ಕಳಪೆ ಜೋಳದ ಬೀಜ ವಿತರಿಸಿದ ಕಂಪನಿ, ಮಾಲೀಕರ ವಿರುದ್ಧ ಕ್ರಮಕ್ಕೆ ಆಗ್ರಹ

KannadaprabhaNewsNetwork |  
Published : Nov 25, 2026, 02:30 AM IST
 ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಹಸೀಲ್ದಾರ್ ರೇಣುಕಾಗೆ ರೈತ ಸಂಘದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು | Kannada Prabha

ಸಾರಾಂಶ

ರೈತರು ಸಾಲಸೋಲ ಮಾಡಿ ಹೆಚ್ಚಿನ ನಿರೀಕ್ಷೆಯೊಂದಿಗೆ ಜೋಳದ ಬಿತ್ತನೆ ಕಾರ್ಯ ಕೈಗೊಂಡಿದ್ದಾರೆ

ಕಂಪ್ಲಿ: ಜಿಲ್ಲೆಯಾದ್ಯಂತ ರೈತರಿಗೆ ಕಳಪೆ ಹಾಗೂ ಕಲಬೆರಕೆಯ ಹೈಟೆಕ್-3201 ತಳಿಯ ಜೋಳದ ಬೀಜ ವಿತರಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಕಂಪನಿ ಹಾಗೂ ಬೀಜ ಮಾರಾಟ ಮಾಡಿದ ಅಂಗಡಿ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಕಳಪೆ ಬೀಜದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ತಕ್ಷಣ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಹಸೀಲ್ದಾರ್ ರೇಣುಕಾ ಹಾಗೂ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಎಡಿಎ ಎಂ. ದಯಾನಂದ್ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿ ಕಳಪೆ ಬೀಜ ವಿತರಣೆಯಿಂದ ರೈತರಿಗೆ ಉಂಟಾಗಿರುವ ತೊಂದರೆ ಹಾಗೂ ಬೆಳೆ ನಷ್ಟದ ಕುರಿತು ಅಧಿಕಾರಿಗಳ ಗಮನ ಸೆಳೆದರು.

ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಬಿ.ವಿ. ಗೌಡ ಮಾತನಾಡಿ, ರೈತರು ಸಾಲಸೋಲ ಮಾಡಿ ಹೆಚ್ಚಿನ ನಿರೀಕ್ಷೆಯೊಂದಿಗೆ ಜೋಳದ ಬಿತ್ತನೆ ಕಾರ್ಯ ಕೈಗೊಂಡಿದ್ದಾರೆ. ಆದರೆ ಹೈಟೆಕ್-3201 ತಳಿಯ ಬೀಜಗಳು ಕಳಪೆ ಹಾಗೂ ಕಲಬೆರಕೆಯಾಗಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬೆಳೆಯದೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆಗಾಗಿ ಖರ್ಚು ಮಾಡಿದ ಹಣ, ಗೊಬ್ಬರ, ಔಷಧ ಹಾಗೂ ಕೃಷಿ ಕಾರ್ಮಿಕರ ವೆಚ್ಚವೂ ವ್ಯರ್ಥವಾಗುವ ಆತಂಕ ಎದುರಾಗಿದೆ. ಇದರಿಂದ ರೈತರ ಬದುಕು ಮತ್ತಷ್ಟು ದುಸ್ತರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳಪೆ ಮತ್ತು ಕಲಬೆರಕೆಯ ಬೀಜಗಳ ವಿತರಣೆಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು. ಬೀಜದ ಗುಣಮಟ್ಟ ಪ್ರಯೋಗಾಲಯದಲ್ಲಿ ಪರೀಕ್ಷಿಸಿ ರೈತರಿಗೆ ಕಳಪೆ ಬೀಜ ಪೂರೈಸಿರುವ ಕಂಪನಿಯ ಜವಾಬ್ದಾರಿ ನಿಗದಿಪಡಿಸಬೇಕು. ಅಲ್ಲದೆ, ನಿಯಮ ಉಲ್ಲಂಘಿಸಿ ಬೀಜ ಮಾರಾಟ ಮಾಡಿರುವ ಅಂಗಡಿ ಮಾಲೀಕರ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಬೆಳೆ ಹಾನಿಗೊಳಗಾದ ರೈತರ ಜಮೀನುಗಳಿಗೆ ಕೃಷಿ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳ ತಂಡ ಖುದ್ದಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಬೇಕು. ವೈಜ್ಞಾನಿಕವಾಗಿ ಬೆಳೆ ಹಾನಿ ಸಮೀಕ್ಷೆ ಕೈಗೊಂಡು ನಷ್ಟದ ಪ್ರಮಾಣ ಗುರುತಿಸಿ ಅರ್ಹ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕು.ರೈತರಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರೈತರ ಸಮಸ್ಯೆ ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕಲ್ಪಿಸದಿದ್ದರೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ನಿರ್ಲಕ್ಷ್ಯ ತೋರಿದರೆ ರೈತ ಸಂಘದಿಂದ ಜಿಲ್ಲಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕಾಧ್ಯಕ್ಷ ವಿ.ವೀರೇಶ್, ಮುಖಂಡ ಕಾಗೆ ಈರಣ್ಣ, ಎ.ಸಣ್ಣ ಜಡೆಪ್ಪ, ಲಿಂಗಪ್ಪ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್ ಬಳಕೆ ದುಷ್ಪರಿಣಾಮ ಎಚ್ಚರ ವಹಿಸಿ: ಮಾರುತಿ ಬಾಗಡೆ
ಕಾವೇರಿ ಸಂರಕ್ಷಣೆಗೆ ಯೋಜನೆ ರೂಪಿಸಿ: ರವಿಶಂಕರ್ ಗುರೂಜಿ