ಕನ್ನಡಪ್ರಭ ವಾರ್ತೆ ಸಕಲೇಶಪುರವಿಶ್ವಗುರು ಬಸವಣ್ಣನವರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಕುರಿತು ಪ್ರಚೋದನಕಾರಿ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ಲೇಖಕ ರವಿ ಹಂಜಿ ವಿರುದ್ಧ ಪ್ರಕರಣ ದಾಖಲಿಸಿ, ಕೂಡಲೇ ಬಂಧಿಸಬೇಕು ಹಾಗೂ ವಿವಾದಿತ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭೆಯ ತಾಲೂಕು ಘಟಕದ ಅಧ್ಯಕ್ಷ ಎಸ್.ಪಿ. ದಿನೇಶ್ ಒತ್ತಾಯಿಸಿದರು.ಪಟ್ಟಣದಲ್ಲಿ ಮಾತನಾಡಿದ ಅವರು, ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಕುರಿತು ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಲೇಖಕ ರವಿ ಹಂಜಿ ಬಸವಭಕ್ತರು ಮತ್ತು ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು. ಇಂತಹ ಹೇಳಿಕೆಗಳು ಸಮಾಜದ ಸ್ವಾಸ್ಥ್ಯ ಕದಡುವ ಸಾಧ್ಯತೆಯಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಬೇಕು. ವಿವಾದಿತ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದರು. ಕರ್ನಾಟಕ ಸರ್ಕಾರ ಈಗಾಗಲೇ ಬಸವಣ್ಣನವರ ಸಾಮಾಜಿಕ ಹಾಗೂ ಸಂವಿಧಾನಾತ್ಮಕ ತತ್ವಗಳನ್ನು ಪರಿಗಣಿಸಿ ಅವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ. ಅಲ್ಲದೆ, ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಆದೇಶಿಸಿದೆ. ಇಂತಹ ಸಂದರ್ಭದಲ್ಲಿ ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.ಮಹಾಸಭೆಯ ಮಹಿಳಾ ಘಟಕದ ಅಧ್ಯಕ್ಷೆ ಚೈತ್ರ ಮಾತನಾಡಿ, ಆದರೆ ಬಸವಣ್ಣನವರನ್ನು ಕೊಲೆಗಡುಕ, ದರೋಡೆಕೋರ ಎಂದು ಬಿಂಬಿಸುವುದು ಹಾಗೂ ಬಿಜ್ಜಳನ ಖಜಾನೆಯನ್ನು ದುರುಪಯೋಗಪಡಿಸಿಕೊಂಡು ಶರಣ ದಾಸೋಹ ನಡೆಸಿದರು ಎಂಬಂತಹ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.