ಹಾವೇರಿ: ಬೆಳೆ ನಷ್ಟ ಪರಿಹಾರ ಬಿಡುಗಡೆ, ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಮಾನ್ಯತೆ, ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ೫೦೦ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳಿಂದ ರ‍್ಯಾಲಿ ನಡೆಸಿ ಮಾ. ೫ರಂದು ಹಾವೇರಿ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ನಗರದ ಕಾಗಿನೆಲೆ ಕ್ರಾಸ್‌ನಿಂದ ಟ್ರ್ಯಾಕ್ಟರ್ ಮುಖಾಂತರ ರ‍್ಯಾಲಿ ಆರಂಭವಾಗಲಿದೆ. ನಂತರ ಪುರಸಿದ್ಧೇಶ್ವರ ದೇವಸ್ಥಾನದಿಂದ ಮಾರುಕಟ್ಟೆಯ ಮುಖ್ಯರಸ್ತೆ, ಗಾಂಧಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಪ್ರತಿಭಟನೆ ನಡೆಸಿ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ಬರಗಾಲ ಘೋಷಣೆ ಮಾಡಿ ಆರು ತಿಂಗಳು ಗತಿಸಿವೆ.ಕೇಂದ್ರ ಸರ್ಕಾರ ಬೆಳೆ ನಷ್ಟ ಪರಿಹಾರ ಕೊಡುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯ ಸರ್ಕಾರ ಕೇವಲ ₹೨ ಸಾವಿರ ಪರಿಹಾರ ನೆಪ ಮಾತ್ರಕ್ಕೆ ಕೊಟ್ಟಿದೆ. ಕಳೆದ ಎರಡು ವರ್ಷ ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡು ಕಂಗಾಲಾಗಿದ್ದ ರೈತರು ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬರ ಪರಿಹಾರ ಬೆಳೆವಿಮೆ ಹಾಗೂ ಸಾಲ ಮನ್ನಾ ಮಾಡಿ ರೈತರಿಗೆ ಧೈರ್ಯ ತುಂಬುವಂತಹ ಕೆಲಸ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಾಡುತ್ತಿಲ್ಲ. ಲೋಕಸಭೆ ಚುನಾವಣೆ ಗುಂಗಿನಲ್ಲಿ ಎರಡೂ ಸರ್ಕಾರಗಳು ಕಾಲ ಕಳೆಯುತ್ತಿವೆ.ರೈತರ ಬೇಡಿಕೆ ಈಡೇರಿಸದ್ದರೆ ಚುನಾವಣೆಯಲ್ಲಿ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ರೈತರ ಐಪಿ ಸೆಟ್‌ಗಳಿಗೆ ಹೊಸದಾಗಿ ಅರ್ಜಿ ತೆಗೆದುಕೊಳ್ಳುವುದನ್ನು ನಿಲ್ಲಿಸಿದೆ. ಅಕ್ರಮ-ಸಕ್ರಮ ಯೋಜನೆ ನಿಲ್ಲಿಸಿದೆ. ಪ್ರತ್ಯೇಕ ಡಿಸಿಸಿ ಬ್ಯಾಂಕ್ ಮಂಜೂರು ಮಾಡಲು ಅನೇಕ ವರ್ಷಗಳಿಂದ ಹೋರಾಟ ಮಾಡಿದರು ಪ್ರಯೋಜನವಾಗಿಲ್ಲ. ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಮಾಡುವ ರೈತರಿಗೆ ಎನ್‌ಒಸಿ ಕೇಳುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಕೈಬಿಡಬೇಕು ಎಂದು ಒತ್ತಾಯಿಸಿದರು.ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ದೆಹಲಿ ಗಡಿ ಭಾಗದಲ್ಲಿ ಚಳವಳಿ ನಿರತ ರೈತರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ಚಳವಳಿ ನಿರತ ರೈತರನ್ನು ಗೌರವಿಸಬೇಕು. ಅನವಶ್ಯಕ ಕಿರುಕುಳ ಕೊಡುತ್ತಿರುವ ಕೇಂದ್ರ ಸರ್ಕಾರದ ನಿಲುವನ್ನು ನಮ್ಮ ಸಂಘಟನೆಯು ಖಂಡಿಸುತ್ತದೆ ಎಂದರು.
ರಾಜ್ಯ ಸಮಿತಿ ಸದಸ್ಯ ಮಾಲತೇಶ ಪೂಜಾರ ಮಾತನಾಡಿ, ಕೆರೆ ತುಂಬಿಸುವ ಯೋಜನೆಗಳಿಂದ ಜಿಲ್ಲೆಯಲ್ಲಿ ೫೦ ಕೆರೆಗಳು ಕೂಡ ತುಂಬಿಲ್ಲ. ಜನ-ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೆರೆ ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ರೈತ ಮುಖಂಡರಾದ ಗಂಗಣ್ಣ ಎಲಿ, ಸುರೇಶ ಚಲವಾದಿ, ದಿಳ್ಳೆಪ್ಪ ಮಣ್ಣೂರ, ಶಿವಯೋಗಿ ಹೊಸಗೌಡ್ರ, ಗುರುರಾಜ ಇತರರು ಇದ್ದರು.