ಕನ್ನಡಪ್ರಭ ವಾರ್ತೆ ಬೆಳಗಾವಿ ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರು ಮಾಹಿತಿ ಹಕ್ಕು ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಕಾಯ್ದೆಯನ್ನು ದುರ್ಬಲಗೊಳಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರು ಮಾಹಿತಿ ಹಕ್ಕು ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಕಾಯ್ದೆಯನ್ನು ದುರ್ಬಲಗೊಳಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳದಿದ್ದರೇ ನ್ಯಾಯಾಲಯದ ಮೊರೆ ಹೋಗಿ ಕಾನೂನು ಹೋರಾಟ ಆರಂಭಿಸಲಾಗುವುದು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಎಚ್ಚರಿಕೆ ನೀಡಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಸಾಮಾಜಿಕ ಹೋರಾಟಗಾರರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರು ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ಮತ್ತು ಆಯುಕ್ತರ ವಿರುದ್ಧ ದಾಖಲೆ ಸಮೇತ ಗಂಭೀರ ದೂರುಗಳನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದರು ಎಂದರು.
ಸರ್ಕಾರವು ಈ ದೂರುಗಳನ್ನು ಅಗತ್ಯ ಕ್ರಮಕ್ಕಾಗಿ ರಾಜ್ಯಪಾಲರಿಗೆ ರವಾನಿಸಿ ಸುಮಾರು 5 ತಿಂಗಳು ಕಳೆದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಭವನದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಪರಿಗಣಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದು ತಿಳಿಸಲಾಗಿದೆ ಎಂದರು.
ಆಡಳಿತದ ಹಿತದೃಷ್ಟಿಯಿಂದ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಸಾಧ್ಯವಾಗದ ಗಂಭೀರ ಪ್ರಕರಣಗಳಲ್ಲಿ ಸಂವಿಧಾನದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಸೂಕ್ತ ನಿರ್ದೇಶನ ನೀಡುವುದು ಅವರ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಆದರೆ ಮಾಹಿತಿ ಆಯೋಗಕ್ಕೆ ಸಂಬಂಧಿಸಿದ ಗಂಭೀರ ಆರೋಪಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಿದರು.
ರಾಜ್ಯ ಮಾಹಿತಿ ಆಯೋಗವು ಸಾರ್ವಜನಿಕರನ್ನು ದಾರಿತಪ್ಪಿಸುವುದರ ಜೊತೆಗೆ ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿರುವ ಮಾಹಿತಿ ಹಕ್ಕು ಕಾಯ್ದೆಯನ್ನೇ ದುರ್ಬಲಗೊಳಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಮಾಹಿತಿ ಆಯುಕ್ತರ ನೇಮಕಾತಿಗೂ ಮುನ್ನ ಶೋಧನಾ ಸಮಿತಿ ರಚಿಸಬೇಕೆಂಬ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸದೇ ನೇಮಕಾತಿ ನಡೆಸಲಾಗಿದೆ. ಈ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿಯಿದೆ. ಅಲ್ಲದೆ, ಒಬ್ಬ ವ್ಯಕ್ತಿ 25 ಅಥವಾ ಅದಕ್ಕಿಂತ ಹೆಚ್ಚು ಮಾಹಿತಿ ಹಕ್ಕು ಅರ್ಜಿಗಳನ್ನು ಸಲ್ಲಿಸಿದರೆ ಅದನ್ನು ಕಾಯ್ದೆಯ ದುರ್ಬಳಕೆ ಎಂದು ಪರಿಗಣಿಸಿರುವ ಆಯೋಗದ ನಿಲುವು ಕಾನೂನುಬದ್ಧವಲ್ಲ ಎಂದರು.
ಮಾಹಿತಿ ಹಕ್ಕು ಕಾರ್ಯಕರ್ತರನ್ನು ಕಪ್ಪುಪಟ್ಟಿಗೆ ಸೇರಿಸಲು ಯಾವುದೇ ಕಾನೂನು ಅವಕಾಶವಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ ಲಿಖಿತವಾಗಿ ಸ್ಪಷ್ಟಪಡಿಸಿದ್ದರೂ, 22 ಕಾರ್ಯಕರ್ತರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಆಯುಕ್ತರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಸರ್ಕಾರಿ ನೌಕರರ ವೈಯಕ್ತಿಕ ಮಾಹಿತಿಯನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲು ಅವಕಾಶವಿಲ್ಲ ಎಂಬ ನೆಪದಲ್ಲಿ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ಹಾಗೂ ಆಯುಕ್ತರು ಕೇಂದ್ರ ಮತ್ತು ರಾಜ್ಯ ಮಾಹಿತಿ ಆಯೋಗಗಳ ನಿಯಮಾವಳಿಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಮಾಹಿತಿ ಹಕ್ಕು ಕಾರ್ಯಕರ್ತರನ್ನು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಕಾರ್ಯವೈಖರಿಗೆ ಸಂಬಂಧಿಸಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಸರ್ಕಾರದಿಂದ ರಾಜ್ಯಭವನಕ್ಕೆ ಸಲ್ಲಿಕೆಯಾಗಿರುವ ಪ್ರತಿಯೊಂದು ದೂರಿನ ಬಗ್ಗೆಯೂ ಸಮಗ್ರ ವಿಚಾರಣೆ ನಡೆಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೇ ಕಾನೂನು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.