- ವಿಧಾನಸೌಧದಲ್ಲಿ ಭದ್ರಾ ಅಚ್ಚುಕಟ್ಟು ರೈತರ ಸಮಸ್ಯೆ ಬಗ್ಗೆ ಸಿಎಂ-ನೀರಾವರಿ ಸಚಿವರ ಬಳಿ ಎಸ್ಸೆಸ್ಸೆಂ ಚರ್ಚೆ - - -
ಭದ್ರಾ ಅಚ್ಚುಕಟ್ಟು ರೈತರ ಹಿತಾಸಕ್ತಿ ಕಾಪಾಡಲು ಹಾಗೂ ಮುಂಬರುವ ಬೇಸಿಗೆ ಹಂಗಾಮಿನ ಬೆಳೆಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸಲು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನೇತೃತ್ವದಲ್ಲಿ ಜಲ ಸಂಪನ್ಮೂಲ ಸಚಿವ ಚಲುವರಾಯ ಸ್ವಾಮಿ ಸಮಕ್ಷಮ ಮಹತ್ವದ ಸಭೆ ನಡೆಯಿತು.
ವಿಧಾನಸೌಧದಲ್ಲಿ ಸಿಎಂ ಡಿ.ಕೆ.ಶಿವಕುಮಾರ ಅಧ್ಯಕ್ಷತೆ ಸಭೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಸಮರ್ಥ ಶಾಮನೂರು ಸೇರಿದಂತೆ ಜಿಲ್ಲೆಯ ಶಾಸಕರು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಎದುರಿಸುತ್ತಿರುವ ನೀರಾವರಿ ಸಮಸ್ಯೆಗಳ ಬಗ್ಗೆ ಜಲ ಸಂಪನ್ಮೂಲ ಸಚಿವ ಚಲುವರಾಯ ಸ್ವಾಮಿ ಗಮನಕ್ಕೆ ತಂದರು.ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಮುಂಗಾರು ಹಂಗಾಮಿನಲ್ಲಿ ಬೆಳೆ ಬೆಳೆಯಲು ಸಮರ್ಪಕ ನೀರು ಲಭ್ಯವಾಗದ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ರೈತ ಕುಟುಂಬಗಳ ಜೀವನೋಪಾಯ ಹಾಗೂ ಆರ್ಥಿಕ ಸ್ಥಿತಿಗತಿಗಳ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಈ ಸ್ಥಿತಿಯಲ್ಲಿ ಡ್ಯಾಂನಲ್ಲಿ ಲಭ್ಯ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಬೇಸಿಗೆ ಹಂಗಾಮಿನ ಬೆಳೆಗೆ ನಿರಂತರ ಹರಿಸುವುದು ಅತ್ಯಂತ ಅಗತ್ಯ ಎಂದು ಎಸ್.ಎಸ್. ಮಲ್ಲಿಕಾರ್ಜುನ ಒತ್ತಾಯಿಸಿದರು.
ಡಿಸೆಂಬರ್ ಮೊದಲ ವಾರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಕರೆದು, ಬೇಸಿಗೆ ಹಂಗಾಮಿಗೆ ನಿರಂತರ ನೀರು ಹರಿಸುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಸಚಿವ, ಸಂಸದರು, ಶಾಸಕರ ಒತ್ತಾಯಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಭದ್ರಾ ಬಲದಂಡೆ ಕಾಲುವೆಯಲ್ಲಿ ನೀರು ಹರಿಸುವುದನ್ನು ಸ್ಥಗಿತಗೊಳಿಸಿ, ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜಲಾಶಯದ ನೀರಿನ ಲಭ್ಯತೆ ಹಾಗೂ ರೈತರ ಅಗತ್ಯಗಳ ಕುರಿತು ವಿಸ್ತೃತವಾಗಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಆದೇಶಿಸಿದರು.
ರೈತರ ಜೀವನೋಪಾಯ, ಕೃಷಿ ಚಟುವಟಿಕೆಗಳು ಹಾಗೂ ಆರ್ಥಿಕ ಹಿತಾಸಕ್ತಿಗಳ ರಕ್ಷಣೆಗೆ ಆದ್ಯತೆ ನೀಡಲಾಗಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಂಬರುವ ಹಂಗಾಮಿನಲ್ಲಿ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲೆಯ ಜನಪ್ರತಿನಿಧಿಗಳು ಸಿಎಂ, ಸಚಿವರಿಗೆ ಮನವಿ ಮಾಡಿದರು.
-19ಕೆಡಿವಿಜಿ9: ಬೆಂಗಳೂರಿನ ವಿಧಾನಸೌಧದ ಪ್ರವೇಶ ದ್ವಾರದ ಬಳಿ ನೀರಾವರಿ ಸಚಿವ ಎನ್.ಚಲುವರಾಯ ಸ್ವಾಮಿ ಜೊತೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಸಮರ್ಥ ಎಂ. ಶಾಮನೂರು ಇತರರು ಇದ್ದರು. -19ಕೆಡಿವಿಜಿ10: ಬೆಂಗಳೂರಿನ ವಿಧಾನಸೌಧದಲ್ಲಿ ಭದ್ರಾ ನೀರಿನ ವಿಚಾರವಾಗಿ ನಡೆದ ಸಭೆಯಲ್ಲಿ ಸಚಿವ ಎನ್.ಚಲುವರಾಯ ಸ್ವಾಮಿ ಜೊತೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಸಮರ್ಥ ಎಂ. ಶಾಮನೂರು ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.