾಗುತ್ತಿವೆ. ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಿಸಬೇಕು. ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಸುಳ್ಳು ಸುದ್ದಿಗಳು ಕೇಳಿ ಬರುತ್ತಿದ್ದು, ಅದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದರು.

ಯುವನಿಧಿ ಯೋಜನೆಯ ಪ್ರಚಾರಕ್ಕೆ ಎಲ್ಲ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲು ಸೂಚಿಸಿದ ಎಸ್.ಆರ್. ಪಾಟೀಲ,

ಹಿಂದಿನ ಸಭೆಯಲ್ಲಿ ನ್ಯಾಯಬೆಲೆ ಅಂಗಡಿಯ ಮುಂದೆ ಬೋರ್ಡ್‌ ಅಳವಡಿಸಲು ಸೂಚಿಸಲಾಗಿದ್ದು, ಈ ವರೆಗೆ ಯಾವುದೇ ನ್ಯಾಯಬೆಲೆ ಅಂಗಡಿಗಳು ಬೋರ್ಡ್ ಅಳವಡಿಸದೆ ಇರುವುದು ಗಮನಕ್ಕೆ ಬಂದಿದೆ. ಇದರ ಬಗ್ಗೆ ಇಲಾಖೆಯ ಅಧಿಕಾರಿಗಳು ಗಮನಿಸಬೇಕು ಎಂದು ತಿಳಿಸಿದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಮಾತನಾಡಿ, ಜಿಲ್ಲೆಯಲ್ಲಿ ಅನ್ಯಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರರಿಗೆ ಈ ವರೆಗೆ ₹ 256.017 ಕೋಟಿ (3,50,684 ಫಲಾನುಭವಿಗಳು) ನೇರ ನಗದು ವರ್ಗಾವಣೆ ಮೂಲಕ ಹಣ ಸಂದಾಯ ಮಾಡಲಾಗಿದೆ. ಈ ಮೂಲಕ ಶೇ. 97.95ರಷ್ಟು ಪ್ರಗತಿ ಸಾಧಿಸಿದೆ. ಬಾಕಿ ಇರುವ 6,470 ಫಲಾನುಭವಿಗಳ ಹಣ ಜಮಾ ಮಾಡಲು ಕ್ರಮವಹಿಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ ಮಾತನಾಡಿ, ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 4,821 ಜನ ನೊಂದಣಿಯಾಗಿದ್ದು, 1,725 ಪುರುಷ ಹಾಗೂ 2,071 ಮಹಿಳೆಯರು ಸೇರಿ ಒಟ್ಟು 3,796 ಫಲಾನುಭವಿಗಳಿಗೆ ಸಹಾಯಧನ ಸರ್ಕಾರದಿಂದ ಜಮೆ ಆಗುತ್ತಿದೆ. 1,025 ಫಲಾನುಭವಿಗಳ ಅರ್ಜಿ ಬಾಕಿಯಿದ್ದು, ಪರಿಶೀಲನಾ ಹಂತದಲ್ಲಿವೆ ಎಂದು ತಿಳಿಸಿದರು.

ಜಿಪಂ ಸಿಇಒ ಸ್ವರೂಪ ಟಿ.ಕೆ ಮಾತನಾಡಿ, ಶಾಲೆ, ಕಾಲೇಜು, ಆಸ್ಪತ್ರೆ ಇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಬಸ್ ನಿಲುಗಡೆ ವ್ಯವಸ್ಥೆಯಾಗಬೇಕು. ಗ್ಯಾರಂಟಿ ಯೋಜನೆಗಳನ್ನು ಫಲಾನುಭಾವಿಗಳಿಗೆ ಉತ್ತಮವಾಗಿ ತಲುಪಿಸುವ ಕಾರ್ಯವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕೆಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮುರಗಯ್ಯ ವಿರಕ್ತಮಠ, ಅರವಿಂದ ಏಗನಗೌಡರ, ಅಬ್ದುಲ್ ರಶೀದ ಬೋಳಾಬಾಯಿ ಹಾಗೂ ರತ್ನಾ ತೇಗೂರಮಠ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

Share this article