ಕನ್ನಾಯಕನಹಳ್ಳಿಗೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ

KannadaprabhaNewsNetwork |  
Published : Sep 10, 2026, 02:00 AM IST
)- 9ಎಚ್‌ ಆರ್‌ ಪಿ 3 ಹರಪನಹಳ್ಳಿ: ತಾಲೂಕಿನ ಕನ್ನಾಯಕನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು  ಹಾಗೂ ಗ್ರಾಮಸ್ಥರು ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು. 2)-  ಕೆ.ಅಶೋಕ (ಕೋಟ್‌ ಗೆ)  | Kannada Prabha

ಸಾರಾಂಶ

ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಹಿನ್ನೆಲೆ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೇ ಶಿಕ್ಷಣಕ್ಕೂ ಅಡಚಣೆ

ಹರಪನಹಳ್ಳಿ: ತಾಲೂಕಿನ ಕನ್ನಾಯಕನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬುಧವಾರ ಹರಪನಹಳ್ಳಿ–ಹೊಳಲು ಮುಖ್ಯ ರಸ್ತೆಯಲ್ಲಿ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಗ್ರಾಮದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡು,ಹಲವು ವರ್ಷಗಳಿಂದ ಗ್ರಾಮಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ಗ್ರಾಮಕ್ಕೆ ಬಸ್ ಸಂಪರ್ಕ ಕಲ್ಪಿಸದಿರುವುದು ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕನ್ನಾಯಕನಹಳ್ಳಿ ಗ್ರಾಮದಲ್ಲಿ ಸುಮಾರು 1ಸಾವಿರ ಜನಸಂಖ್ಯೆ ಹಾಗೂ 300 ಕ್ಕೂ ಹೆಚ್ಚು ಮನೆಗಳಿದ್ದು, ಗ್ರಾಮದ ವಿದ್ಯಾರ್ಥ್ಯಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಪ್ರತಿನಿತ್ಯ ಸುಮಾರು 3 ಕಿಮೀ ದೂರ ಕಾಲ್ನಡಿಗೆಯಲ್ಲಿ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಿಂದ ಪಟ್ಟಣಕ್ಕೆ ನೇರ ಬಸ್ ಸಂಪರ್ಕವಿಲ್ಲದ ಕಾರಣ ವಿದ್ಯಾರ್ಥಿಗಳು ಹಾಗೂ ಮಹಿಳೆಯರು, ವೃದ್ಧರು ಸೇರಿದಂತೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಅಳಲು ತೊಡಗಿಕೊಂಡರು.

ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಹಿನ್ನೆಲೆ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೇ ಶಿಕ್ಷಣಕ್ಕೂ ಅಡಚಣೆ ಉಂಟಾಗುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆ ಸೇರಿದಂತೆ ಅಗತ್ಯ ಸೇವೆಗಳಿಗೆ ತೆರಳಲು ಕೂಡ ಗ್ರಾಮಸ್ಥರು ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಾಗಿದೆ ಎಂದರು.

ಗ್ರಾಮಕ್ಕೆ ಬಸ್ ಸಂಪರ್ಕ ಕಲ್ಪಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಗ್ರಾಮದ ಜನರ ಬಹುದಿನಗಳ ಬೇಡಿಕೆಯಾಗಿರುವ ಬಸ್ ಸೌಕರ್ಯ ಕೂಡಲೇ ಕಲ್ಪಿಸಬೇಕು. ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಬಸ್ ಸಂಚಾರ ಆರಂಭಿಸುವ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕನ್ನಾಯಕನಹಳ್ಳಿ ಗ್ರಾಮಕ್ಕೆ ತಕ್ಷಣ ಬಸ್ ಸೌಲಭ್ಯ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಕೆ.ಅಶೋಕ್, ಎಂ.ರವಿ, ಗ್ರಾ ಪಂ ಸದಸ್ಯ ಡಿಗಾನಾಯ್ಕ್, ಪ್ರಕಾಶ್ ನಾಯ್ಕ್, ಭೋವಿ ಹಾಲೇಶ್, ಹನುಮಂತಪ್ಪ, ಲಕ್ಕಪ್ಪ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಇದ್ದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ನಮ್ಮ ಗ್ರಾಮದಲ್ಲಿ ಸಾರಿಗೆ ಇಲಾಖೆ ಬಸ್ ನೋಡೆಯಿಲ್ಲ, ನಿತ್ಯ ನೂರಾರು ವಿದ್ಯಾರ್ಥಿಗಳು ಊರಿಂದ ಶಾಲಾ ಕಾಲೇಜುಗಳಿಗೆ ತೆರಳುವಾಗ ಸುಮಾರು 3 ಕಿಮೀ ನಡೆದುಕೊಂಡೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಅನೇಕ ಭಾರಿ ಸಂಬಂಧಿಸಿದ ಅಧಿಕಾರಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ, ಆದ್ದರಿಂದ ಕೂಡಲೇ ನಮ್ಮ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕನ್ನಾಯಕನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕೆ.ಅಶೋಕ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಷ್ಟಗಿ ತಾಲೂಕು ಬರಪೀಡಿತ ಘೋಷಣೆಗೆ ಆಗ್ರಹ, ರೈತರ ಪಾದಯಾತ್ರೆ
ಜೋಯಿಡಾದಲ್ಲಿ ಅರಣ್ಯ ಕಾಲೇಜು ಪ್ರಾರಂಭಿಸಲು ಅರಣ್ಯ ಸಚಿವರಿಗೆ ಮನವಿ