ಕುಷ್ಟಗಿ ತಾಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ
ಛಾಯಾಗ್ರಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕುಷ್ಟಗಿ ತಾಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಅಣ್ಣಿರಯ್ಯ ಹಿರೇಮಠ ಮಾತನಾಡಿ, ಇತ್ತೀಚೆಗೆ ಬೆಂಗಳೂರಿನ ಶಿವಾಜಿನಗರದ ಶಮ್ಸ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದರ ವಿಡಿಯೋ ಶೂಟಿಂಗ್‌ಗೆ ಹೋಗಿದ್ದ ಛಾಯಾಗ್ರಾಹಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೆಲ ಪುಂಡರು ಹಲ್ಲೆ ನಡೆಸಿ ಗಾಯಗೊಳಿಸಿರುವುದು ಖಂಡನೀಯ ಎಂದರು.ಹೊಟ್ಟೆಪಾಡಿಗಾಗಿ ವಿಡಿಯೋ ಶೂಟಿಂಗ್ ಮಾಡುವ ಛಾಯಾಗ್ರಾಹಕನ ಮೇಲೆ ಹಲ್ಲೆ ಮಾಡಿರುವುದು ಅಮಾನವೀಯ ಘಟನೆಯಾಗಿದೆ. ಇದರಿಂದಾಗಿ ಛಾಯಾಗ್ರಾಹಕರಿಗೆ ಯಾವುದೇ ರಕ್ಷಣೆ ಇಲ್ಲ ಎನ್ನುವುದು ಸಾಬೀತಾಗಿದೆ. ಈ ಬಗ್ಗೆ ರಾಜ್ಯ ಛಾಯಾಗ್ರಾಹಕರ ಸಂಘದ ಅಧ್ಯಕ್ಷರು ಹಲ್ಲೆ ನಡೆಸಿದವರ ಮೇಲೆ ಪೊಲೀಸರಿಗೆ ದೂರು ನೀಡಿರುತ್ತಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಗ್ರೇಡ್-2 ತಹಸೀಲ್ದಾರ್ ಮುರುಳೀಧರ ಮನವಿ ಸ್ವೀಕರಿಸಿದರು.