ರಾಮನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅಗೌರವಯುತವಾಗಿ ಮಾತನಾಡಿರುವ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸಮತಾ ಸೈನಿಕ ದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುವ ಅಮಿತ್ ಶಾ, ಕೊಳಕು ಜಾತಿ ಮನಸ್ಥಿತಿಯಿಂದ ಇಂತಹ ಹೇಳಿಕೆ ನೀಡಿದ್ದಾರೆ. ಅಮಿತ್ ಶಾ ಹೇಳಿಕೆಯನ್ನು ಕರ್ನಾಟಕ ಸಮತಾ ಸೈನಿಕ ದಳ ಖಂಡಿಸುತ್ತದೆ ಎಂದು ಹೇಳಿದರು.
ಅಂಬೇಡ್ಕರ್ ರಚಿತ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಅದು ಕೋಟ್ಯಂತರ ಭಾರತೀಯರ ಬಾಳಿಗೆ ಬೆಳಕಾಗಿದೆ. ಜ್ಞಾನದ ಮೂಲಕ ಇಡೀ ವಿಶ್ವದಲ್ಲಿಯೇ ಗೌರವವನ್ನು ಪಡೆದಿರುವ ಅಂಬೇಡ್ಕರ್ ಅವರ ಕಾರ್ಯವನ್ನು ಸಹಿಸಿಕೊಳ್ಳಲಾಗದೆ ಅಸಹನೆಯಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ಇದು ಇಡೀ ಭಾರತದ ಶೋಷಿತರ, ಬಡವರ ಹಾಗೂ ಆತ್ಮಸ್ಥೈರ್ಯ ಗೌರವ ಕುಗ್ಗಿಸುವ ಕುತಂತ್ರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂಘಟನೆಯ ಮುಖಂಡರು ಹಾಜರಿದ್ದರು.ಪೊಟೋ೧೯ಸಿಪಿಟಿ೭: ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸಮತಾ ಸೈನಿಕ ದಳದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.